ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ದಕ್ಷಿಣ ಭಾರತದ ಮತದಾರರನ್ನು ಸೆಳೆಯಲು ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಆದರೆ ದಕ್ಷಿಣದ 130 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಭವಿಷ್ಯ ನುಡಿದಿದ್ದಾರೆ.
ಇದನ್ನೂ ಓದಿ:Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣ ರಾಜ್ಯಗಳಲ್ಲಿ ತನ್ನ ಪ್ರಭಾವ ಹೆಚ್ಚಿಸಿಕೊಳ್ಳಲು ಮುಂದಾಗಿದ್ದು, ಅದರಲ್ಲೂ ಕೇರಳ ಮತ್ತು ತಮಿಳುನಾಡು ರಾಜ್ಯದಲ್ಲಿ ಹೆಚ್ಚು ಗಮನ ಹರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡಾ ಕಳೆದ ಕೆಲವು ವಾರಗಳಲ್ಲಿ ಈ ಎರಡು ರಾಜ್ಯಗಳಿಗೆ ಹಲವು ಬಾರಿ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿದ್ದಾರೆ.
ಈ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ 115ರಿಂದ 120 ಸ್ಥಾನಗಳನ್ನು ಪಡೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಷವನ್ನು ಸೋಲಿಸಲಿದೆ ಎಂದು ರೆಡ್ಡಿ ಭವಿಷ್ಯ ನುಡಿದಿದ್ದಾರೆ.
ದಕ್ಷಿಣ ರಾಜ್ಯಗಳಲ್ಲಿ 130 ಲೋಕಸಭಾ ಸ್ಥಾನಗಳಿವೆ. ಭಾರತೀಯ ಜನತಾ ಪಕ್ಷ ಅಂದಾಜು 12ರಿಂದ 15 ಸ್ಥಾನಗಳಲ್ಲಿ ಜಯಗಳಿಸಬಹುದು. ಉಳಿದ ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಜಯಭೇರಿ ಬಾರಿಸಲಿದೆ ಎಂದು ರೆಡ್ಡಿ ಕೇರಳದ ಅಟ್ಟಿಂಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಡೂರ್ ಪ್ರಕಾಶ್ ಅವರ ಪರ ಪ್ರಚಾರ ನಡೆಸುತ್ತಿದ್ದ ವೇಳೆ ಎನ್ ಡಿಟಿವಿ ಜತೆ ಮಾತನಾಡುತ್ತ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ತೆಲಂಗಾಣದಲ್ಲಿ ಬಿಜೆಪಿ ಯಾವತ್ತೂ ಗೆಲುವು ಸಾಧಿಸಲು ಸಾಧ್ಯವಿಲ್ಲ. ಕೇರಳದಲ್ಲಿ ಇಂಡಿಯಾ ಮೈತ್ರಿಕೂಟ 20 ಲೋಕಸಭಾ ಕ್ಷೇತ್ರಗಳಲ್ಲಿ ಜಯಗಳಿಸಿದೆ. ಈ ಬಾರಿ ಬಿಜೆಪಿಗೆ ಠೇವಣಿ ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ರೆಡ್ಡಿ ತಿಳಿಸಿದ್ದಾರೆ. ತೆಲಂಗಾಣದಲ್ಲಿ 17 ಲೋಕಸಭಾ ಕ್ಷೇತ್ರಗಳಲ್ಲಿ 14 ಸ್ಥಾನಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದರು.
ತೆಲಂಗಾಣದಲ್ಲಿ ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ ಎಸ್ ಮತ್ತು ಬಿಜೆಪಿ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿತ್ತು. ಕಾಂಗ್ರೆಸ್ 64 ಸ್ಥಾನಗಳಲ್ಲಿ ಜಯಗಳಿಸಿ ಅಧಿಕಾರದ ಗದ್ದುಗೆ ಏರಿತ್ತು. ಬಿಆರ್ ಎಸ್ ಕೇವಲ 39 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. 111 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ 8 ಸ್ಥಾನ ಪಡೆದಿತ್ತು.