ಬೆಂಗಳೂರು: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಅನುಮತಿ ನೀಡಿ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಕೈಗೊಂಡ ನಿರ್ಣಯ ಆಧರಿಸಿ ಮುಂದಿನ ಕ್ರಮ ಜರುಗಿಸಬಾರದು ಎಂದು ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.
ಹುಬ್ಬಳ್ಳಿ-ಅಂಕೋಲಾ ನಡುವೆ 164.44 ಕಿ.ಮೀ ಉದ್ದದ ರೈಲು ಮಾರ್ಗ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಅದಕ್ಕಾಗಿ 595.64 ಹೆಕ್ಟೇರ್ ಅರಣ್ಯ ಪ್ರದೇಶದಲ್ಲಿ ಎರಡು ಲಕ್ಷಕ್ಕೂ ಅಧಿಕ ಮರಗಳನ್ನು ಕತ್ತರಿಸಲು ಯೋಜಿಸಿ, ಅನುಮತಿಗಾಗಿ ಕರ್ನಾಟಕ ವನ್ಯಜೀವಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಕುರಿತು 2020ರ ಮಾ.8ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಮಂಡಳಿಯ ಸಭೆಯಲ್ಲಿ, 595.64 ಹೆಕ್ಟೇರ್ ಅರಣ್ಯ ಪ್ರದೇಶದಲ್ಲಿ ಕಾಮಗಾರಿ ನಡೆಸಬೇಕಾದ ಕಾರಣವನ್ನು ಪರಿಗಣಿಸಿ ಯೋಜನೆಯ ಪ್ರಸ್ತಾವನೆ ತಿರಸ್ಕರಿಸಿ ಅವಿರೋಧವಾಗಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ, ರಾಜ್ಯ ವನ್ಯಜೀವಿ ಮಂಡಳಿಯು ಮಾ.20ರಂದು ನಡೆಸಿದ ಸಭೆಯಲ್ಲಿ ಯೋಜನೆಗೆ ಅನುಮತಿ ನೀಡಲು ನಿರ್ಣಯ ಕೈಗೊಂಡು ಅದನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಕಳುಹಿಸಿಕೊಟ್ಟಿತ್ತು. ಆ ಮೂಲಕ ಮಾ.8ರಂದು ಕೈಗೊಂಡಿದ್ದ ನಿರ್ಣಯವನ್ನು ಬದಲಿಸಲಾಗಿತ್ತು. ಇದನ್ನು ಪ್ರಶ್ನಿಸಿ “ಪ್ರಾಜೆಕ್ಟ್ ವೃಕ್ಷ ಫೌಂಡೇಷನ್’ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಮತ್ತು ನ್ಯಾ|ಆರ್. ನಟರಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.
ರಾಜ್ಯ ಸರ್ಕಾರಕ್ಕೆ ನಿರ್ದೇಶನ: ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, 2020ರ ಮಾ.20ರಂದು ರಾಜ್ಯ ವನ್ಯಜೀವಿ ಮಂಡಳಿ ಕೈಗೊಂಡಿರುವ ನಿರ್ಣಯ ಆಧರಿಸಿ ಹುಬ್ಬಳ್ಳಿ-ಅಂಕೋಲ ರೈಲು ಮಾರ್ಗ ನಿರ್ಮಾಣ ಯೋಜನೆ ಸಂಬಂಧ ಮುಂದಿನ ಕ್ರಮ ಜರುಗಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ಮಧ್ಯಂತರ ಆದೇಶ ಹೊರಡಿಸಿತು.
ಅಲ್ಲದೇ, ಅರ್ಜಿಯಲ್ಲಿ ಪ್ರತಿವಾದಿಗಳಾದ ರಾಜ್ಯ ವನ್ಯಜೀವಿ ಮಂಡಳಿ, ರಾಜ್ಯ ಅರಣ್ಯ ಮತ್ತು ಪರಿಸರ ಇಲಾಖೆ, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ, ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಗೆ ನ್ಯಾಯಪೀಠ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸಬೇಕೆಂದು ಸೂಚಿಸಿ ವಿಚಾರಣೆ ಜು.14ಕ್ಕೆ ಮುಂದೂಡಿದೆ.
ಕರ್ನಾಟಕ ವನ್ಯಜೀವಿ ಮಂಡಳಿ ಮಾ.8ರಂದು ನಡೆಸಿದ ಸಭೆಯಲ್ಲಿ ಹುಬ್ಬಳ್ಳಿ-ಅಂಕೋಲ ರೈಲು ಮಾರ್ಗ ನಿರ್ಮಾಣ ಯೋಜನೆಯ ಪ್ರಸ್ತಾವನೆಯನ್ನು ತಿರಸ್ಕರಿಸಿ ನಿರ್ಣಯ ಕೈಗೊಂಡಿತ್ತು. ಅದಾದ 11 ದಿನಗಳಲ್ಲೇ ಮಂಡಳಿ ತನ್ನ ಹಿಂದಿನ ನಿರ್ಣಯ ಬದಲಿಸಿ ಮಾ.20ರ ಸಭೆಯಲ್ಲಿ ಯೋಜನೆಗೆ ಅನುಮತಿ ನೀಡಲು ನಿರ್ಧಾರ ಕೈಗೊಂಡಿದೆ. ಆ ಸಭೆಯಲ್ಲಿ ಮಂಡಳಿಯ ಸದಸ್ಯರಲ್ಲದ ಇಬ್ಬರು ಮಂತ್ರಿಗಳು ಭಾಗವಹಿಸಿದ್ದರು. ಆದ್ದರಿಂದ ಮಾ.20ರಂದು ಮಂಡಳಿ ಕೈಗೊಂಡ ನಿರ್ಣಯವನ್ನು ನ್ಯಾಯಾಲಯ ಸಮಗ್ರವಾಗಿ ಪರಿಶೀಲಿಸಬೇಕಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.