ಗುಂಡ್ಲುಪೇಟೆ: ಕ್ಷೇತ್ರಕ್ಕೆ ಗುಣಮಟ್ಟದ ರಸ್ತೆ, ಚರಂಡಿ ಮತ್ತು ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯವನ್ನು ಕಲ್ಪಿಸಲು ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ ಎಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಹೇಳಿದರು.
ತಾಲೂಕಿನ ಹಿರಿಕಾಟಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಮುಖ್ಯಮಂತ್ರಿಗಳ ನಿಧಿಯಿಂದ 25 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕ್ಷೇತ್ರದ ಹಲವು ಗ್ರಾಮಾಂತರ ರಸ್ತೆಗಳ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಪ್ರಗತಿಯಲ್ಲಿದೆ ಕಾಮಗಾರಿ: ಈಗಾಗಲೇ ತಾಲೂಕಿನ ಚಿಕ್ಕಾಟಿ ಮತ್ತು ಚನ್ನವಡೆಯನಪುರ ಗ್ರಾಮದಲ್ಲಿ ತಲಾ 20 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ, ತೊರವಳ್ಳಿ ಗ್ರಾಮದಲ್ಲಿ 10 ಲಕ್ಷ ರೂ.ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ, ಭೀಮನಬೀಡು ಗ್ರಾಮದಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ, ಕೆಬ್ಬೇಪುರ ಗ್ರಾಮದಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, ಬಾಚಹಳ್ಳಿ ಗ್ರಾಮದಿಂದ ಬಂಡೀಪುರ ರಸ್ತೆ 90 ಲಕ್ಷ ರೂ., ಬಾಚಹಳ್ಳಿಯಿಂದ ಕಡಬೂರು ಮಾರ್ಗ ರಸ್ತೆ 1 ಕೋಟಿ 20 ಲಕ್ಷ ರೂ.ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ. ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳಿದರು.
ಹಂತ ಹಂತವಾಗಿ ರಸ್ತೆ ಅಭಿವೃದ್ಧಿಗೆ ಚಾಲನೆ: ತೆರಕಣಾಂಬಿಹುಂಡಿ ಗ್ರಾಮದ ಶ್ರೀರಾಮಲಿಂಗಚೌಡೇಶ್ವರಿ ದೇವಸ್ಥಾನದ ಬಳಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಈ ಕಾಮಗಾರಿಯನ್ನು 30 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಲು ಗುರಿ ಹೊಂದಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಅಭಿವೃದ್ಧಿಯಾಗಿಲ್ಲದ ಮತ್ತು ವಾಹನ ಹಾಗೂ ಜನ ಸಂಚಾರಕ್ಕೆ ತೊಂದರೆಯಾಗಿರುವ ಎಲ್ಲಾ ರಸ್ತೆಗಳ ಮಾಹಿತಿಯನ್ನು ಪಡೆದುಕೊಂಡಿದ್ದು, ಶೀಘ್ರದಲ್ಲೇ ಹಂತ ಹಂತವಾಗಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗುವುದು. ಕ್ಷೇತ್ರದಲ್ಲಿನ ಉತ್ತಮ ರಸ್ತೆ, ಚರಂಡಿ ಮತ್ತು ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯವನ್ನು ಕಲ್ಪಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಅನುದಾನ ನೀಡಲು ಸರ್ಕಾರಕ್ಕೆ ಒತ್ತಡ: ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುವಂತೆ ಸರ್ಕಾರಕ್ಕೆ ಒತ್ತಡ ತಂದಿದ್ದೇವೆ. ಈಗ ಕೋಟ್ಯಂತರ ರೂಪಾಯಿಗಳ ವೆಚ್ಚದಲ್ಲಿ ಬರಗಿ ರಸ್ತೆ, ಬಾಚಹಳ್ಳಿ ರಸ್ತೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆಗಳ ನಿರ್ಮಾಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು. ಈ ವೇಳೆ ಮುಖಂಡರಾದ ಸೋಮಶೇಖರ್, ನಿಟ್ರೆ ನಾಗರಾಜಪ್ಪ, ಪ್ರಣಯ್, ರಾಘವಾಪುರ ದೇವಯ್ಯ ಸೇರಿದಂತೆ ಹಲವರು ಹಾಜರಿದ್ದರು.