Advertisement

ನೀರಿನ ಅಭಾವ ನೀಗಿಸಲು ಕ್ರಮ ಕೈಗೊಳ್ಳಿ: ಪೂರ್ಣಿಮಾ

04:57 PM Aug 07, 2019 | Naveen |

ಹಿರಿಯೂರು: ನಗರದ ತಾಲೂಕು ಕಚೇರಿ ಮುಂಭಾಗದಲ್ಲಿರುವ ವಲಯ ಅರಣ್ಯಾಧಿಕಾರಿ ಕಚೇರಿ ಆವರಣದಲ್ಲಿ 2018-19ನೇ ಸಾಲಿನ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸೋಲಾರ್‌ ಲೈಟ್ ಮತ್ತು ಹೀಟರ್‌ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Advertisement

ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ತಾಲೂಕಿನಲ್ಲಿ ಮಳೆ ಅಭಾವದಿಂದ ಅಂತರ್ಜಲ ಮಟ್ಟ ಕಡಿಮೆಯಾಗಿ ಕೊಳವೆಬಾವಿಗಳಲ್ಲಿ ನೀರಿನ ಕೊರತೆ ಎದುರಾಗಿದೆ. ಈಗಾಗಲೇ ನೀರಿನ ಅಭಾವ ಇರುವ ಕಡೆ ಟ್ಯಾಂಕರ್‌ ಮೂಲಕ ಗ್ರಾಮಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ. ತಾಲೂಕಿನಲ್ಲಿ ಹೊಸದಾಗಿ 180 ಕೊಳವೆಬಾವಿಗಳನ್ನು ಕೊರೆಸಲಾಗಿದೆ. ಜನರಿಗೆ ನೀರಿನ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಅರಣ್ಯ ಇಲಾಖೆಯ ಚಟುವಟಿಕೆಗಳು ಕಡಿಮೆಯಾಗಿವೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದಾರೆಯೇ ಅಥವಾ ಇಲ್ಲವೇ ಎಂಬುದೇ ಗೊತ್ತಾಗುತ್ತಿಲ್ಲ. ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಆದ್ದರಿಂದ ಅರಣ್ಯ ಇಲಾಖೆಯವರು ಎಚ್ಚೆತ್ತುಕೊಂಡು ಸಮರ್ಪಕವಾಗಿ ಕೆಲಸ ಮಾಡಬೇಕೆಂದು ತಾಕೀತು ಮಾಡಿದರು.

ಜಿಲ್ಲಾ ಪಂಚಾಯತ್‌ ಸದಸ್ಯ ಆರ್‌. ನಾಗೇಂದ್ರ ನಾಯ್ಕ ಮಾತನಾಡಿ, ಅರಣ್ಯ ಇಲಾಖೆ ಸರ್ಕಾರದ ಯೋಜನೆಗಳನ್ನು ಸಕಾಲಕ್ಕೆ ಸರಿಯಾಗಿ ಅನುಷ್ಠಾನಗೊಳಿಸಬೇಕು, ಆಯಾ ವರ್ಷದ ಸೌಲಭ್ಯಗಳನ್ನು ನಿಗದಿತ ಅವಧಿಯೊಳಗೇ ವಿತರಣೆ ಮಾಡಬೇಕು. ವಿಳಂಬ ಮಾಡಿದರೆ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ. ಪ್ರಭಾವಿಗಳ ಒತ್ತಡಕ್ಕೆ ಮಣಿಯದೆ ಪಾರದರ್ಶಕವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದರು. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಅವರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‌ ಸದಸ್ಯೆ ರಾಜೇಶ್ವರಿ, ಬಿಜೆಪಿ ಒಬಿಸಿ ಘಟಕದ ರಾಜ್ಯ ಉಪಾಧ್ಯಕ್ಷ ಡಿ.ಟಿ. ಶ್ರೀನಿವಾಸ್‌, ತಾಲೂಕು ಬಿಜೆಪಿ ಅಧ್ಯಕ್ಷ ದ್ಯಾಮೇಗೌಡ, ಲಿಂಗರಾಜು, ಅರಣ್ಯಾಧಿಕಾರಿ ಹರ್ಷ ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next