ಬೆಂಗಳೂರು: ಬಿಡದಿಯ ಧ್ಯಾನಪೀಠದ ನಿತ್ಯಾನಂದ ಸ್ವಾಮಿ ಹಾಗೂ ಅವರ ಐವರು ಶಿಷ್ಯಂದಿರ ವಿರುದ್ಧದ ಅತ್ಯಾಚಾರ ಮತ್ತಿತರ ಆರೋಪ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯದ ಮುಂದಿನ ಪ್ರಕ್ರಿಯೆಗಳಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಪ್ರಕರಣದಲ್ಲಿ ತಮ್ಮನ್ನು ಕೈ ಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ರಾಮನಗರ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ನಿತ್ಯಾನಂದ ಸ್ವಾಮಿ ಸೇರಿದಂತೆ ಆರು ಆರೋಪಿಗಳು ಸಲ್ಲಿಸಿದ್ದ ಕ್ರಿಮಿನಲ್ ಪುನರ್‌ಪರಿಶೀಲನಾ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ನ್ಯಾ. ಆರ್.ಬಿ ಬೂದಿಹಾಳ್ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಶನ್ ಆರು ಅರ್ಜಿದಾರರ ವಿರುದ್ಧ ಬುಧವಾರ ಅಧೀನ ನ್ಯಾಯಾಲಯದಲ್ಲಿ ಆರೋಪ ನಿಗದಿ ಮಾಡಲಿದೆ. ಮೇಲ್ಮನವಿ ಅರ್ಜಿ ವಿಚಾರಣೆಯೂ ಬಾಕಿಯಿದೆ. ಹೀಗಾಗಿ ಅಧೀನ ನ್ಯಾಯಾಲಯದ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡುವಂತೆ ನ್ಯಾಯಪೀಠಕ್ಕೆ ಕೋರಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರ ಕ್ರಿಮಿನಲ್ ಮೇಲ್ಮನವಿ ಅರ್ಜಿ ವಿಚಾರಣೆ ಪೂರ್ಣವಾಗುವ ತನಕ ಅಧೀನ ನ್ಯಾಯಾಲಯದ ಮುಂದಿನ ಎಲ್ಲ ಪ್ರಕ್ರಿಯೆಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿತು.
ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ, ಜೀವ ಬೆದರಿಕೆ, ಒಳಸಂಚು ಸೇರಿದಂತೆ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ನಿತ್ಯಾನಂದ ಸ್ವಾಮಿ ಹಾಗೂ ಅವರ ಐವರು ಶಿಷ್ಯಂದಿರಾದ ಶಿವವಲ್ಲಭನೇನಿ, ರಾಗಿಣಿ ವಲ್ಲಭನೇನಿ, ಧನಶೇಖರ, ಜಮುನಾರಾಣಿ ಸೇರಿದಂತೆ ಆರು ಮಂದಿಯ ವಿರುದ್ಧ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಈ ಸಂಬಂಧ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ನಿರ್ದೇಶನದ ಮೇರೆಗೆ, ರಾಮನಗರ ಸೆಷನ್ಸ್ ನ್ಯಾಯಾಲಯ ವಿಚಾರಣೆ ಕೈಗೆತ್ತಿಕೊಂದ್ದು, ಈ ಮಧ್ಯೆ ಪ್ರಕರಣದಲ್ಲಿ ಕೈ ಬಿಡುವಂತೆ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿತ್ತು.