ಬೆಂಗಳೂರು: ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಜ್ಯಸ ಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಕೆಲಸಕ್ಕೆ ಬಿಜೆಪಿ ರಾಜ್ಯ ನಾಯಕರು ಮುಂದಾಗಿದ್ದಾರೆ. ಅದು ಹೇಗೆ ಸರ್ಕಾರ ಬೀಳಿಸುತ್ತಾರೋ ನಾನೂ ನೋಡುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ರಾಜಕಾರಣಕ್ಕಾಗಿ ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಸೇರಿ ವಿವಿಧ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಬಿಜೆಪಿ ಅಧಿಕಾರ ಹಿಡಿಯುವ ಕನಸು ಕಾಣುತ್ತಿದೆ. ಅದು ಈಡೇರುವುದಿಲ್ಲ ಎಂದು ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಗಟ್ಟಿಯಾಗಿದ್ದು ನಾವೆಲ್ಲೂ ಒಗ್ಗಟ್ಟಾಗಿದ್ದೇವೆ. ಯಡಿಯೂರಪ್ಪ ಏನೇನು ಮಾಡುತ್ತಾರೋ ಮಾಡಲಿ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ.ಸುರೇಶ್ ವಿರುದ್ಧ ಆದಾಯ ತೆರಿಗೆ ಇಲಾಖೆಯಲ್ಲಿ ದಾಖಲಾಗಿರುವ ಪ್ರಕರಣವನ್ನೇ ಮುಂದಿಟ್ಟುಕೊಂಡು ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ನಾಯಕರು ನಾನಾ ಕಸರತ್ತುಗಳಲ್ಲಿ ತೊಡಗಿದ್ದಾರೆ. ಯಾರ್ಯಾರು ಏನೇನು ಮಾಡುತ್ತಿದ್ದಾರೆ ಎಂಬುದೆಲ್ಲಾ ಗೊತ್ತಿದೆ ಎಂದು ತಿಳಿಸಿದರು.
ರಾಜಕಾರಣ ಯಾವ ದಿಕ್ಕಿಗೆ ಸಾಗುತ್ತಿದೆ ಎಂದು ಜನಸಾಮಾನ್ಯರಿಗೆ ಅರ್ಥವಾಗುತ್ತಿದೆ. ಬಿಜೆಪಿಯ ಕೇಂದ್ರ ಸರ್ಕಾರ ರಾಜ್ಯದ ಮೈತ್ರಿ ಸರ್ಕಾರವನ್ನು ಉರುಳಿಸಲು ನಿರಂತರವಾಗಿ ವ್ಯರ್ಥ ಪ್ರಯತ್ನ ಮಾಡುತ್ತಿದೆ. ವಿರೋಧ ಪಕ್ಷಗಳನ್ನು ಮಟ್ಟ ಹಾಕಲು ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಇದರಿಂದ ಅವರು ಯಾವ ಸಾಧನೆ ಮಾಡುತ್ತಾರೋ ತಿಳಿಯದು. ಆದರೆ, ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ನಡೆಸುವ ಪ್ರಯತ್ನಗಳು ಫಲ ನೀಡುವುದಿಲ್ಲ ಎಂದರು.