Advertisement

ಪುರಸಭೆ, ಪಪಂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್‌ ಅಸ್ತು

12:23 PM Oct 23, 2020 | Suhan S |

ಬೆಂಗಳೂರು: ರಾಜ್ಯದ ಎಲ್ಲಾ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗಳಿಗೆ ಅಸ್ತು ಎಂದಿರುವ ಹೈಕೋರ್ಟ್‌, ನ.10ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.

Advertisement

ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಅ.8ರಂದು ಹೊರಡಿಸಿದ್ದ ಅಧಿಸೂಚನೆಗೆ ತಡೆ ನೀಡಿ ಅ.19ರಂದು ನೀಡಿದ್ದ ಮಧ್ಯಂತರ ಆದೇಶವನ್ನು ಹಿಂಪಡೆದಿರುವ ಹೈಕೋರ್ಟ್‌, ನಿಗದಿತ ಮೀಸಲು ಪಟ್ಟಿ ಪ್ರಕಾರ ಚುನಾವಣೆ ಮುಂದುವರಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತು. ಮೀಸಲಾತಿ ಪ್ರಶ್ನಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪುರಸಭೆ, ದಾವಣಗೆರೆ ಜಿಲ್ಲೆ ಚನ್ನಗಿರಿ ಪುರಸಭೆ, ಕೊಡಗು ಜಿಲ್ಲೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸೇರಿ ರಾಜ್ಯದ ಹಲವು ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಚುನಾಯಿತ ಸದಸ್ಯರು, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಸಲ್ಲಿಸಿದ್ದ ತಕರಾರು ಅರ್ಜಿಗಳನ್ನು ನ್ಯಾಯಮೂರ್ತಿ ಆರ್‌. ದೇವದಾಸ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಾದ-ಪ್ರತಿವಾದ ಆಲಿಸಿದ ಬಳಿಕ, ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಅಧಿಸೂಚನೆಗೆ ನೀಡಲಾಗಿದ್ದ ಮಧ್ಯಂತರ ತಡೆ ನೀಡಿ ಚುನಾವಣೆ ನಡೆಸುವಂತೆ ವಿಭಾಗೀಯ ನ್ಯಾಯಪೀಠ ಆದೇಶಿಸಿದೆ. ಅದೇ ಆಧಾರದಲ್ಲಿ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷರ ಚುನಾವಣೆಗಳು ನಡೆಯಲಿ ಎಂದು ಆದೇಶಿಸಿದ ನ್ಯಾ. ಆರ್‌. ದೇವದಾಸ್‌, ಪುರಸಭೆ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ ಮೀಸಲಾತಿ ಅಧಿಸೂಚನೆಗೆ ತಡೆ ನೀಡಿ ಅ.19ರಂದು ತಾವು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಹಿಂಪಡೆಯುತ್ತಿರುವುದಾಗಿ ಹೇಳಿದರು.

ರಾಜ್ಯದ ಎಲ್ಲಾ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಲಿ. ಆದರೆ, ಅರ್ಜಿದಾರರು ಪ್ರಶ್ನಿಸಿರುವ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗಳು ಅರ್ಜಿಯ ಅಂತಿಮ ಫ‌ಲಿತಾಂಶಕ್ಕೆ ಒಳಪಡಲಿದೆ ಎಂದು ನ್ಯಾ. ದೇವದಾಸ್‌ ಆದೇಶದಲ್ಲಿ ತಿಳಿಸಿದ್ದಾರೆ.

ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ಕೆ. ನಾವದಗಿ, ಮೀಸಲಾತಿ ನಿಗದಿಪಡಿಸುವಾಗ ನಿಯಮಾವಳಿಗಳನ್ನು ಪಾಲಿಸಲಾಗಿದೆ. ಚುನಾವಣೆ ಪ್ರಕ್ರಿಯೆ ಪ್ರಾರಂಭವಾದ ನಂತರ ತಡೆಯಾಜ್ಞೆ ಸೂಕ್ತವಲ್ಲ. ಅರ್ಜಿಗಳು ಮೆರಿಟ್‌ ಆಧಾರದಲ್ಲಿ ವಿಚಾರಣಾ ಮಾನ್ಯತೆ ಹೊಂದಿರಬಹುದು. ಆದರೆ, ಚುನಾವಣಾ  ಪ್ರಕ್ರಿಯೆ ಪ್ರಾರಂಭಗೊಂಡ ಬಳಿಕ ನ್ಯಾಯಾಲಯ ಮಧ್ಯಪ್ರವೇಶ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಅನೇಕ ತೀರ್ಪುಗಳನ್ನು ನೀಡಿದೆ.

Advertisement

ಒಂದೊಮ್ಮೆ ತಡೆ ನೀಡಿದರೆ ಚುನಾವಣೆ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗಲಿದೆ. ನಗರಸಭೆ ಚುನಾವಣೆಗೆ ಸಂಬಂಧಿಸಿದಂತೆ ವಿಭಾಗೀಯ ನ್ಯಾಯಪೀಠ ಅ.21ರಂದು ನೀಡಿರುವ ಆದೇಶ ಪರಿಗಣಿಸಿ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ಅನುಮತಿ ನೀಡಬೇಕು ಎಂದು ಕೋರಿದರು.

ಇದನ್ನು ನ್ಯಾಯಪೀಠ ಮಾನ್ಯ ಮಾಡಿತು. ರಾಜ್ಯದ 117 ಪುರಸಭೆ ಹಾಗೂ 100 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಅ.8ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಅದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next