Advertisement

ಹಿಜಾಬ್‌ ತೀರ್ಪು; ಇಂದಿನಿಂದ 19ರವರೆಗೆ ಪ್ರತಿಬಂಧಕಾಜ್ಞೆ

10:29 AM Mar 15, 2022 | Team Udayavani |

ಧಾರವಾಡ: ಹಿಜಾಬ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ.15 ರಂದು ಉಚ್ಛ ನ್ಯಾಯಾಲಯದಿಂದ ಆದೇಶ ಹೊರಡುವ ಸಂಭವವಿದ್ದು, ಈ ಸಮಯದಲ್ಲಿ ಧಾರವಾಡ ಜಿಲ್ಲೆಯಾದ್ಯಂತ (ಗ್ರಾಮೀಣ) ಮತೀಯ ಸೌಹಾರ್ದತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಬರಲು ಮಾ.15 ರಂದು ಬೆಳಿಗ್ಗೆ 06:00 ಗಂಟೆಯಿಂದ ಮಾ.19ರ ಬೆಳಿಗ್ಗೆ 06:00 ಗಂಟೆಯವರೆಗೆ ಸಿಆರ್‌ಪಿಸಿ 1973ರ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾ ಧಿಕಾರಿ ನಿತೇಶ್‌ ಕೆ.ಪಾಟೀಲ ಆದೇಶ ಹೊರಡಿಸಿದ್ದಾರೆ.

Advertisement

ಧಾರವಾಡ ಜಿಲ್ಲಾ ಗ್ರಾಮೀಣ ವ್ಯಾಪ್ತಿಯಲ್ಲಿ 05ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಶಸ್ತ್ರ, ಬಡಿಗೆ, ಭರ್ಚಿ ,ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಗ್ಗ, ಚಾಕು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದು, ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಕಲ್ಲುಗಳನ್ನು, ಕ್ಷಾರಪದಾರ್ಥ, ಪಟಾಕಿ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳು ಮತ್ತು ಇತರೆ ಎಸೆಯುವಂತಹ ವಸ್ತುಗಳನ್ನು ತೆಗೆದುಕೊಂಡು ಹೋಗುವುದು ಪ್ರತಿಬಂಧಿಸಲಾಗಿದೆ .

ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು ಪ್ರತಿಬಂಧಿ ಸಲಾಗಿದೆ. ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನ ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ಪ್ರತಿಬಂಸಲಾಗಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ, ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ಪ್ರತಿಬಂ ಸಲಾಗಿದೆ. ಯಾವುದೇ ವ್ಯಕ್ತಿ, ಸಾರ್ವಜನಿಕರಾಗಲಿ ಮಾರಕಾಸ್ತ್ರಗಳು,ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್‌ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿ ಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು. ಶವಸಂಸ್ಕಾರಕ್ಕೆ ಅಥವಾ ಮದುವೆಗಳಿಗೆ ಈ ಆಜ್ಞೆ ಅನ್ವಯಿಸಲ್ಲ. ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಸಬೇಕು.ಈ ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 18 ರ ಅಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಧಿಕಾರಿಗಳು ನಿತೇಶ ಪಾಟೀಲ ತಿಳಿಸಿದ್ದಾರೆ.

 

ಹಿಜಾಬ್‌ ತೀರ್ಪು; ಎಲ್ಲೆಡೆ ಕಣ್ಗಾವಲು

Advertisement

ಹುಬ್ಬಳ್ಳಿ: ಹಿಜಾಬ್‌ ವಿವಾದದ ಕುರಿತು ಮಂಗಳವಾರ ಹೈಕೋರ್ಟ್‌ನಿಂದ ಅಂತಿಮ ತೀರ್ಪು ಪ್ರಕಟಗೊಳ್ಳುವ ಸಂಭವ ಇರುವುದರಿಂದ ಹಾಗೂ ದಿ ಕಾಶ್ಮೀರಿ ಫೈಲ್‌ ಚಿತ್ರ ಪ್ರದರ್ಶನಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹು-ಧಾ ಅವಳಿ ನಗರದಲ್ಲಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹಿಜಾಬ್‌ ಕುರಿತು ತೀರ್ಪು ಪ್ರಕಟಣೆ ಬಳಿಕ ಜನರ ಗುಂಪುಗೂಡುವುದು, ಸಂಭ್ರಮಾಚರಣೆ, ಪ್ರತಿಭಟನೆ ನಡೆಸುವ ಸಂಭವ ಹಿನ್ನೆಲೆಯಲ್ಲಿ ಹಾಗೂ ದಿ ಕಾಶ್ಮೀರಿ ಫೈಲ್‌ ಚಿತ್ರ ವೀಕ್ಷಣೆ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಸಾಧ್ಯತೆ ಇರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಅವಳಿ ನಗರದ ಶಾಲೆ-ಕಾಲೇಜ್‌ಗಳು, ಜನದಟ್ಟಣೆ ಪ್ರದೇಶಗಳು ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಮಾಜಘಾತುಕ ಶಕ್ತಿಗಳ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಅಲ್ಲಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮೂವೆಬಲ್‌ ಕ್ಯಾಮರಾಗಳನ್ನು ಸಹ ಬಳಸಲಾಗುತ್ತಿದೆ. ಎಲ್ಲೆಡೆ ಕಣ್ಗಾವಲು ಇಟ್ಟಿದ್ದಾರೆ. ಈ ನಿಟ್ಟಿನಲ್ಲಿ ಆಯುಕ್ತರು ಸೋಮವಾರ ರಾತ್ರಿ ಕಮೀಷನರೇಟ್‌ ವ್ಯಾಪ್ತಿಯ ಎಲ್ಲ ಅಧಿಕಾರಿಗಳು ಹಾಗೂ ಠಾಣೆಗಳ ಇನ್ಸ್‌ಪೆಕ್ಟರ್‌ಗಳೊಂದಿಗೆ ಸಭೆ ನಡೆಸಿ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಮಾಜಘಾತುಕ ಶಕ್ತಿಗಳು ಬಾಲ ಬಿಚ್ಚದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚೆ ನಡೆಸಿದರೆಂದು ತಿಳಿದು ಬಂದಿದೆ. ಹಿಜಾಬ್‌ ಕುರಿತ ತೀರ್ಪು ಹಾಗೂ ದಿ ಕಾಶ್ಮೀರಿ ಫೈಲ್‌ ಚಿತ್ರ ಪ್ರದರ್ಶನಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವಳಿ ನಗರದಲ್ಲಿ ಸೂಕ್ತ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲು ಮೂವರು ಡಿಸಿಪಿ, ಏಳು ಎಸಿಪಿಗಳು ಸೇರಿದಂತೆ ಎಲ್ಲ ಠಾಣೆಗಳ ಹಾಗೂ ವಿಭಾಗಗಳ ಅಧಿಕಾರಿಗಳು ಒಳಗೊಂಡಂತೆ ಸಿಎಆರ್‌ ತುಕಡಿ, ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next