Advertisement

ಹೊನ್ನಾವರ ಹತ್ಯೆ: ಪ್ರತಿಭಟನೆಗೆ ಬಿಜೆಪಿ ನಿರ್ಧಾರ

06:00 AM Dec 11, 2017 | Team Udayavani |

ಬೆಂಗಳೂರು: ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಮತ್ತು ಅದಕ್ಕೆ ಕಾರಣವಾಗುತ್ತಿರುವ ಇಸ್ಲಾಂ ಮೂಲಭೂತವಾದಿ ಸಂಘಟನೆಗಳ ಬಗ್ಗೆ ರಾಜ್ಯ ಸರ್ಕಾರದ ಮೃದು ಧೋರಣೆಯನ್ನು ಚುನಾವಣಾ ಅಸ್ತ್ರವಾಗಿ ಬಳಸಿಕೊಳ್ಳಲು ಬಿಜೆಪಿ ತೀರ್ಮಾನಿಸಿದೆ.

Advertisement

ಇದರ ಅಂಗವಾಗಿ ಹೊನ್ನಾವರದಲ್ಲಿ ಕಗ್ಗೊಲೆಯಾದ ಪರೇಶ್‌ ಮೇಸ್ತ ಪ್ರಕರಣ ಸೇರಿದಂತೆ ಇದುವರೆಗೆ ಹತ್ಯೆಯಾದ 19 ಮಂದಿ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಹತ್ಯೆ ವಿರೋಧಿಸಿ ಡಿ. 12ರಂದು ಬೆಂಗಳೂರಿನಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಪಕ್ಷದ ಎಲ್ಲಾ ಶಾಸಕರು ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರನ್ನು ಭೇಟಿಯಾಗಿ ಈ ಎಲ್ಲಾ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಬೇಕು ಮತ್ತು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಮನವಿ ಮಾಡಲು ನಿರ್ಧರಿಸಿದೆ.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ನೇತೃತ್ವದಲ್ಲಿ ನಡೆದ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಅರವಿಂದ ಲಿಂಬಾವಳಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಪರೇಶ್‌ ಮೇಸ್ತರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮುಖದ ಮೇಲೆ ಕಾದ ಎಣ್ಣೆ ಸುರಿದು ವಿಕಾರಗೊಳಿಸಲಾಗಿದೆ. ಕೈ ಮೇಲಿದ್ದ ಜೈ ಶ್ರೀರಾಮ್‌ ಹಚ್ಚೆಯನ್ನು ಕೆತ್ತಿ ವಿರೂಪಗೊಳಿಸಿದ್ದಾರೆ. ಹಿಂಸಿಸಿ, ಕ್ರೂರ ರೀತಿಯಲ್ಲಿ ಕೊಂದಿದ್ದಾರೆ. ಡಿ.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮ ಇದ್ದ ಕಾರಣ ಡಿ. 6ರಂದೇ ಪರೇಶ್‌ ಕೊಲೆ ನಡೆದಿದ್ದರೂ ಅದನ್ನು ಮುಚ್ಚಿಡಲಾಗಿತ್ತು.  ಇದರಲ್ಲಿ ಪಿಎಫ್ಐ ಸಂಘಟನೆಯ ಕಾರ್ಯಕರ್ತರ ಕೈವಾಡವಿದ್ದು, ಸಂಘಟನೆ ಬಗ್ಗೆ ಮೃದು ಧೋರಣೆ ಹೊಂದಿರುವ ಕಾರಣದಿಂದಲೇ ಸರ್ಕಾರ ಪೊಲೀಸರ ಮೂಲಕ ಅದನ್ನು ಮುಚ್ಚಿಡಲು ಪ್ರಯತ್ನಿಸಿತ್ತು ಎಂಬ ಅಭಿಪ್ರಾಯಕ್ಕೆ ಬಂದ ಸಭೆ, ಈ ಹತ್ಯೆ ಖಂಡಿಸಿ ಡಿ. 18ರಂದು ಹೊನ್ನಾವರದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌ ಮತ್ತು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಅವರ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಿತು.

ಇದರ ಜತೆಗೆ ಪರೇಶ್‌  ಹತ್ಯೆ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತರ ಹತ್ಯೆ ಮತ್ತು ಈ ಪ್ರಕರಣಗಳಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಡಿ. 15ರಿಂದ ಆರಂಭವಾಗುವ ಸಂಸತ್‌ ಅಧಿವೇಶನದಲ್ಲಿ ಪ್ರಸ್ತಾಪಿಸಲು ಮತ್ತು ಈ ಕುರಿತು ರಾಜ್ಯದ ಸಂಸದರು ಸಚಿವರ ನೇತೃತ್ವದಲ್ಲಿ ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ಕೂಡ ನಿರ್ಧರಿಸಲಾಗಿದೆ.

Advertisement

ಧಾರವಾಡ ಜಿ.ಪಂ. ಸದಸ್ಯರಾಗಿದ್ದ ಯೋಗೀಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಸಚಿವ ವಿನಯ್‌ ಕುಲಕರ್ಣಿ ಅವರ ಪಾತ್ರ ಮತ್ತು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತಂತೆ ಸಿಬಿಐ ನಡೆಸುತ್ತಿರುವ ತನಿಖೆಯಲ್ಲಿ ಹೊಸ ವಿಚಾರಗಳು ಬೆಳಕಿಗೆ ಬರುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯೋಗೀಶ್‌ ಗೌಡ ಹತ್ಯೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂಬ ಒತ್ತಾಯ ಮತ್ತು ಸಚಿವರಿಬ್ಬರ ವಿರುದ್ಧದ ಹೋರಾಟ ಮುಂದುವರಿಸಲು ಕೂಡ ತೀರ್ಮಾನಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next