Advertisement

High Court; ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

08:19 PM Sep 11, 2023 | Team Udayavani |

ಬೆಂಗಳೂರು: “ಅಸಿಂಧು’ ಆದೇಶಕ್ಕೆ ತಡೆ ಪಡೆದುಕೊಳ್ಳುವಲ್ಲಿ ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ಅವರಿಗೆ ಹಿನ್ನಡೆ ಆಗಿದ್ದು, ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ತನಕ ಅಸಿಂಧು ಆದೇಶಕ್ಕೆ ತಡೆ ನೀಡುವಂತೆ ಕೋರಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

Advertisement

ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ತಾವು ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಹೊರಡಿಸಿರುವ ಆದೇಶಕ್ಕೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೂ ತಡೆಯಾಜ್ಞೆ ನೀಡುವಂತೆ ಕೋರಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆಯನ್ನು ಸೆ.8ರಂದು ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿದೆ.

“ಅಸಿಂಧು’ ಆದೇಶಕ್ಕೆ ತಡೆ ನೀಡಲು ನಿರಾಕರಿಸಿರುವ ನ್ಯಾಯಪೀಠ, ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿದೆ. ವಿಸ್ತೃತ ಆದೇಶ ಇನ್ನೂ ಬಿಡುಗಡೆಯಾಗಬೇಕಿದೆ. ಅಸಿಂಧು ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ನಲ್ಲೇ ತಡೆಯಾಜ್ಞೆ ಪಡೆದುಕೊಳ್ಳುವುದು ಪ್ರಜ್ವಲ್‌ ರೇವಣ್ಣ ಅವರ ಮುಂದಿರುವ ಆಯ್ಕೆಯಾಗಿದೆ.

ಸಂಸದರಾಗಿ ಪ್ರಜ್ವಲ್‌ ರೇವಣ್ಣ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ನ್ಯಾಯಮೂರ್ತಿ ಕೆ.ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೆ.1ರಂದು ತೀರ್ಪು ನೀಡಿ, ಅದರ ಪ್ರತಿಯನ್ನು ಸಂಸತ್‌ ಸ್ಪೀಕರ್‌ಗೆ ಕಳುಹಿಸಲು ರಿಜಿಸ್ಟ್ರಿಗೆ ನಿರ್ದೇಶಿಸಿತ್ತು. ಸೆ.4ರಂದು ಹೈಕೊರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದ ಪ್ರಜ್ವಲ್‌, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೆ ಅಸಿಂಧು ಆದೇಶಕ್ಕೆ ತಡೆ ನೀಡುವಂತೆ ಕೋರಿದ್ದರು. ಸೆ.6ರಂದು ಆ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡಿದ್ದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸಲು ಮೂಲ ಚುನಾವಣಾ ತಕರಾರು ಅರ್ಜಿದಾರ ದೇವರಾಜೇಗೌಡಗೆ ಸೆ.8ರವರೆಗೆ ಕಾಲಾವಕಾಶ ನೀಡಿತ್ತು.

ಶುಕ್ರವಾರ (ಸೆ.8) ಅರ್ಜಿ ವಿಚಾರಣೆಗೆ ಬಂದಾಗ ಪ್ರಜ್ವಲ್‌ ಪರ ಹಿರಿಯ ವಕೀಲ ಉದಯಹೊಳ್ಳ ಹಾಜರಾಗಿ, ಅಸಿಂಧು ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಲಾಗುವುದು. ಅಲ್ಲಿಯವರೆಗೆ ಅಸಿಂಧು ಆದೇಶಕ್ಕೆ ತಡೆ ನೀಡಬೇಕು.

Advertisement

ಮೇಲ್ಮನವಿ ಸಲ್ಲಿಸುವವರೆಗೆ ತಡೆಯಾಜ್ಞೆ ನೀಡಲು ಈ ನ್ಯಾಯಾಲಯಕ್ಕೆ ಅವಕಾಶವಿದೆ ಎಂದು ತಿಳಿಸಿ ಆ ಕುರಿತ ನಿಯಮಗಳನ್ನು ವಿವರಿಸಿದ್ದರು.

ದೇವರಾಜೇಗೌಡ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ, ಅಸಿಂಧು ಆದೇಶಕ್ಕೆ ತಡೆ ನೀಡಬಾರದು. ತಡೆ ನೀಡಲು ಈ ನ್ಯಾಯಾಲಯಕ್ಕೆ ಅವಕಾಶವಿಲ್ಲ. ಆದೇಶ ಹೊರಡಿಸಿದ ದಿನವೇ ತಡೆಗೆ ಕೋರಿ ಅರ್ಜಿ ಸಲ್ಲಿಸಬೇಕಿತ್ತು. ಆದರೆ, ಅರ್ಜಿ ಸಲ್ಲಿಸಲು ವಿಳಂಬ ಮಾಡಲಾಗಿದೆ ಎಂದು ಆಕ್ಷೇಪಿಸಿದ್ದರು.

ಮತ್ತೊಬ್ಬ ಅರ್ಜಿದಾರ ಎ.ಮಂಜು ಪರ ವಕೀಲರು, ರೇವಣ್ಣ ಅವರ ಮಧ್ಯಂತರ ಅರ್ಜಿಗೆ ತಮ್ಮ ಯಾವುದೇ ಆಕ್ಷೇಪಣೆ ಇಲ್ಲ ಎಂದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ತೀರ್ಪು ಕಾಯ್ದಿರಿಸಿತ್ತು. ಅದನ್ನು ಸೆ.11ರಂದು ಪ್ರಕಟಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next