ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ವಿ.ಕೆ. ಶಶಿಕಲಾಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ಲಂಚ ಪಡೆದ ಪ್ರಕರಣದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ಕೋರಿ ಎಸಿಬಿ ಸಲ್ಲಿಸಿರುವ ಮನವಿ ಬಗ್ಗೆ ಎರಡು ವಾರದಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಪ್ರಕರಣದ ತನಿಖೆ ವಿಳಂಬ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿ ತಮಿಳುನಾಡಿನ ಶಿಕ್ಷಣ ತಜ್ಞೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಕೆ.ಎಸ್. ಗೀತಾ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿತು.
ವಿಚಾರಣೆ ವೇಳೆ ಸರ್ಕಾರಿ ವಕೀಲರು ವಾದ ಮಂಡಿಸಿ, ತನಿಖೆಯನ್ನು ಎಸಿಬಿ ಪೂರ್ಣಗೊಳಿಸಿದೆ. ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ಪೂರ್ವಾನುಮತಿ ಕೋರಿ ತನಿಖಾ ವರದಿಯನ್ನು ಸಕ್ಷಮ ಪ್ರಾಧಿಕಾರವಾದ ಗೃಹ ಇಲಾಖೆ ಕಾರ್ಯದರ್ಶಿಗೆ 2021ರ ಜುಲೈ ರವಾನಿಸಿದೆ. 20 ದಿನಗಳ ಹಿಂದೆ ಆ ವರದಿಯನ್ನು ಕಾರ್ಯದರ್ಶಿಗಳು ಪರಿಶೀಲನೆ ನಡೆಸಿ, ಅನುಮೋದನೆಗಾಗಿ ಕಡತವನ್ನು ಗೃಹ ಸಚಿವರಿಗೆ ಸಲ್ಲಿಸಿದ್ದಾರೆ. ಗೃಹ ಸಚಿವರು ಅನುಮೋದನೆ ನೀಡಬೇಕಿದೆ. ಪೂರ್ವಾನುಮತಿ ದೊರೆಯದೆ ದೋಷಾರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಾಧ್ಯವಾಗುವುದಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಅರ್ಜಿದಾರರ ಪರ ವಕೀಲರು ಆಕ್ಷೇಪಿಸಿ, ಈ ಅರ್ಜಿಯನ್ನು 2021 ಜ.11ರಂದು ಹೈಕೋರ್ಟ್ ಇತ್ಯರ್ಥಪಡಿಸಿತ್ತು. ಅಂತಿಮ ವರದಿಯನ್ನು ಎರಡು ತಿಂಗಳಲ್ಲಿ ಸಲ್ಲಿಸುವಂತೆ ತನಿಖಾಧಿಕಾರಿಗೆ ಸೂಚಿಸಿತ್ತು. ತನಿಖಾ ವರದಿ ಸಲ್ಲಿಸಲು ಸೆ.7ರಂದು ಮತ್ತೆ 30 ದಿನ ಕಾಲಾವಕಾಶ ನೀಡಿತ್ತು. ವರದಿ ಸಲ್ಲಿಸಲು ವಿಫಲವಾದರೆ ಗೃಹ ಇಲಾಖೆ ಕಾರ್ಯದರ್ಶಿ ವಿಚಾರಣೆಗೆ ಹಾಜರಾಗಿ ವಿವರಣೆ ನೀಡುವಂತೆಯೂ ನಿರ್ದೇಶಿಸಿತ್ತು. ಆದರೆ, ಈವರೆಗೂ ತನಿಖಾ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿಲ್ಲ ಎಂದು ತಿಳಿಸಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಪೂರ್ವಾನುಮತಿ ಕೋರಿದ ಮನವಿ ಮೇಲೆ ನಿರ್ಧಾರ ಕೈಗೊಳ್ಳಲು ಎಷ್ಟು ಸಮಯ ಬೇಕಿದೆ ಎಂದು ಸರ್ಕಾರಿ ವಕೀಲರನ್ನು ಪ್ರಶ್ನಿಸಿತು.
ಸರ್ಕಾರಿ ವಕೀಲರು ಉತ್ತರಿಸಿ, ಸದ್ಯ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಗೃಹ ಸಚಿವರು ಅಲ್ಲಿಯೇ ಇದ್ದಾರೆ. 10 ದಿನಗಳ ಬಳಿಕ ವಾಪಸ್ಸಾಗಲಿದ್ದು, ಎರಡು ವಾರ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಅದಕ್ಕೆ ಒಪ್ಪಿದ ನ್ಯಾಯಪೀಠ, ಸರ್ಕಾರಕ್ಕೆ ಎರಡು ವಾರ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.