Advertisement

ಸರ್ಕಾರಿ ಯೋಜನೆ ಜನರಿಗೆ ತಲುಪಲಿ: ವಿಶಾಲಾಕ್ಷಿ

11:41 AM Aug 01, 2019 | Naveen |

ಹೊಸದುರ್ಗ: ಬಡಜನರ ಶ್ರೇಯೋಭಿವೃದ್ಧಿಗೆ ಸರ್ಕಾರ ಜಾರಿಗೊಳಿಸಿರುವ ಹಲವು ಯೋಜನೆಗಳನ್ನು ಸಮರ್ಪಕವಾಗಿ ಜನರ ಮನೆಬಾಗಿಲಿಗೆ ತಲುಪಿಸಲು ಜನಸಂಪರ್ಕ ಸಭೆಗಳು ಸಹಕಾರಿ ಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್‌ ಹೇಳಿದರು.

Advertisement

ತಾಲೂಕಿನ ಮಧುರೆ ಗ್ರಾಮದ ಚನ್ನಕೇಶವ ಪ್ರೌಢಶಾಲೆ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಬರಪೀಡಿತ ಜಿಲ್ಲೆಯಾಗಿದ್ದು ಸರ್ಕಾರದ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಬೇಕು. ಅಲ್ಲದೆ ಸ್ಥಳೀಯ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಪರಿಹರಿಸುವುದು ಜನಸಂಪರ್ಕ ಸಭೆಯ ಮುಖ್ಯ ಉದ್ದೇಶ. ‘ನಮ್ಮ ನಡೆ ಅಭಿವೃದ್ಧಿಯ ಕಡೆ’ ಎಂಬ ಘೋಷವಾಕ್ಯದೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮನೆ ಬಾಗಿಲಿಗೆ ಬಂದಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು. ಗ್ರಾಮೀಣ ಭಾಗದ ಜನರು ಜಿಲ್ಲಾಧಿಕಾರಿ ಸೇರಿದಂತೆ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಿಯೇ ಇರುವುದಿಲ್ಲ. ಸರ್ಕಾರದ ಹಲವು ಯೋಜನೆಗಳ ಬಗ್ಗೆ ತಿಳಿವಳಿಕೆಯೂ ಇರುವುದಿಲ್ಲ. ಸಣ್ಣಪುಟ್ಟ ಕೆಲಸ ಕಾರ್ಯಗಳಿದ್ದರೂ ಕಚೇರಿಗಳಿಗೆ ಅಲೆದಾಟ ನಡೆಸುತ್ತಾರೆ. ಹಾಗಾಗಿ ಈ ತರಹದ ಜನಸಂಪರ್ಕ ಸಭೆಗಳನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಜಿಲ್ಲೆಯಲ್ಲಿ ಇದು ಎರಡನೇ ಜನಸಂಪರ್ಕ ಸಭೆಯಾಗಿದೆ ಎಂದರು.

ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಉದ್ಘಾಟಿಸಿ ಮಾತನಾಡಿ, ಮಧುರೆ ಹೋಬಳಿಯ ಜನರು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಜಿಲ್ಲಾಡಳಿತ ಇದನ್ನು ಮನಗಂಡು ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ತಲುಪಿಸಲು ಜನಸಂಪರ್ಕ ಸಭೆಯನ್ನು ಹಮ್ಮಿಕೊಂಡಿದೆ. ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯಲು ಅರ್ಹರಿದ್ದರೂ ಸೌಲಭ್ಯದಿಂದ ವಂಚಿತರಾದವರು, ವಯೋವೃದ್ಧರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಲಾಗುವುದು. ಸಾರ್ವಜನಿಕರು ಕಚೇರಿಗಳಿಗೆ ಸಂಬಂಧಿಸಿದ

ಯಾವುದಾದದರೂ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೆ ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದರು.

Advertisement

ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷೆ ಪ್ರೇಮಾ ರವೀಂದ್ರ, ಗ್ರಾಪಂ ಅಧ್ಯಕ್ಷೆ ಪಲ್ಲವಿ ಸಂತೋಷ್‌, ತಾಪಂ ಸದಸ್ಯರಾದ ಮಲ್ಲಿಕಾರ್ಜುನ್‌, ವಿನೋದ ಈಶ್ವರ ನಾಯ್ಕ, ಹೇಮಾ ಮಂಜುನಾಥ್‌, ಯಶೋದಮ್ಮ, ಮಂಜುಳಾ ಚಿದಾನಂದ, ಹಾಲಪ್ಪ, ಪುಟ್ಟ ನಾಯ್ಕ, ಶಾಂತಲಾ ಗಿರೀಶ್‌ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಆರೋಗ್ಯ ಇಲಾಖೆ ವತಿಯಿಂದ 25 ಗರ್ಭಿಣಿಯರಿಗೆ ಸೀಮಂತ ನೆರವೇರಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲಾಯಿತು.

ಅರಣ್ಯ ಇಲಾಖೆಯಿಂದ ಸಸ್ಯ ಸಂತೆ, ಕೃಷಿ ಇಲಾಖೆಯಿಂದ ಕೃಷಿ ವಸ್ತು ಪ್ರದರ್ಶನ ಹಾಗೂ ರಿಯಾಯತಿ ದರದಲ್ಲಿ ಬಿತ್ತನೆ ಬೀಜಗಳ ವಿತರಣೆ, ಪಶು ಸಂಗೋಪನೆ ಇಲಾಖೆಯಿದ ದೇಶಿಯ ತಳಿ ಹಸುಗಳು, ಹಸು, ಕುರಿ, ಮೀನು, ಕೋಳಿ, ಹಂದಿ ಸಾಕಾಣಿಕೆ ಮಾಹಿತಿ, ಪಂಚಾಯತ್‌ರಾಜ್‌ ಇಲಾಖೆಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಮಾಹಿತಿ ನೀಡಲು ಮಳಿಗೆ ತೆರೆಯಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next