Advertisement

ಮುಖ್ಯಮಂತ್ರಿ ನವ ಬೆಂಗಳೂರು ಯೋಜನೆ ಸ್ಥಗಿತ: ವಿವರಣೆ ಕೇಳಿದ ಹೈಕೋರ್ಟ್‌

06:22 PM Nov 16, 2021 | Team Udayavani |

ಬೆಂಗಳೂರು: ಹಿಂದಿನ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದ ಅವಧಿಯಲ್ಲಿ ಘೋಷಿಸಲಾಗಿದ್ದ “ಮುಖ್ಯಮಂತ್ರಿಗಳ ನವ ಬೆಂಗಳೂರು ಯೋಜನೆಯಡಿ’ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು ಮತ್ತು ಟೆಂಡರ್‌ ಪ್ರಕ್ರಿಯೆ ಸ್ಥಗಿತಗೊಳಿಸಿದ ಕ್ರಮ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

Advertisement

ಮೈತ್ರಿ ಸರ್ಕಾರದ ಪತನದ ಬಳಿಕ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆಗಿನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಪತ್ರ ಆಧರಿಸಿ “ಮುಖ್ಯಮಂತ್ರಿಗಳ ನವ ಬೆಂಗಳೂರು ಯೋಜನೆಯನ್ನು ಸ್ಥಗಿತಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ದಾಸರಹಳ್ಳಿ-ರಾಚೇನಹಳ್ಳಿ ಕೆರೆ ಅಭಿವೃದ್ಧಿ ಮತ್ತು ಸಂರಕ್ಷಣೆ ಟ್ರಸ್ಟ್‌ ಅಧ್ಯಕ್ಷ ಕೆ.ನವೀನ್‌ ಕುಮಾರ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ಈ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಮುಖ್ಯಮಂತ್ರಿಗಳ ನವ ಬೆಂಗಳೂರು ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದ್ದ ಎಲ್ಲಾ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿದೆ. ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸಲು ಸರ್ಕಾರ ಮತ್ತು ಬಿಬಿಎಂಪಿಗೆ ಮೂರು ವಾರ ಕಾಲಾವಕಾಶ ನೀಡಿ ವಿಚಾರಣೆಯನ್ನು ಮುಂದೂಡಿತು.

ಇದನ್ನೂ ಓದಿ:ದೇಶದ ಗ್ರೀನರ್‌ ಎಕಾನಮಿಯ ಸಂಶೋಧನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿ: ನಿತಿನ್‌ ಗಡ್ಕರಿ

ಪ್ರಕರಣವೇನು?
ಮುಖ್ಯಮಂತ್ರಿಗಳ ನವ ಬೆಂಗಳೂರು’ ಯೋಜನೆಯಡಿ 2018ರಿಂದ ಮೂರು ವರ್ಷಗಳ ಅವಧಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 8,015 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರದ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮುಖ್ಯಂಮತ್ರಿ ಯಡಿಯೂರಪ್ಪ 2019ರ ಆ.3ರಂದು ನಗರಾಭಿವೃದ್ಧಿ ಇಲಾಖೆಗೆ ಟಿಪ್ಪಣಿ ಬರೆದು ನವ ಬೆಂಗಳೂರು ಯೋಜನೆಯಡಿ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳಬಾರದು ಎಂದು ಸೂಚಿಸಿದ್ದರು. ಆ ಟಿಪ್ಪಣಿ ಆಧರಿಸಿ ಯೋಜನೆಯಡಿ ಕಾಮಗಾರಿಗಳು ಹಾಗೂ ಟೆಂಡರ್‌ಗಳನ್ನು ಸ್ಥಗಿತಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ (ಬಿಬಿಎಂಪಿ) 2019ರ ಆ.5ರಂದು ಆದೇಶಿಸಿದ್ದರು. ಈ ಆದೇಶ ಪ್ರಶ್ನಿಸಿರುವ ಅರ್ಜಿದಾರರು, ಕಾಮಗಾರಿ ಮುಂದುವರಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂಬುದು ಕೋರಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next