Advertisement

“ಆಸ್ಪತ್ರೆ ಕ್ಯಾಂಟೀನ್‌’ಕಾಮಗಾರಿ ಆರಂಭ

11:43 AM Sep 12, 2017 | Team Udayavani |

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಿಗೆ ಬರುವವರ ಅನುಕೂಲಕ್ಕಾಗಿ ನಗರದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲು ಈಗಾಗಲೇ ಬಿಬಿಎಂಪಿ ಯೋಜನೆ ರೂಪಿಸಿದ್ದು, ಪ್ರಾಯೋಗಿಕವಾಗಿ ಮಲ್ಲೇಶ್ವರದ ಕೆ.ಸಿ.ಜನರಲ್‌ ಆಸ್ಪತ್ರೆಯ ಆವರಣದಲ್ಲಿ ಕ್ಯಾಂಟೀನ್‌ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗಿದೆ.

Advertisement

ಇಂದಿರಾ ಕ್ಯಾಂಟೀನ್‌ ಯೋಜನೆಗೆ ನಗರದ ಜನತೆಯಿಂದ ಉತ್ತಮ ಸ್ಪಂದನೆ ಸಿಕ್ಕ ಹಿನ್ನೆಲೆಯಲ್ಲಿ ಹೆಚ್ಚಿನ ಜನರಿರುವ ಕಡೆಗಳಿಗೆ ಯೋಜನೆ ವಿಸ್ತರಿಸಲಾಗುತ್ತಿದೆ. ಆಸ್ಪತ್ರೆಗಳಿಗೆ ಬರುವ ಬಡ ರೋಗಿಗಳು ಹಾಗೂ ಅವರ ಸಂಬಂಧಿಗಳಿಗೆ ಕಡಿಮೆ ದರದಲ್ಲಿ ಆಹಾರ ಪೂರೈಸುವ ಉದ್ದೇಶದಿಂದ ಯೋಜನೆಯನ್ನು ಸರ್ಕಾರಿ ಆಸ್ಪತ್ರೆಗಳಿಗೆ ವಿಸ್ತರಿಸಲಾಗುತ್ತಿದೆ.

ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ಕ್ಯಾಂಟೀನ್‌ ನಿರ್ಮಿಸಿ ಯಾವ ರೀತಿಯ ಸ್ಪಂದನೆ ದೊರೆಯುತ್ತದೆ ಎಂದು ಗಮನಿಸಿದ ನಂತರ ವಿಕ್ಟೋರಿಯಾ, ಜಯದೇವ ಹಾಗೂ ಸಂಜಯ್‌ ಗಾಂಧಿ ಆಸ್ಪತ್ರೆಗಳಿಗೂ ಯೋಜನೆ ವಿಸ್ತರಿಸಲು ಪಾಲಿಕೆಯ ಅಧಿಕಾರಿಗಳು ತೀರ್ಮಾನಿಸಿದ್ದಾರೆ. 

ಇಂದಿರಾ ಕ್ಯಾಂಟೀನ್‌ಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಆಹಾರ ನೀಡಲಾಗುತ್ತಿದೆ ಎಂಬ ಆರೋಪಗಳಿದ್ದು, ಯಾವುದೇ ಯೋಜನೆಯ ಆರಂಭದಲ್ಲಿ ಕೆಲವೊಂದು ವ್ಯತ್ಯಾಸಗಳು ಕಂಡು ಬರುವುದು ಸಾಮಾನ್ಯ. ಅವೆಲ್ಲವುಗಳನ್ನು ಶೀಘ್ರವೇ ಬಗೆಹರಿಸಲಾಗುವುದು ಮತ್ತು ಆಹಾರ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.

ಪ್ರಚಾರಕ್ಕಾಗಿ ಭೇಟಿ ನೀಡಿದ್ದಾರೆ
“ಮಳೆಯಿಂದಾಗಿ ಹಾನಿಗೊಳಗಾಗಿರುವ ಸರ್ವಜ್ಞನಗರ ಕ್ಷೇತ್ರದ ನಂದಗೋಕುಲ ಬಡಾವಣೆಗೆ ಯಡಿಯೂರಪ್ಪ ಅವರು ಪ್ರಚಾರಕ್ಕಾಗಿ ಭೇಟಿ ನೀಡಿದ್ದಾರೆ,’ ಎಂದು ಜಾರ್ಜ್‌ ಟೀಕಿಸಿದರು. ಅನಾಹುತ ಸಂಭವಿಸಿದ ಹಿನ್ನೆಲೆಯಲ್ಲಿ ಪಾಲಿಕೆಯ ಸದಸ್ಯರು, ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದ್ದು, ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗಿದೆ.

Advertisement

ಜತೆಗೆ ಯಾವುದೇ ಅನಾಹುತ ಸಂಭವಿಸದಂತೆ ಅಲ್ಲಿನ ಕುಟುಂಬಗಳನ್ನು ಸಮೀಪದ ಶಾಲೆಗೆ ಸ್ಥಳಾಂತರಿಸಿ ಅವರಿಗೆ ಅಗತ್ಯ ಸೌಲಭ್ಯಗಳನ್ನು ನೀಡಲಾಗಿದೆ. ಆದರೆ, ಯಡಿಯೂರಪ್ಪ ಅವರು ಎಲ್ಲ ಮುಗಿದ ನಂತರ ಅಲ್ಲಿಗೆ ಭೇಟಿ ನೀಡಿ ಇಲ್ಲಿ ಯಾರು ಇಲ್ಲ, ಏನು ಕ್ರಮಕೈಗೊಂಡಿಲ್ಲ ಎಂದು ಪ್ರಚಾರಕ್ಕಾಗಿ ಟೀಕೆ ಮಾಡುತ್ತಿದ್ದಾರೆ ಎಂದು ದೂರಿದರು. 

ನಗರದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದ ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಿವೆ. ಮಳೆ ನಿಂತ ಕೂಡಲೇ ಕಾಮಗಾರಿ ಆರಂಭಿಸಲಾಗುವುದು. ರಸ್ತೆಗಳ ಡಾಂಬರೀಕರಣ, ರಸ್ತೆ ಗುಂಡಿ ಸೇರಿದಂತೆ ವಿವಿಧ ಕಾಮಗಾರಿಗಳಿಗಾಗಿ ಐದು ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. 
-ಕೆ.ಜೆ.ಜಾರ್ಜ್‌, ಸಚಿವ

Advertisement

Udayavani is now on Telegram. Click here to join our channel and stay updated with the latest news.

Next