Advertisement

Hill Slide: ಶಿರೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ, ರಕ್ಷಣಾ ಕಾರ್ಯ ಪರಿಶೀಲನೆ

12:36 AM Jul 22, 2024 | Team Udayavani |

ಅಂಕೋಲಾ:  ಉತ್ತರ ಕನ್ನಡ ಜಿಲ್ಲೆ‌ಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಮೃತಪಟ್ಟ ಸ್ಥಳಕ್ಕೆ ಮಳೆಯ ನಡುವೆಯೇ  ಮುಖ್ಯಮಂತ್ರಿ ಸಿದ್ದರಾಮಯ್ಯ  ಭಾನುವಾರ  ಭೇಟಿ ನೀಡಿ, ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದರು.

Advertisement

ಪರಿಶೀಲನೆ ಬಳಿಕ ಸಿಎಂ ಸಿದ್ದರಾಮಯ್ಯ  ಮಾತನಾಡಿ  ಜು. 16ರಂದು ಮಳೆಯಿಂದ ಶಿರೂರು ಬಳಿ ಗುಡ್ಡ ಕುಸಿದಿದೆ. ದುರಂತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಈವರೆಗೆ 7 ಮಂದಿಯ ಶವ ಪತ್ತೆಯಾಗಿದೆ. ಉಳಿದ ಮೂವರಿಗಾಗಿ ನಿರಂತರ ಧಾರಾಕಾರ ಮಳೆಯಲ್ಲೂ ಕೂಡ  ಶೋಧ ಕಾರ್ಯ ಮುಂದುವರಿದಿದೆ.  ದುರಂತದಲ್ಲಿ ಗ್ಯಾಸ್ ಟ್ಯಾಂಕರ್‌, ಲಾರಿ ಕೊಚ್ಚಿ ಹೋಗಿದೆ. ರಕ್ಷಣಾ ಕಾರ್ಯಾಚರಣೆ ತ್ವರಿತವಾಗಿ ನಡೆಸಲು ಸೂಚಿಸಿದ್ದೇನೆ. ಸದನ ನಡೆಯುತ್ತಿದ್ದರಿಂದ ತಕ್ಷಣ ಬರಲು ಆಗಿಲ್ಲ. ಉತ್ತರ ಕನ್ನಡ ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ.

ಬೆಳಗಾವಿಯಿಂದ ಮಿಲಿಟರಿ ಪಡೆ ಕೂಡ ನೆರವಿಗೆ ಆಗಮಿಸಿದೆ. ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ ಗುಡ್ಡವಿದೆ. ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಗಂಗಾವಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ಸಿಬ್ಬಂದಿಗಳ ಕಾರ್ಯಕ್ಷಮತೆಗೆ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.


ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಹಲವು ದಿನಗಳಿಂದ ಕಂದಾಯ ಸಚಿವ ಕೃಷ್ಣಬೈರೇಗೌಡ ಸ್ಥಳದಲ್ಲಿ ನಿಂತು ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ: 
ಇನ್ನು ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ಗುಡ್ಡ ಕುಸಿದಿರುವ ಆರೋಪ ಕೇಳಿಬಂದಿದ್ದು, ಯಾರೇ ತಪ್ಪು ಮಾಡಿದ್ದರೂ ಕ್ರಮ ಕೈಗೊಳ್ಳುತ್ತೇವೆ. ರಕ್ಷಣಾ ಕಾರ್ಯಾಚರಣೆ ಮುಕ್ತಾಯ ಬಳಿಕ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Advertisement

ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.‌

Advertisement

Udayavani is now on Telegram. Click here to join our channel and stay updated with the latest news.

Next