ಬೆಂಗಳೂರು: ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿ ತಲಾ ಒಂದೊಂದು ಹೈಟೆಕ್ ಆಸ್ಪತ್ರೆ ನಿರ್ಮಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಹೇಳಿದರು.
ಸಂಜಯಗಾಂಧಿ ತುರ್ತು ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ, ಗುರುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ನೂತನ ಎಂ.ಆರ್.ವಿ. ಯಂತ್ರೋಪಕರಣ ಘಟಕ ಹಾಗೂ ಮಾಡ್ಯೂಲರ್ ಶಸ್ತ್ರ ಚಿಕಿತ್ಸಾ ವಿಭಾಗವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊರವಲಯದಲ್ಲಿ ಅಪಘಾತಗಳು ನಡೆದ ವೇಳೆ, ಸಕಾಲಕ್ಕೆ ಸರಿಯಾಗಿ ನಗರದ ಹೃದಯ ಭಾಗದಲ್ಲಿರುವ ಆಸ್ಪತ್ರೆಗಳಿಗೆ ಗಾಯಾಳುಗಳನ್ನು ಕರೆತರಲು ಆಗುವುದಿಲ್ಲ ಎಂದರು.
ಹೈಟೆಕ್ ಆಸ್ಪತ್ರೆಗಳ ನಿರ್ಮಾಣದ ಸಂಬಂಧ ಯೋಜನೆ ಸಿದ್ಧವಾಗುತ್ತಿದೆ. ಇದಕ್ಕಾಗಿ ಸರ್ಕಾರ 100 ರಿಂದ 150 ಕೋಟಿ ರೂ.ಮೀಸಲಿಡಲಿದೆ. ಆಸ್ಪತ್ರೆ ನಿರ್ಮಾಣದ ಕಾರ್ಯ ಈ ವರ್ಷವೇ ಆರಂಭವಾಗಲಿದೆ ಎಂಬ ಭರವಸೆ ನೀಡಿದರು.
ಕಾರಿಡಾರ್ ಬಗ್ಗೆ ಗೊಂದಲ ಸೃಷ್ಟಿಸಲಾಗುತ್ತಿದೆ: ಸಂಚಾರ ದಟ್ಟಣೆ ಹೆಚ್ಚುತ್ತಿದ್ದು, ಇದನ್ನು ತಪ್ಪಿಸಲು ಸರ್ಕಾರ ಎಲಿವೇಟೆಡ್ ಕಾರಿಡಾರ್ ಯೋಜನೆ ರೂಪಿಸಿದೆ. ಇದಕ್ಕಾಗಿ ಸರ್ಕಾರ ಸುಮಾರು 24 ಸಾವಿರ ಕೋಟಿ.ರೂ. ಮೀಸಲಿಟ್ಟಿದ್ದು, ಯೋಜನೆ ಬಗ್ಗೆ ಕೆಲವರು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ದೂರಿದರು.
ಕಡಿಮೆ ದರದಲ್ಲಿ ಆರೋಗ್ಯ ಸೇವೆ: ಸಂಸ್ಥೆಯ ನಿರ್ದೇಶಕ ಡಾ.ಎಚ್.ಎಸ್.ಚಂದ್ರಶೇಖರ್ ಮಾತನಾಡಿ, ಎಂ.ಆರ್.ವಿ.ಯಂತ್ರೋಪಕರಣ ಲಭ್ಯವಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ 2.600 ರೂ.ಗಳಿಗೆ ಆರೋಗ್ಯ ಸೇವೆ ನೀಡಬಹುದಾಗಿದೆ. ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು 1.300 ರೂ.ಗಳಲ್ಲಿ ಸೇವೆ ಪಡೆಯಬಹುದಾಗಿದೆ ಎಂದರು. ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್, ಶಾಸಕ ಉದಯ್ ಗರುಡಾಚಾರ್, ಆರೋಗ್ಯ ಮತ್ತು ಕುಟುಂಬ ಇಲಾಖೆ ಕಾರ್ಯದರ್ಶಿ ಜಾವೇದ್ ಅಖ್ತರ್ ಇದ್ದರು.