ಬೆಂಗಳೂರು: ಬೆಳ್ಳಂದೂರು ಕೆರೆ ಸ್ವಚ್ಛತೆಯನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮೌಖೀಕ ಸೂಚನೆ ನೀಡಿದೆ. ಸಂಸದ ಡಿ.ಕುಪೇಂದ್ರ ರೆಡ್ಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಯಾವಾಗ ಬೆಳ್ಳಂದೂರು ಕೆರೆ ಸ್ವಚ್ಛತೆ ಪೂರ್ಣಗೊಳಿಸುತ್ತೀರಾ? ಎಂದು ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿತಲ್ಲದೆ, ಶೀಘ್ರಗತಿಯಲ್ಲಿ ಸ್ವಚ್ಛತಾ ಕಾರ್ಯ ಪೂರ್ಣಗೊಳಿಸಿ ಎಂದು ಸೂಚನೆ ನೀಡಿತು.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ವಿ.ಶ್ರೀನಿಧಿ ಅವರು, ಹಸಿರು ನ್ಯಾಯಾಧೀಕರಣದ ಆದೇಶದಂತೆ ಬೆಳ್ಳಂದೂರು ಕೆರೆಯ ಸ್ವಚ್ಛತೆಗೆ ರಾಜ್ಯಮಾಲಿನ್ಯ ನಿಯಂತ್ರಣ ಮಂಡಳಿ, ಬೆಂಗಳೂರು ಜಲಮಂಡಳಿ, ಕೆರೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಡಿಎ ಕೈಗೊಂಡಿರುವ ಕ್ರಮಗಳ ವಸ್ತುಸ್ಥಿತಿ ವರದಿಯನ್ನು ಸಲ್ಲಿಸಿದರು.
ಹಸಿರು ನ್ಯಾಯಾಧೀಕರಣದ ಆದೇಶದ ಅನುಸಾರ ಬೆಳ್ಳಂದೂರು ಕೆರೆ ಸ್ವಚ್ಛತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕೆರೆಯ ಸುತ್ತಮುತ್ತ 60ಕ್ಕೂ ಹೆಚ್ಚು ಕೈಗಾರಿಕೆಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಕೆರೆಯ ಹೂಳು ತೆಗೆಯಲಾಗುತ್ತಿದ್ದು, ಭಾರೀ ಪ್ರಮಾಣದಲ್ಲಿ ಬೆಳೆದಿರುವ ಕಳೆ ತೆಗೆಯುವ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಬೆಂಗಳೂರು ಜಲಮಂಡಳಿ ವತಿಯಿಂದ ಕೆರೆಯ ಸುತ್ತಮುತ್ತಲ ಪ್ರದೇಶಗಳಲ್ಲಿದ್ದ ಎಸ್‌ಟಿಪಿ ಘಟಕಗಳ ಪರಿಶೀಲನಾ ಕಾರ್ಯ ನಡೆಯುತ್ತಿದ್ದು, ಯಾವುದೇ ತ್ಯಾಜ್ಯ ನೀರು ಕೆರೆಗೆ ಬರದಂತೆ ತಡೆಯಲಾಗಿದೆ. ರಾಜಕಾಲುವೆಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಹೊರ ವಲಯದ ಪ್ರದೇಶಗಳಲ್ಲಿನ ಒಳಚರಂಡಿ ತ್ಯಾಜ್ಯವನ್ನು ಬೆಳ್ಳಂದೂರು ಕೆರೆಗೆ ಹರಿಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ.