ಬೆಂಗಳೂರು: ಎಸಿಬಿ ರಚನೆ (ಭ್ರಷ್ಟಾಚಾರ ನಿಗ್ರಹ ದಳ) ಪ್ರಶ್ನಿಸಿದ್ದ ಪಿಐಎಲ್ ಸಂಬಂಧ ಹೈಕೋರ್ಟ್ ಇಂದು ತೀರ್ಪು ನೀಡಿದ್ದು, ಎಸಿಬಿ ರಚನೆ ಆದೇಶವನ್ನು ರದ್ದು ಮಾಡಿ, ಎಸಿಬಿಯನ್ನು ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಆದೇಶಿಸಿದೆ.
ಈ ಕುರಿತು ಚಿದಾನಂದ ಅರಸ್, ಬೆಂಗಳೂರು ವಕೀಲರ ಸಂಘ ಹಾಗೂ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾ.ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ.
ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ಕೋರ್ಟ್, ಎಸಿಬಿಗೆ ಪೊಲೀಸ್ ಠಾಣೆ ಸ್ಥಾನಮಾನ ರದ್ದುಪಡಿಸಿದೆ. ಅಲ್ಲದೆ ಲೋಕಾಯುಕ್ತ ಪೊಲೀಸರಿಗೆ ಮತ್ತೆ ಅಧಿಕಾರ ನೀಡಿದೆ. ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ಮರುಸ್ಥಾಪಿಸಿದೆ.
ಭ್ರಷ್ಟಾಚಾರ ಆರೋಪ ಹೊತ್ತವರು ಪಾರಾಗಬಾರದು. ಹೀಗಾಗಿ ಲೋಕಾಯುಕ್ತ ಪೊಲೀಸರೇ ತನಿಖೆ ಮುಂದುವರಿಸಬೇಕು ಎಂದು ಕೋರ್ಟ್ ಎಲ್ಲಾ ಪ್ರಕರಣಗಳನ್ನೂ ಲೋಕಾಯುಕ್ತ ಪೊಲೀಸರಿಗೆ ವರ್ಗಾವಣೆ ಮಾಡಿದೆ.
ಜಾತಿ ಆಧಾರದಲ್ಲಿ ನೇಮಕವಿಲ್ಲ: ಲೋಕಾಯುಕ್ತಕ್ಕೆ ಮೂರು ವರ್ಷದ ಅವಧಿಗೆ ಅಧಿಕಾರಿಗಳ ನೇಮಕವಾಗಬೇಕು. ಲೋಕಾಯುಕ್ತ, ಉಪಲೋಕಾಯುಕ್ತರ ನೇಮಕ ವೇಳೆ ಅರ್ಹತೆ ಪರಿಗಣಿಸಬೇಕೇ ಹೊರತು ಜಾತಿ ಆಧರಿಸಿ ಲೋಕಾಯುಕ್ತ, ಉಪಲೋಕಾಯುಕ್ತ ನೇಮಕವಾಗಬಾರದು ಎಂದು ಹೈಕೋರ್ಟ್ ಸೂಚನೆ ನೀಡಿದೆ.