ಹೊನ್ನಾಳಿ: ಕೋವಿಡ್ ಮಹಾಮಾರಿ ಸೋಂಕು ಆವರಿಸಿರುವ ಹಿನ್ನೆಲೆಯಲ್ಲಿ ದೇಶವೇ ಲಾಕ್‌ಡೌನ್ ಆಗಿ ಜನತೆ ಮನೆಗಳಿಂದ ಹೊರಬರಲಾಗದೆ ಪರಿತಪಿಸುತ್ತಿದ್ದಾರೆ. ಬಡವರು, ಕೂಲಿ ಕಾರ್ಮಿಕರು ದಿನನಿತ್ಯದ ಜೀವನ ನಡೆಸುವುದು ದುಸ್ತರವಾಗಿದ್ದರಿಂದ ನಮ್ಮ ಸರ್ಕಾರ ಉದ್ಯೋಗ ಖಾತ್ರಿ ಕಾಮಗಾರಿಗೆ ವಿಶೇಷ ಅನುಮತಿ ನೀಡಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ 20 ಲಕ್ಷ ರೂ. ವೆಚ್ಚದ ಊರ ಮುಂದಿನ ಕೆರೆ ಹೂಳೆತ್ತುವ ಕಾಮಗಾರಿಗೆ ಗುರುವಾರ ಚಾಲನೆ ನೀಡಿ ಕಾರ್ಮಿಕರಿಗೆ ಮಾಸ್ಕ್ವಿ ತರಿಸಿ ಅವರು ಮಾತನಾಡಿದರು.
ಹೊನ್ನಾಳಿ ಕ್ಷೇತ್ರದ 47 ಗ್ರಾಪಂಗಳ ವ್ಯಾಪ್ತಿಯಲ್ಲಿ ಕೂಲಿ ಕಾರ್ಮಿಕರ ದುಡಿಯುವ ಕೈಗಳಿಗೆ ಕೆಲಸ ನೀಡಲಾಗಿದೆ. ಸಮಯಕ್ಕೆ ಸರಿಯಾಗಿ ಕೂಲಿ ಹಣ ನೀಡುವಂತೆ ಸಂಬಂಧಿಸಿದ ಗ್ರಾಪಂ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದರು.
ಊರ ಮುಂದಿನ ಕೆರೆ ಹೂಳು ತೆಗೆಯುವ ಕಾಮಗಾರಿಗೆ 6400 ಮಾನವ ದಿನಗಳನ್ನು ಸೃಜಿಸಲಾಗಿದ್ದು, ಕೂಲಿ ಕಾರ್ಮಿಕರಿಗೆ ಗ್ರಾಪಂ ವತಿಯಿಂದ ಕೂಲಿ ಹಣವನ್ನು ಕೂಡಲೇ ನೀಡುವಂತೆ ಸೂಚನೆ ನೀಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಿಂದ ಕೂಲಿ ಕಾರ್ಮಿಕರ ಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಕೂಲಿ ಕಾರ್ಮಿಕರ ಹಿತರಕ್ಷಣೆಗಾಗಿ ಕಾಮಗಾರಿ ನಡೆಯುವ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ಪೆಟ್ಟಿಗೆ, ಸ್ಯಾನಿಟೈಸರ್, ಮಾಸ್ಕ್ಗಳನ್ನು ಇರಿಸಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ತಾಪಂ ಕಾರ್ಯನಿರ್ವಹಣಾಧಿಕಾರಿ ಎಸ್.ಎಲ್. ಗಂಗಾಧರಮೂರ್ತಿ ಇದ್ದರು.