ಗೃಹ ಸಚಿವ ಅರಗ ಜ್ಞಾನೇಂದ್ರ ಧರ್ಮಸ್ಥಳ ಭೇಟಿ: ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ
ಬೆಳ್ತಂಗಡಿ: ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
ಬಳಿಕ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ ಮಾಡಿ ಆಶೀರ್ವಾದ ಪಡೆದರು.
ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಗೌರವ ಉಪಸ್ಥಿತಿಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರು ಶಿಲಾನ್ಯಾಸ ನೆರವೇರಿಸಿದರು.
ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷೆ ಜಯಾ ಮೋನಪ್ಪ ಗೌಡ, ದ.ಕ. ಪೊಲೀಸ್ ಅಧೀಕ್ಷಕ ಭಗವಾನ್ ಋಷಿಕೇಶ್ ಸೋನವಣೆ, ಕ.ರಾ.ಪೋ.ವ ಮುಖ್ಯ ಅಭಿಯಂತರ ಎನ್.ಜಿ.ಗೌಡಯ್ಯ, ಬಂಟ್ವಾಳ ವಿಭಾಗ ಸಹಾಯಕ ಪೊಲೀಸ್ ಅಧೀಕ್ಷಕ ಶಿವಾಂಶು ರಜಪೂತ್, ಬೆಳ್ತಂಗಡಿ ಠಾಣೆ ವೃತ್ತ ನಿರೀಕ್ಷಕ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.