ಬೆಂಗಳೂರು: ನಗರದಲ್ಲಿ ಸಾರ್ವಜನಿಕ ಸಭೆ ಮತ್ತು ಮೆರವಣಿಗೆಗಳನ್ನು ನಿರ್ಬಂಧಿಸುವ ಕುರಿತು 2011ರಲ್ಲಿ ಹೈಕೋರ್ಟ್ ಗೆ ಸಲ್ಲಿಸಲಾದ ಕರಡು ನಿಯಮಗಳನ್ನು ಈವರೆಗೆ ಅಂತಿಮಗೊಳಿಸದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಗುರುವಾರ ಅಸಮಾಧಾನ ವ್ಯಕ್ತಪಡಿಸಿದೆ.
ಈ ಕುರಿತಂತೆ ವಕೀಲ ಎ.ವಿ.ಅಮರನಾಥನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಎಚ್.ಟಿ. ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ, ನಿಯಮಗಳನ್ನು ಅಂತಿಮಗೊಳಿಸುವ ಕುರಿತು ಸರ್ಕಾರದ ನಿಲುವು ತಿಳಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಜು.26ಕ್ಕೆ ಮುಂದೂಡಿತು.
ಇದೆ ವೇಳೆ ರಾಜ್ಯ ಸರ್ಕಾರ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ನ್ಯಾಯಪೀಠ ನಿರ್ದೇಶನ ನೀಡಿತು.
ವಿಚಾರಣೆ ಸಂದರ್ಭದಲ್ಲಿ, 2011ರಲ್ಲಿಯೇ ನ್ಯಾಯಾಲಯಕ್ಕೆ ಕರಡು ನಿಯಮಗಳನ್ನು ಸಲ್ಲಿಸಲಾಗಿದೆ. ಆದರೆ ಅವುಗಳನ್ನು ಅಂತಿಮಗೊಳಿಸಿಲ್ಲ. ಹೀಗಾಗಿ ನ್ಯಾಯಾಲಯವೇ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕಾಗುತ್ತದೆ. ಆದರೆ ಸರ್ಕಾರದ ಪರ ವಕೀಲರು ಕಾಲಾವಕಾಶ ಕೋರಿರುವ ಹಿನ್ನೆಲೆಯಲ್ಲಿ ಸಮಯ ನೀಡಲಾಗುವುದು ಎಂದು ನ್ಯಾಯಪೀಠ ಹೇಳಿತು.
ಅರ್ಜಿದಾರರೂ ಆಗಿರುವ ವಕೀಲ ಅಮರನಾಥನ್ ವಾದ ಮಂಡಿಸಿ, ಇತ್ತೀಚಿನ ದಿನಗಳಲ್ಲಿ ಬೆಂಗಳೂರು ನಗರದಲ್ಲಿ ಸಾರ್ವಜನಿಕ ಸಭೆ ಮತ್ತು ಮೆರವಣಿಗೆಗಳ ಹೆಸರಿನಲ್ಲಿ ರಸ್ತೆಗಳನ್ನು ಬಂದ್ ಮಾಡಲಾಗುತ್ತಿದೆ. ಇದರಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಿಂದೆ 2011ರಲ್ಲಿ ಈ ಕುರಿತು ಅರ್ಜಿ ಸಲ್ಲಿಸಿದ್ದಾಗ ಬೆಂಗಳೂರು ನಗರದಲ್ಲಿನ ಸಾರ್ವಜನಿಕ ಸಭೆ ಮತ್ತು ಮೆರವಣಿಗೆಗಳನ್ನು ನಿಯಂತ್ರಿಸುವ ಸಂಬಂಧ ಅಂದಿನ ಪೊಲೀಸ್ ಆಯುಕ್ತರು ‘ಲೈಸನ್ಸಿಂಗ್ ಅಂಡ್ ಕಂಟ್ರೊಲಿಂಗ್ ಆಫ್ ಅಸೆಂಬ್ಲೀಸ್ ಆ್ಯಂಡ್ ಪ್ರೊಸೇಷನ್ (ಬೆಂಗಳೂರು ನಗರ) ಕರಡು 2008 ಸಲ್ಲಿಸಿದ್ದರು. ಆದರೆ ಅದನ್ನು ಅಂತಿಮಗೊಳಿಸಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.