ಬೆಂಗಳೂರು: ಕೊಡಗು, ಕರಾವಳಿ, ಮಲೆನಾಡು ಭಾಗ ಸೇರಿ ರಾಜ್ಯದ ವಿವಿಧ ಕಡೆ ಸುರಿದ ಭಾರೀ ಮಳೆಯಿಂದ ಉಂಟಾಗಿರುವ ಅನಾಹುತದಲ್ಲಿ ಸಿಲುಕಿಕೊಂಡವರ ರಕ್ಷಣೆಯ ವಿಚಾರದಲ್ಲಿ ಸರ್ಕಾರ ಮೈ ಮರೆತಿಲ್ಲ.
ಪರಿಹಾರ ಕಾರ್ಯದಲ್ಲಿ ಕೈಚೆಲ್ಲಿ ಕುಳಿತಿಲ್ಲ. ಯುಧ್ದೋಪಾದಿಯಲ್ಲಿ ಆಡಳಿತ ಯಂತ್ರ ಕೆಲಸ ಮಾಡುತ್ತಿದೆ. ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಯ ಕ್ಷಣ-ಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಅವರು ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಡಿ.ಸಿ ತಮ್ಮಣ್ಣ, ಡಾ. ಜಯಾಮಾಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಟಿ.ಎಂ. ವಿಜಯಭಾಸ್ಕರ್,ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಸೇರಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿದ್ದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಪರಿಸ್ಥಿತಿಯ ನಿರ್ವಹಣೆ ಮತ್ತು ಮೇಲ್ವಿಚಾರಣೆಗೆ ಸಚಿವ ಸಂಪುಟದ ಉಪ ಸಮಿತಿ ಹೊರತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಎಲ್ಲ ಬೆಳವಣಿಗೆಗಳ ಬಗ್ಗೆ ಈ ಸಮಿತಿ ನಿಗಾ ವಹಿಸಲಿದೆ. ಹಣ ಬಿಡುಗಡೆಗೆ ತಕ್ಷಣ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವನ್ನು ಸಮಿತಿಗೆ ನೀಡಲಾಗಿದೆ. ಕಾಲ-ಕಾಲಕ್ಕೆ ಸಭೆ ಸೇರಿ ಸಮಿತಿಯು ವಸ್ತುಸ್ಥಿತಿಯನ್ನು ಪರಿಶೀಲಿಸಲಿದೆ ಎಂದು ತಿಳಿಸಿದರು.
ಜಿಲ್ಲಾಮಟ್ಟದ ಅಧಿಕಾರಿಗಳು ರಜೆ ಇಲ್ಲದೆ ಅವಿಶ್ರಾಂತವಾಗಿ ಕೆಲಸ ಮಾಡುತ್ತಿದ್ದಾರೆ. ಎನ್‌ಡಿಆರ್‌ಎಫ್, ಭಾರತೀಯ ಸೇನೆಯ ತುಕಡಿಗಳು ಸೇರಿ ವಿವಿಧ ರಕ್ಷಣಾ ತಂಡಗಳ ಒಂದು ಸಾವಿರ ಜನ ದಿನದ 24 ಗಂಟೆ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಈವರೆಗೆ ಕೊಡಗು ಜಿಲ್ಲೆಯಲ್ಲಿ 3,500 ಮಂದಿಯನ್ನು ರಕ್ಷಿಸಲಾಗಿದೆ. 30ಕ್ಕೂ ಹೆಚ್ಚು ಗಂಜಿ ಕೇಂದ್ರಗಳನ್ನು ತೆರೆಯಲಾಗಿದ್ದು, 2,250 ಮಂದಿ ಆಶ್ರಯ ಪಡೆದುಕೊಂಡಿದ್ದಾರೆ. ಅಗತ್ಯ ಸೌಲಭ್ಯಗಳನ್ನು ಒದಗಿಸಲು ಆದ್ಯತೆ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ. ತಡೆರಹಿತ ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಗೆ ಸೂಚನೆ ನೀಡಲಾಗಿದೆ. ಬಿದ್ದು ಹೋಗಿರುವ ಮೊಬೈಲ್ ಟವರ್‌ಗಳನ್ನು ಯಥಾಸ್ಥಿತಿಗೆ ತಂದು ಸಂಪರ್ಕ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ.
ಮಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕೆಲವಡೆ ಕುಸಿತ ಉಂಟಾದ್ದರಿಂದ ಭೂವಿಜ್ಞಾನಿಗಳು ಹಾಗೂ ತಾಂತ್ರಿಕ ತಜ್ಞರನ್ನು ನಿಯೋಜಿಸಲಾಗುತ್ತಿದೆ. ಮಡಿಕೇರಿ ಕೋಟೆ ಶಿಥಿಲಾವಸ್ಥೆಯಲ್ಲಿದ್ದು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಗಮನಕ್ಕೆ ತರಲು ನಿರ್ಧರಿಸಲಾಯಿತು ಎಂದು ತಿಳಿಸಿದರು.
ಭೂಪರಿವರ್ತನೆ ಸ್ಥಗಿತಕ್ಕೆ ಸೂಚನೆ: ಭಾರೀ ಪ್ರಮಾಣದಲ್ಲಿ ಮಳೆ ಬೀಳುತ್ತಿರುವ ಕೊಡಗು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ “ಭೂಪರಿವರ್ತನೆ’ ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜತೆಗೆ, ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಭಾರತೀಯ ಸೇನೆಯ ತಜ್ಞರನ್ನು ಕರೆಸಿ ಸಲಹೆಗಳನ್ನು ಪಡೆದುಕೊಳ್ಳಲಾಗುವುದು ಎಂದು ತಿಳಿಸಿದರು.
ವರದಿ ಬಳಿಕ ಕೇಂದ್ರಕ್ಕೆ ಮನವಿ: ಮಳೆಯಿಂದ ಆಗಿರುವ ನಷ್ಟದ ಬಗ್ಗೆ 3 ದಿನಗಳಲ್ಲಿ ಸಮಗ್ರ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.ಜಿಲ್ಲಾಧಿಕಾರಿಗಳಿಂದ ವರದಿ ಬಂದ ಬಳಿಕ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.ಸ್ವತಃ ನಾನೇ ಕೇಂದ್ರ ಗೃಹ ಮಂತ್ರಿಗಳನ್ನು ಭೇಟಿ ಮಾಡುತ್ತೇನೆ ಎಂದು ಸಿಎಂ ಹೇಳಿದರು.