ಬೆಂಗಳೂರು: ಉಡುಪಿಯ ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಪೋಷಕರು ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಫೆ. 8ರಂದು ನಡೆಸಲಿದೆ.
ಕಾಲೇಜಿನ ವಿದ್ಯಾರ್ಥಿನಿ ರೇಷ್ಮಾ ಫಾರೂಕ್ ಅವರ ತಾಯಿ ರಹ್ಮತ್ ಫಾರೂಕ್ ಹಾಗೂ ಆಯೇಷಾ ಹಾಜಿರಾ ಅಲ್ಮಾಸ್ ಅವರ ತಾಯಿ ಸಾದಿಯಾ ಬಾನು ಸಹಿತ ಐವರು ವಿದ್ಯಾರ್ಥಿನಿಯರ ಪೋಷಕರು ಸಲ್ಲಿಸಿರುವ ಪ್ರತ್ಯೇಕ ಎರಡು ತಕರಾರು ಅರ್ಜಿಗಳು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ನಿಗದಿಯಾಗಿದ್ದವು.
ಸರ್ಕಾರದ ಪರ ವಕೀಲರು ಹಾಜರಾಗಿ, ಈ ಅರ್ಜಿಗಳಿಗೆ ಸಂಬಂಧಿಸಿದಂತೆ ಅಡ್ವೋಕೇಟ್ ಜನರಲ್ ವಾದ ಮಂಡಿಸಬೇಕಾಗಿದೆ. ಆದ್ದರಿಂದ ಕಾಲಾವಕಾಶ ಬೇಕು ಎಂದು ಮನವಿ ಮಾಡಿದರು. ವಿದ್ಯಾರ್ಥಿನಿಯರಿಗೆ ತರಗತಿಗೆ ಸೇರಿಸುತ್ತಿಲ್ಲ. ಹಾಗಾಗಿ, ಅವರ ಕಲಿಕೆಗೆ ತೊಂದರೆ ಆಗುತ್ತಿದೆ. ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕು ಎಂದು ಅರ್ಜಿದಾರರ ಪರ ವಕೀಲ ಅರ್ನವ್ ಬಾಗಲವಾಡಿ ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಫೆ.8ಕ್ಕೆ ಅರ್ಜಿಯ ವಿಚಾರಣೆ ನಡೆಸುವುದಾಗಿ ಹೇಳಿ, ವಿಚಾರಣೆಯನ್ನು ಮುಂದೂಡಿತು.
ಹಿಜಾಬ್ ಧಾರಣೆ ನಿರ್ಬಂಧಿಸುವುದು ಸಂವಿಧಾನದ ಪರಿಚ್ಚೇದ 14 ಮತ್ತು 25ರ ಅನ್ವಯ ಸಂವಿಧಾನದತ್ತ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಧಾರ್ಮಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡಲು ಸರ್ಕಾರಕ್ಕೆ ಅಧಿಕಾರವಿಲ್ಲ. ಕಾಲೇಜು ಹಾಗೆ ಮಾಡುತ್ತಿರುವುದು ಸಂವಿಧಾನಿಕ ಅವಕಾಶಗಳ ನಿರಾಕರಣೆಯಾಗಿದೆ. ಹಿಜಾಬ್ ಧರಿಸುವ ವಿದ್ಯಾರ್ಥಿನಿಯರನ್ನು ಕಾಲೇಜಿಗೆ ಬರುವುದನ್ನು ನಿರ್ಬಂಧಿಸಿ ಪ್ರಾಂಶುಪಾಲರು ಹೊರಡಿಸಿರುವ ಆದೇಶ ಅಸಾಂವಿಧಾನಿಕ ಎಂದು ಘೋಷಿಸಿ ಅದನ್ನು ರದ್ದುಪಡಿಸಬೇಕು. ಪ್ರಾಂಶುಪಾಲರ ವಿರುದ್ಧ ತನಿಖೆ ನಡೆಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಅರ್ಜಿಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಶಿಕ್ಷಣ ಇಲಾಖೆ ಕಾರ್ಯದರ್ಶಿ, ಪದವಿಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕರು, ಉಡುಪಿ ಜಿಲ್ಲಾಧಿಕಾರಿ, ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರು, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಯಶ್‌ಪಾಲ್ ಸುವರ್ಣ ಮತ್ತಿತರರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.