ಬೆಂಗಳೂರು: ಕೇಂದ್ರ ತನಿಖಾ ಸಂಸ್ಥೆ ಇಡಿ ವಿರುದ್ದ ಕಾಂಗ್ರೆಸ್ ನಾಯಕರ ಪ್ರತಿಭಟನೆಯನ್ನು ಖಂಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರರವರು, “ಕಾಂಗ್ರೆಸ್ ನಾಯಕರ ವರ್ತನೆ ಗುಲಾಮಿತನದ ಅನಾವರಣ” ಎಂದು ಟೀಕಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವರು, ಕಾಂಗ್ರೆಸ್ ನಾಯಕರ ವರ್ತನೆಯಿಂದ ದೇಶದಲ್ಲಿ ಕಾಂಗ್ರೆಸ್ ನಾಯಕರಿಗೊಂದು ಕಾನೂನು, ಜನ ಸಾಮಾನ್ಯರಿಗೆ ಇನ್ನೊಂದು ಕಾನೂನು ಎಂಬಂತಹ ಸಂವಿಧಾನ ಇದೆಯೇ ಎಂದು ಜನತೆಯೇ ಪ್ರಶ್ನಿಸುತ್ತಿದ್ದಾರೆ ಎಂದರು.
ಕಾಂಗ್ರೆಸ್ ನಾಯಕರು ಹಾಗೂ ಅವರ ಹಿಂಬಾಲಕರು ಯಾಕೆ ಪ್ರತಿಭಟನೆ ಮಾಡಬೇಕು ಎಂದು ಪ್ರಶ್ನಿಸಿದ ಗೃಹ ಸಚಿವರು ” 130 ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಅದರ ನಾಯಕರುಗಳಿಗೆ ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲದಿದ್ದರೆ ಹೇಗೆ?” ಎಂದು ಪ್ರಶ್ನಿಸಿದರು.
ಕೋವಿಡ್ ವಿರುದ್ದದ ಹೋರಾಟ ಇನ್ನೂ ನಡೆಯುತ್ತಿದೆ. ಬೆಂಗಳೂರಿನ ಎರಡು ಶಾಲೆಗಳಲ್ಲಿ ಕೋವಿಡ್ ಸ್ಫೋಟಗೊಂಡಿದ್ದು ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುತ್ತಿದೆ, ಇಂಥಹ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಜನ ಸೇರಿಸುವುದು, ಅಪಾಯಕ್ಕೆ ಆಹ್ವಾನ ಕೊಟ್ಟಂತೆ” ಎಂದರು.