Advertisement

ಮಹತ್ವದ ಹಿಜಾಬ್ ತೀರ್ಪು ನಾಳೆ ಪ್ರಕಟಿಸಲಿರುವ ಹೈಕೋರ್ಟ್

07:03 PM Mar 14, 2022 | Team Udayavani |

ಬೆಂಗಳೂರು: ಇಡೀ ರಾಷ್ಟ್ರದಲ್ಲಿ ಸುದ್ದಿಯಾಗಿ, ಪ್ರಪಂಚದ ಗಮನ ಸೆಳೆದು ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಮಂಗಳವಾರ (ಮಾ. 15)ಬೆಳಗ್ಗೆ 10.30 ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ.

Advertisement

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ನಿರ್ಬಂಧಿಸಿರುವ ಕ್ರಮ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ 11ನೇ ದಿನಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾ. ಕೃಷ್ಣ ಎಸ್‌. ದೀಕ್ಷಿತ್‌ ಹಾಗೂ ನ್ಯಾ. ಖಾಜಿ ಜೈಬುನ್ನಿಸಾ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಲ್ಲಿಕೆಯಾಗಿದ್ದ 10ಕ್ಕೂ ಹೆಚ್ಚು ಮುಖ್ಯ ಅರ್ಜಿಗಳು 25ಕ್ಕೂ ಹೆಚ್ಚು ಮಧ್ಯಂತರ ಅರ್ಜಿಗಳನ್ನು ಸತತ 11 ದಿನಗಳ ಕಾಲ 25 ತಾಸುಗಳಿಗೂ ಹೆಚ್ಚು ಸಮಯ ಹೈಕೋರ್ಟ್‌ ವಿಚಾರಣೆ ನಡೆಸಿತ್ತು.

ಅರ್ಜಿದಾರರು ಅಲ್ಲದೇ ಸರ್ಕಾರ, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕರು ಸೇರಿದಂತೆ ಉಳಿದ ಪ್ರತಿವಾದಿಗಳ ಪರವಾಗಿ ಒಟ್ಟು 25ಕ್ಕೂ ಹೆಚ್ಚು ವಕೀಲರು ತಮ್ಮ ವಾದಗಳನ್ನು ಮಂಡಿಸಿದ್ದರು.

ಉಡುಪಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಿಜಾಬ್‌ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಕಾಲೇಜಿನ ಐವರು ವಿದ್ಯಾರ್ಥಿನಿಯರು, ಸಮವಸ್ತ್ರದ ಜೊತೆಗೆ ಹಿಜಾಬ್‌ ಧರಿಸಿ ತರಗತಿಗಳಿಗೆ ಹಾಜರಾಗಲು ಅನುಮತಿ ನೀಡುವಂತೆ ಕೋರಿ ಕುಂದಾಪುರದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅರ್ಜಿಗಳನ್ನು ಸಲ್ಲಿಸಿದ್ದರು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ನಿರ್ಬಂಧಿಸಿ ರಾಜ್ಯ ಸರ್ಕಾರ ಫೆ.5ರಂದು ಹೊರಡಿಸಿರುವ ಆದೇಶವನ್ನೂ ಅರ್ಜಿಗಳಲ್ಲಿ ಪ್ರಶ್ನಿಸಲಾಗಿತ್ತು.

Advertisement

ಏಕಸದಸ್ಯ ಪೀಠದಲ್ಲಿ ವಿಚಾರಣೆ

ಈ ಅರ್ಜಿಗಳನ್ನು ಮೊದಲು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತ್ತು. ಎರಡು ದಿನ ವಾದ ಆಲಿಸಿದ್ದ ನ್ಯಾಯಪೀಠ, ಇದರಲ್ಲಿ ಸಾಂವಿಧಾನಿಕ ವಿಚಾರಗಳು ಅಡಕವಾಗಿರುವುದರಿಂದ ವಿಸ್ತೃತ ನ್ಯಾಯಪೀಠ ವಿಚಾರಣೆ ನಡೆಸುವುದು ಸೂಕ್ತ ಎಂದು ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾಯಿಸಿದ್ದರು. ಬಳಿಕ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಸ್ತೃತ ನ್ಯಾಯಪೀಠ ರಚನೆಯಾಗಿತ್ತು. ಫೆ.10ರಿಂದ ವಿಸ್ತೃತ ನ್ಯಾಯಪೀಠ ಅರ್ಜಿಗಳ ವಿಚಾರಣೆ ಆರಂಭಿಸಿತ್ತು.

ಮಧ್ಯಂತರ ಆದೇಶ

ಹಿಜಾಬ್‌ ವಿವಾದ ಕುರಿತಂತೆ ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳ ಕುರಿತ ಮುಂದಿನ ಆದೇಶವರೆಗೆ ಧರ್ಮ ಹಾಗೂ ನಂಬಿಕೆಯನ್ನು ಲೆಕ್ಕಿಸದೆ ಎಲ್ಲಾ ವಿದ್ಯಾರ್ಥಿಗಳು ತರಗತಿಯಲ್ಲಿ ಕೇಸರಿ ಶಾಲು, ಶಿರವಸ್ತ್ರ, ಹಿಜಾಬ್‌ ಮತ್ತು ಧಾರ್ಮಿಕ ಬಾವುಟಗಳನ್ನು ಧರಿಸುವುದನ್ನು ನಿರ್ಬಂಧಿಸಲಾಗಿದೆ. ಕಾಲೇಜು ಅಭಿವೃದ್ಧಿ ಸಮಿತಿಯು ವಿದ್ಯಾರ್ಥಿಗಳಿಗೆ ವಸ್ತ್ರ ಸಂಹಿತೆ ಮತ್ತು ಸಮವಸ್ತ್ರ ನಿಗದಿಪಡಿಸಿರುವ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಈ ಆದೇಶವನ್ನು ಸೀಮಿತಗೊಳಿಸಲಾಗಿದೆ ಎಂದು ವಿಸ್ತೃತ ನ್ಯಾಯಪೀಠ ಫೆ.11ರಂದು ಮಧ್ಯಂತರ ಆದೇಶ ಹೊರಡಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next