ಚಿಕ್ಕೋಡಿ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರಂತಹ ಸಮರ್ಥ ನಾಯಕರು ಇರುವಾಗ ಕಾಂಗ್ರೆಸ್‌ನ ರಾಹುಲ್ ಗಾಂಧಿ ಯಾವ ಲೆಕ್ಕ. ದೇಶ ಮುನ್ನಡೆಸಿಕೊಂಡು ಹೋಗುವ ಎದೆಗಾರಿಕೆ ಇರುವುದು ನರೇಂದ್ರ ಮೋದಿಗೆ ಮಾತ್ರ. ಹೀಗಿರುವಾಗ ರಾಜ್ಯದ ಜನ ಬಿಜೆಪಿಗೆ ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ತಾಲೂಕಿನ ಅಂಕಲಿ ಗ್ರಾಮದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪರ ಅಲೆಯಿದ್ದು, ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಬಿಜೆಪಿ ಅಧಿಕಾರಕ್ಕೆ ತರಬೇಕೆನ್ನುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯದ ಉದ್ದಗಲಕ್ಕೂ ವಿಜಯ ಸಂಕಲ್ಪ ಯಾತ್ರೆ ಹಮ್ಮಿಕೊಂಡಿದೆ.
ಯಾತ್ರೆಯಲ್ಲಿ ಜನರ ಉತ್ಸಾಹ ನೋಡಿದರೆ ಮತ್ತೊಮ್ಮೆ ಕಮಲ ಅರಳುವುದು ನಿಶ್ಚಿತವಾಗಿದೆ. ರಾಜ್ಯದಲ್ಲಿ ಮತ್ತು ಬೆಳಗಾವಿ ಜಿಲ್ಲೆಯಯಲ್ಲಿ ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಮತ ಇಲ್ಲ. ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಹೆಚ್ಚಿನ ಸ್ಥಾನ ಗೆಲ್ಲಿಸಲು ಪ್ರಯತ್ನ ಮಾಡಲಾಗುತ್ತದೆ. ಚುನಾವಣೆ ಪೂರ್ವದಲ್ಲಿಯೇ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿಗಾಗಿ ಪೈಪೋಟಿ ನಡೆಸುತ್ತಿದ್ದು, ಹಗಲುಗನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಜನ ತಿರಸ್ಕಾರ ಮಾಡಿದ್ದಾರೆ ಎಂದರು.
ಸುಳ್ಳು ಹೇಳುವ ಕಾಂಗ್ರೆಸ್ ಎಂದೂ ನಂಬಬೇಡಿ
ಇದೇ ವೇಳೆ ಚಿಕ್ಕೋಡಿ-ಸದಲಗಾ ಕ್ಷೇತ್ರದ ಮಾಂಜರಿ ಹಾಗೂ ರಾಯಬಾಗದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಬಿಎಸ್‌ವೈ, ಬಿಜೆಪಿ ಸರ್ಕಾರ ಜಾರಿಗೆ ತಂದ ಅನೇಕ ಯೋಜನೆ ಹಾಗೂ ಅನುದಾನವನ್ನು ನಾವೇ ಮಾಡಿದ್ದು ಎಂದು ಸುಳ್ಳು ಹೇಳುವ ಕಾಂಗ್ರೆಸ್ ಪಕ್ಷವನ್ನು ಎಂದೂ ನಂಬಬಾರದು. ರಾಷ್ಟ್ರಾದ್ಯಂತ ಕಾಂಗ್ರೆಸ್ ಠೇವಣಿ ಕಳೆದುಕೊಳ್ಳುತ್ತಿದೆ. ಮೊನ್ನೆ ನಡೆದ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ನೆಲಕಚ್ಚಿರುವುದು ನೋಡಿದರೆ ರಾಹುಲ್ ಗಾಂಧಿ ಪಾದಯಾತ್ರೆಯಿಂದ ಯಾವುದೇ ಮ್ಯಾಜಿಕ್ ನಡೆದಿಲ್ಲವೆಂದು ಸಾಬೀತಾಗಿದೆ. ಜನಪರವಾದ ಅಭಿವೃದ್ಧಿ ಕಾರ್ಯ ಮಾಡುತ್ತಿರುವ ಡಬಲ್ ಎಂಜಿನ್ ಸರ್ಕಾರಕ್ಕೆ ನಿಮ್ಮ ಆಶೀರ್ವಾದವಿರಲಿ ಎಂದರು.