Advertisement

ಅಸಮರ್ಪಕ ಸಮವಸ್ತ್ರ, ಶೂ ವಿತರಣೆಗೆ ಹೈಕೋರ್ಟ್‌ ತರಾಟೆ

11:24 PM Feb 14, 2023 | Team Udayavani |

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಸಮವಸ್ತ್ರ ಮತ್ತು ಶೂ ವಿತರಿಸಿರುವ ಬಗ್ಗೆ ಅಗತ್ಯ ದಾಖಲೆಗಳೊಂದಿಗೆ ಮಾಹಿತಿ ನೀಡದ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್‌, ಹಿರಿಯ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸಿದರೆ ಎಲ್ಲ ಸರಿಹೋಗುತ್ತದೆ ಎಂದು ಎಚ್ಚರಿಕೆ ನೀಡಿದೆ.

Advertisement

ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ ಮತ್ತು ಎರಡು ಜೊತೆ ಕಾಲು ಚೀಲ ನೀಡಬೇಕು ಎಂದು 2019ರ ಆ.28ರಂದು ಹೈಕೋರ್ಟ್‌ ಹೊರಡಿಸಿರುವ ಆದೇಶ ಪಾಲನೆಯಾಗಿಲ್ಲ ಎಂದು ಆರೋಪಿಸಿ ಕೊಪ್ಪಳ ಜಿಲ್ಲೆ ಯ ಮಾಸ್ಟರ್‌ ಮಂಜುನಾಥ್‌ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾ. ಕೆ.ಎಸ್‌. ಹೇಮಲೇಖ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರ ಸಲ್ಲಿಸಿದ ಪ್ರಮಾಣಪತ್ರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಸಮವಸ್ತ್ರ, ಶೂ ನೀಡಿರುವುದನ್ನು ಪುಷ್ಠಿಕರಿಸುವ ದಾಖಲೆ ಒದಗಿಸಿಲ್ಲ. ವಿದ್ಯಾರ್ಥಿಗಳಿಗೆ ಸಮವಸ್ತ್ರ ತಲುಪಿರುವುದು ದೇವರಿಗೆ ಮಾತ್ರ ಗೊತ್ತಾಗಬೇಕು. ಸರ್ಕಾರವು ಕೋರ್ಟ್‌ ಆದೇಶ ಪಾಲಿಸಿಲ್ಲ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಒದಗಿಸಬೇಕೆಂಬ ಮನೋಭಾವ ಸರ್ಕಾರಕ್ಕೆ ಇದ್ದರೆ, ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ನ್ಯಾಯಾಂಗ ನಿಂದನೆ ಆರೋಪದಿಂದ ತಪ್ಪಿಸಿಕೊಳ್ಳಬೇಕೆಂದು ಕೋಟ್‌ಗೆ ಸುಮ್ಮನೆ ಪ್ರಮಾಣಪತ್ರ ಸಲ್ಲಿಸಿದರೆ ಸಾಲದು. ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ಹೊರಿಸಿ ಜೈಲಿಗೆ ಕಳಿಸಿದರೆ ಆಗ ಗೊತ್ತಾಗುತ್ತದೆ ಎಚ್ಚರಿಸಿದರು. ಅಲ್ಲದೆ ಈ ಬಗ್ಗೆ ಡಿಡಿಪಿಐಗಳು ದಾಖಲೆ ಪಡೆದು ವರದಿ ಸಲ್ಲಿಸಲು ತಾಕೀತು ಮಾಡಿ ವಿಚಾರಣೆಯನ್ನು 2 ವಾರ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next