ಮೈಸೂರು: ಮೈಸೂರು ತಾಲೂಕಿನ ಸುತ್ತೂರು ಶ್ರೀಕ್ಷೇತ್ರದಲ್ಲಿ ದಕ್ಷಿಣ ಭಾರತದಲ್ಲೇ ಪ್ರಪ್ರಥಮವಾಗಿ 200 ಕೋಟಿ ವೆಚ್ಚದಲ್ಲಿ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಕೇಂದ್ರ ಸರ್ಕಾರ ವಿಜ್ಞಾನ ನಗರಿ (ಸೈನ್ಸ್ ಸಿಟಿ)ಬೃಹತ್ ಯೋಜನೆಯನ್ನು ಕೈಗೆತ್ತಿಕೊಂಡಿದೆ.
ಸೋಮವಾರ ಸುತ್ತೂರಿಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ವಿಜ್ಞಾನ ನಗರಿ ನಿರ್ಮಾಣಕ್ಕೆ ಪ್ರಸ್ತಾಪಿಸಿರುವ ಭೂಮಿ ವೀಕ್ಷಿಸಿ, ಯೋಜನೆಯ ರೂಪುರೇಷೆಗಳ ಬಗ್ಗೆ ಚರ್ಚಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಪ್ರತಿ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಮಂಗಳೂರು ಮತ್ತು ಧಾರವಾಡದಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪಿಸಲಾಗಿದ್ದು, ಮತ್ತೂಂದು ಬೃಹತ್ ಯೋಜನೆಯಾದ ವಿಜ್ಞಾನ ನಗರಿ ಯೋಜನೆಯನ್ನು ಕೈಗೊಳ್ಳಲಾಗುತ್ತಿದ್ದು , ಸುಮಾರು 3 ರಿಂದ 4 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದೆ ಎಂದರು.
ಸುತ್ತೂರು ಶ್ರೀಗಳು ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದಾರೆ, ಸುಮಾರು 200 ಶಿಕ್ಷಣ ಸಂಸ್ಥೆಗಳು, ಹಲವಾರು ಮೆಡಿಕಲ್, ಎಂಜಿನಿಯರಿಂಗ್ ಮುಂತಾದ ಸಂಸ್ಥೆಗಳನ್ನು ನಡೆಸುತ್ತಿದ್ದು, ವಿಜ್ಞಾನ ನಗರಿ ನಿರ್ಮಾಣಕ್ಕಾಗಿ 25 ಎಕರೆ ಭೂಮಿ ನೀಡಲು ಮುಂದಾಗಿದ್ದು, ಸ್ಥಳ ಪರಿಶೀಲನೆ ಮಾಡಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿ, ಅಲ್ಲಿಂದ ಅನುಮತಿ ಬಂದಮೇಲೆ ಕಾರ್ಯಾರಂಭ ಮಾಡಲಾಗುವುದು ಎಂದರು.
ಶಿಕ್ಷಣ ಕ್ಷೇತ್ರದಲ್ಲಿ ವಿಜ್ಞಾನದ ಮಹತ್ವವನ್ನು ಹೆಚ್ಚಿಸಲು ಮತ್ತು ಅಭಿವೃದ್ಧಿ ಪಡಿಸಲು ಈ ಯೋಜನೆ ಸಹಕಾರಿಯಾಗಲಿದ್ದು, ಯೋಜನೆಯಲ್ಲಿ ವಿಜ್ಞಾನ ಮತ್ತು ಅಭಿವೃದ್ಧಿ ಬಗ್ಗೆ ಎಲ್ಲಾ ಮಾಹಿತಿಯೂ ದೊರೆಯುತ್ತದೆ. ಸೌರ ಶಕ್ತಿ, ವಿಜ್ಞಾನ ಗ್ಯಾಲರಿ, ಜೀವಶಾಸ್ತ್ರ, ರಸಾಯನಶಾಸ್ತ್ರ, ಪ್ರೌಢಶಾಲೆ, ಪಿಯು ಮಕ್ಕಳಿಗೆ ಬೇಕಾಗುವ ಮಾಹಿತಿಗಳು ಒಂದೇ ಸೂರಿನಲ್ಲಿ ಇಲ್ಲಿ ದೊರೆಯಲಿವೆ. ವಿಜ್ಞಾನ ವಿಷಯವು ಮಕ್ಕಳಲ್ಲಿ ಚಿಕ್ಕಂದಿನಿಂದಲೇ ಬೆಳೆಯಲು ವಿಜ್ಞಾನ ನಗರಿ ಉಪಯುಕ್ತವಾಗಲಿದೆ ಎಂದರು.
ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್, ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಪಿ.ಸ್ನೇಹಾ, ಮುಡಾ ಆಯುಕ್ತ ಪಿ.ಎಸ್. ಕಾಂತರಾಜು, ಹಾಗೂ ಜೆಎಸ್‌ಎಸ್ ಸಂಸ್ಥೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.