Advertisement

ನೆರೆಹಾವಳಿ ನಿಯಂತ್ರಣಕ್ಕೆ ಉನ್ನತ ಮಟ್ಟದ ಸಮಿತಿ

11:41 AM Jun 06, 2020 | Suhan S |

ಬೆಳಗಾವಿ: ನೆರೆಹಾವಳಿ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ರಾಜ್ಯಮಟ್ಟದಲ್ಲಿ ಉನ್ನತಮಟ್ಟದ ಸಮಿತಿ ರಚನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಲ ಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

Advertisement

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಶುಕ್ರವಾರ ನೆರೆಹಾವಳಿ ಮತ್ತು ಮುನ್ನೆಚ್ಚರಿಕೆ ಕ್ರಮಗಳಿಗೆ ಸಂಬಂಧಿಸಿದಂತೆ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನೆರೆಹಾವಳಿ ಎದುರಿಸಲು ಸರಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದರು.

ಕಳೆದ ಬಾರಿ ಭಾರೀ ಮಳೆ ಹಾಗೂ ನದಿಗಳ ಪ್ರವಾಹದಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿ ಸಂಭವಿಸಿತ್ತು. ಸಾವಿರಾರು ಕುಟುಂಬಗಳು ಬೆಳೆ ಹಾಗೂ ಮನೆಗಳನ್ನು ಕಳೆದುಕೊಂಡಿದ್ದವು. ಹಲವಾರು ಗ್ರಾಮಗಳು ಮುಳುಗಡೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಈ ವರ್ಷವೂ ಪ್ರವಾಹ ಎದುರಾದರೆ ಅದನ್ನು ಸಮರ್ಥವಾಗಿ ಎದುರಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ನದಿ ತೀರದ ಗ್ರಾಮಗಳಲ್ಲಿ ಹೆಚ್ಚಿನ ಜಾಗೃತೆ ವಹಿಸಬೇಕು ಎಂದು ಸೂಚನೆ ನೀಡಿದರು.

ಬಳ್ಳಾರಿ ನಾಲಾ ಅತಿಕ್ರಮಣ: ನಗರದಲ್ಲಿ ಹಾದು ಹೋಗಿರುವ ಬಳ್ಳಾರಿ ನಾಲಾ ಕಳೆದ ವರ್ಷ ಬಹಳ ಅವಾಂತರಗಳನ್ನು ಸೃಷ್ಟಿಮಾಡಿದೆ. ಇದರಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕಾರಣ ಕೂಡಲೇ ದೊಡ್ಡ ಪ್ರಮಾಣದ ಹಿಟಾಚಿ ಬಳಸಿಕೊಂಡು ಈ ನಾಲಾದ ಸ್ವತ್ಛತೆ ಮಾಡಬೇಕು. ನಾಲಾದ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ಸಮೀಕ್ಷೆ ಕಾರ್ಯ ಮುಂದುವರಿಸಬೇಕು ಎಂದು ಮಹಾ ನಗರಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದಕ್ಕೆ ಪೂರಕವಾಗಿ ಮಾತನಾಡಿದ ಶಾಸಕ ಅಭಯ ಪಾಟೀಲ, ನಗರದಲ್ಲಿನ ನಾಲಾಗಳನ್ನು ಅತಿಕ್ರಮಣದಿಂದ ಮುಕ್ತ ಗೊಳಿಸಿದರೆ ಮಳೆಗಾಲದಲ್ಲಿ ಅನಾಹುತ ತಪ್ಪಿಸಬಹುದು. ಆದ್ದರಿಂದ ಯಾವುದೇ ಒತ್ತಡಕ್ಕೆ ಮಣಿಯದೆ ನಿರ್ದಾಕ್ಷಿಣ್ಯವಾಗಿ ನಾಲಾಗಳ ಅತಿಕ್ರಮಣ ತೆರವುಗೊಳಿಸಬೇಕು ಎಂದು ಮನವಿ ಮಾಡಿದರು.

Advertisement

ಪ್ರವಾಹ ಮುಂಜಾಗೃತಾ ಕ್ರಮಗಳ ಬಗ್ಗೆ ವಿವರ ನೀಡಿದ ಜಿಲ್ಲಾಧಿಕಾರಿ ಎಸ್‌.ಬಿ. ಬೊಮ್ಮನಹಳ್ಳಿ, ಕಳೆದ ಬಾರಿಯ ನೆರೆ ಹಾವಳಿಯ ಸ್ಥಿತಿಗತಿಯ ಅಧ್ಯಯನ ನಡೆಸಿ ಈ ಬಾರಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರವಾಹ ನಿರ್ವಹಣೆಗೆ ತಾಲೂಕುಮಟ್ಟದ ಟಾಸ್ಕಫೋರ್ಸ್‌ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಬಿಡುಗಡೆ ಮಾಡಿದರು. ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಜಿ ಪಂ ಅಧ್ಯಕ್ಷೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ, ಪೊಲೀಸ್‌ ಆಯುಕ್ತ ಲೋಕೇಶಕುಮಾರ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಂದ್ರ ಕೆ. ವಿ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next