ಬೆಂಗಳೂರು: ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವರದಕ್ಷಿಣೆ ಗಾಗಿ ಮಗಳನ್ನು ಕೊಲೆ ಮಾಡಿರುವುದಾಗಿ ಆರೋಪಿಸಿ ರಂಜಿತಾ ಪಾಲಕರು ಪತಿ ಮಧು, ಆತನ ಕುಟುಂ ಬಸ್ಥರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ಮೂಲದ ನಾಗದೇವನಹಳ್ಳಿಯ ನಿವಾಸಿ ರಂಜಿತಾ (31)ಮೃತರು.
ತುಮಕೂರು ಜಿಲ್ಲೆ ತುರುವೇಕೆರೆ ಮೂಲದ ಮಧು ಅವರನ್ನು 5 ವರ್ಷ ಹಿಂದೆ ರಂಜಿತಾ ವಿವಾಹವಾಗಿದ್ದರು. ದಂಪತಿಗೆ 3 ವರ್ಷದ ಹೆಣ್ಣು ಮಗು ಇದೆ. ರಂಜಿತಾ ವೃತ್ತಿಯಲ್ಲಿ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದರೆ, ಪತಿ ಮಧು ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ವಿವಾಹದ ಆರಂಭದಲ್ಲಿ ದಂಪತಿ ಅನ್ಯೋನ್ಯವಾಗಿದ್ದರು. ಬಳಿಕ ಪತಿ ಮಧು ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದೆ. ಸೋಮವಾರ ಮನೆ ಕೊಠಡಿಯಲ್ಲಿ ರಂಜಿತಾ ಸೀರೆಯಿಂದ ಫ್ಯಾನ್‌ಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೊಠಡಿಯಿಂದ ರಂಜಿತಾ ಹೊರ ಬಾರದಿದ್ದಾಗ ಮನೆಯವರು ಬಾಗಿಲು ಒಡೆದು ಒಳಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಜ್ಞಾನಭಾರತಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವರದಕ್ಷಿಣೆ ಕಿರುಕುಳ ಆರೋಪ: ಮಧು ಮತ್ತು ಆತನ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ. ವರದಕ್ಷಿಣೆ ನೀಡಿಲ್ಲವೆಂದು ನಮ್ಮ ಮಗಳನ್ನು ಕೊಲೆ ಮಾಡಿದ್ದಾರೆ. ವರದಕ್ಷಿಣೆ ಕಿರುಕುಳದ ಬಗ್ಗೆ ರಂಜಿತಾ ಆಗಾಗ ತಾಯಿ ಬಳಿ ಹೇಳಿಕೊಳ್ಳುತ್ತಿದ್ದರು. ರಂಜಿತಾ ಸಾವಿಗೂ ಮುನ್ನ ತಾಯಿಗೆ ವಿಡಿಯೋ ಕಾಲ್ ಮಾಡಿದ್ದರು ಎಂದು ರಂಜಿತಾ ಪಾಲಕರು ದೂರಿನಲ್ಲಿ ಆರೋಪಿಸಿದ್ದಾರೆ.