ಬೆಂಗಳೂರು: ಶಾಲೆಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ವಾಪಾಸ್ ಪಡೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಶುಕ್ರವಾರ ಹೇಳಿರುವುದು ಇದೀಗ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸಿಎಂ ವಿರುದ್ಧ ಕಿಡಿಕಾರಿದ್ದು, “ಯುವ ಮನಸ್ಸುಗಳನ್ನು ಧಾರ್ಮಿಕ ರೀತಿಯಲ್ಲಿ ವಿಭಜಿಸುವುದನ್ನು ಉತ್ತೇಜಿಸುತ್ತಿದ್ದಾರೆ” ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ, ‘ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧವನ್ನು ಹಿಂಪಡೆದಿರುವ ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರ ನಮ್ಮ ಶೈಕ್ಷಣಿಕ ತಾಣಗಳ ಜಾತ್ಯತೀತ ಸ್ವರೂಪದ ಬಗ್ಗೆ ಕಳವಳ ಮೂಡಿಸಿದೆ” ಎಂದಿದ್ದಾರೆ.
”ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಉಡುಗೆಗೆ ಅವಕಾಶ ನೀಡುವ ಮೂಲಕ ಸಿದ್ದರಾಮಯ್ಯ ಸರಕಾರ ಯುವ ಮನಸ್ಸುಗಳನ್ನು ಧಾರ್ಮಿಕ ನೆಲೆಯಲ್ಲಿ ವಿಭಜಿಸುವುದನ್ನು ಉತ್ತೇಜಿಸುತ್ತಿದೆ, ಅಂತರ್ಗತ ಕಲಿಕಾ ವಾತಾವರಣಕ್ಕೆ ಅಡ್ಡಿಯುಂಟುಮಾಡುತ್ತಿದೆ. ವಿಭಜಕ ಪದ್ಧತಿಗಳಿಗಿಂತ ಶಿಕ್ಷಣಕ್ಕೆ ಆದ್ಯತೆ ನೀಡಿ ಧಾರ್ಮಿಕ ಆಚರಣೆಗಳ ಪ್ರಭಾವವಿಲ್ಲದೆ ವಿದ್ಯಾರ್ಥಿಗಳು ಶಿಕ್ಷಣದತ್ತ ಗಮನಹರಿಸುವ ವಾತಾವರಣವನ್ನು ಬೆಳೆಸುವುದು ಬಹುಮುಖ್ಯವಾಗಿದೆ. ,” ಎಂದು ರಾಜ್ಯ ಬಿಜೆಪಿ ಅಧ್ಯಕ್ಷರು ಬರೆದಿದ್ದಾರೆ.
ಅಲ್ಪಸಂಖ್ಯಾತ ಸಮುದಾಯದ ಯಾರೂ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಬೇಡಿಕೆ ಇಟ್ಟಿಲ್ಲ ಎಂದು ವಿಜಯೇಂದ್ರ ಹೇಳಿದರು.
“ಶಾಲೆಗಳಲ್ಲಿ ಹಿಜಾಬ್ ಗೆ ಅಲ್ಪಸಂಖ್ಯಾತ ಸಮುದಾಯದವರು ಯಾರೂ ಬೇಡಿಕೆ ಇಟ್ಟಿಲ್ಲ, ನೀವು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿಗಳು, ಕೇವಲ ಒಂದು ಸಮುದಾಯಕ್ಕೆ ಅಲ್ಲ, ಪದೇ ಪದೇ ಕರ್ನಾಟಕ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ವಿಷಯದ ಬಗ್ಗೆ ಸ್ಪಷ್ಟವಾಗಿ ಕಳವಳ ವ್ಯಕ್ತಪಡಿಸಿದೆ. ಸಿದ್ಧರಾಮಯ್ಯ ನಡೆ ದುರದೃಷ್ಟಕರ,” ಎಂದು ವಿಜಯೇಂದ್ರ ಹೇಳಿದ್ದಾರೆ.
“ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಹಾಕಬಾರದು, ಈ ನಿಟ್ಟಿನಲ್ಲಿ ಸಿದ್ಧರಾಮಯ್ಯನವರ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ರಾಜ್ಯದಲ್ಲಿ ರೈತರು ತೀವ್ರ ಸಂಕಷ್ಟದಲ್ಲಿರುವಾಗ ಅದನ್ನು ಬಗೆಹರಿಸುವ ಜವಾಬ್ದಾರಿ ಮುಖ್ಯಮಂತ್ರಿಗಳ ಮೇಲಿತ್ತು. ಆದರೂ ಅವರು ಹಿಜಾಬ್ ಬಗ್ಗೆ ಆಸಕ್ತಿ ವಹಿಸುತ್ತಿದ್ದಾರೆ” ಎಂದು ವಿಜಯೇಂದ್ರ ಟೀಕಿಸಿದರು.