ಹೊಳಲ್ಕೆರೆ: ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯನ್ನು ಅಕಾರಕ್ಕೆ ತರಲು ಪ್ರತಿಯೊಬ್ಬ ಕಾರ್ಯಕರ್ತರೂ ಶ್ರಮಿಸಬೇಕು ಎಂದು ಶಾಸಕ ಎಂ. ಚಂದ್ರಪ್ಪ ಕರೆ ನೀಡಿದರು.
ಪಟ್ಟಣದಲ್ಲಿ ತಾಲೂಕು ಬಿಜೆಪಿ ವತಿಯಿಂದ ಬುಧವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಬಿಜೆಪಿ ಅಲೆ ಇದ್ದು, ಮೋದಿ ನೇತೃತ್ವದಲ್ಲಿ ನಡೆದ ಅಭಿವೃದ್ಧಿ ಕಾರ್ಯಕ್ರಮಗಳು ಗೆಲುವಿಗೆ ಶ್ರೀರಕ್ಷೆಯಾಗಲಿವೆ. ಮೇ 23ರಂದು ಪ್ರಕಟವಾಗಲಿರುವ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಗೆಲುವು ಸಾಧಿಸಿ ಮತ್ತೂಮ್ಮೆ ಅಧಿಕಾರಕ್ಕೆ ಬರಲಿದೆ. ಬಳಿಕ ರಾಜ್ಯದಲ್ಲೂ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಹಾಗಾಗಿ ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಎಂದರು.
ಪಟ್ಟಣ ಪಂಚಾಯತ್‌ನಲ್ಲಿ 16 ವಾರ್ಡ್‌ಗಳಿದ್ದು, ಈಗಾಗಲೇ ಮೀಸಲಾತಿಯೂ ಘೋಷಣೆಯಾಗಿದೆ. ಬಹಳಷ್ಟು ಜನರು ಪಕ್ಷದ ಪರವಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಅದರೆ ಒಂದು ವಾರ್ಡ್‌ನಿಂದ ಒಬ್ಬರಿಗೆ ಮಾತ್ರ ಟಿಕೆಟ್ ನೀಡಲು ಸಾಧ್ಯ. ಪಕ್ಷವನ್ನು ಅಧಿಕಾರಕ್ಕೆ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸುವುದೇ ನಮ್ಮ ಗುರಿ. ಹಾಗಾಗಿ ಪ್ರತಿಯೊಬ್ಬರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿಬೇಕು. ಯಾರೇ ಸ್ಪರ್ಧಿಸಿದರೂ ಅವರಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದರು.
ಕಳೆದ ಅವಧಿಯಲ್ಲಿ ಪಟ್ಟಣದ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಲಾಗಿತ್ತು,. ಗಣಪತಿ ರಸ್ತೆ ಸೇರಿದಂತೆ ವಿವಿಧ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಾಣ ಮಾಡಲಾಗಿದೆ. ಅದೇ ಮಾದರಿಯಲ್ಲಿ ಮುಂದಿನ ದಿನಗಳಲ್ಲಿ ಪಟ್ಟಣವನ್ನು ಸಂಪೂರ್ಣ ಅಭಿವೃದ್ಧಿಪಡಿಸುವ ಹೊಣೆಗಾರಿಕೆ ನಮ್ಮಲ್ಲರ ಮೇಲಿದೆ. ಅದಕ್ಕಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಂತೆ ಕಾರ್ಯಕರ್ತರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್, ರತ್ನಮ್ಮ, ಜಿಪಂ ಮಾಜಿ ಅಧ್ಯಕ್ಷ ಎಲ್.ಬಿ. ರಾಜಶೇಖರ್, ಜಿಪಂ ಸದಸ್ಯ ಎಂ.ಬಿ. ತಿಪ್ಪೇಸ್ವಾಮಿ, ತಾಲೂಕು ಅಧ್ಯಕ್ಷ ಮಹೇಶ್ವರಪ್ಪ, ಕಾರ್ಯದರ್ಶಿ ಜಗದೀಶ್, ನಗರಾಧ್ಯಕ್ಷ ಬಸವರಾಜ್ ಮತ್ತಿತರರು ಇದ್ದರು.