ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದದ ಸುತ್ತಲಿನ ಬೆಳವಣಿಗೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯಪಾಲರಿಗೆ ವಿವರಣೆ ನೀಡಿದ್ದಾರೆ.
ಬುಧವಾರ ರಾತ್ರಿ ರಾಜಭವನಕ್ಕೆ ತೆರಳಿ ರಾಜ್ಯಪಾಲರ ಜತೆ ಅರ್ಧಗಂಟೆ ಕಾಲ ಚರ್ಚೆ ನಡೆಸಿರುವ ಅವರು ರಾಜ್ಯದಲ್ಲಿ ನಡೆಯುತ್ತಿರುವ ಒಟ್ಟಾರೆ ಬೆಳವಣಿಗೆ ಮಾಹಿತಿ ನೀಡಿದ್ದಾರೆ.
ರಾಜ್ಯದ ೫೦ಕ್ಕೂ ಹೆಚ್ಚು ಪದವಿಪೂರ್ವ ಕಾಲೇಜಿನಲ್ಲಿ ಕೇಸರಿ ಹಾಗೂ ಹಿಜಾಬ್ ವಿವಾದದ ಕಿಚ್ಚಿ ಹೆಚ್ಚಿದೆ. ಈ ಸಂಬಂಧ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಏಕಸದಸ್ಯ ಪೀಠದಿಂದ ಸಿಜೆ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಒಟ್ಟಾರೆ ಪರಿಸ್ಥಿತಿ ನಿಯಂತ್ರದಲ್ಲಿದೆ ಎಂದು ವಿವರಣೆ ನೀಡಿದ್ದಾರೆಂದು ತಿಳಿದು ಬಂದಿದೆ.
ರಾಜಕೀಯ ಚರ್ಚೆ
ಆದರೆ ದಿಲ್ಲಿ ಭೇಟಿಯ ಬೆನ್ನಲ್ಲೇ ಸಿಎಂ ರಾಜ್ಯಪಾಲರ ಭೇಟಿ ಮಾಡಿರುವುದು ಇನ್ನಷ್ಟು ಕುತೂಹಲ ಸೃಷ್ಟಿಸಿದೆ. ಆದರೆ ರಾಜಕೀಯ ಚರ್ಚೆಯ ಬಗ್ಗೆ ಸಿಎಂ ಕಚೇರಿ ಮೂಲಗಳು ಯಾವುದೇ ಮಾಹಿತಿ ನೀಡಿಲ್ಲ.
ಈ ನಡುವೆ ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ಬೆಳಗ್ಗೆ ಸಿಎಂ ಬೊಮ್ಮಾಯಿ ಭೇಟಿ ಮಾಡಿ ಕಾನೂನು- ಸುವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ್ದಾರೆ.