ಕೊಪ್ಪಳ: ಜಿಲ್ಲಾಡಳಿತ, ಜಿಪಂ, ಕಾನೂನುಗಳ ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಇಲಾಖೆ, ಯುನಿಸೆಫ್, ಮಕ್ಕಳ ರಕ್ಷಣಾ ಘಟಕ ಸೇರಿ ವಿವಿಧ ಸಹಯೋಗದಲ್ಲಿ ನಗರದ ಕೃಷಿ ವಿಸ್ತರಣಾ ಕೇಂದ್ರದಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆ ಕುರಿತು ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಜರುಗಿತು.
ಹಿರಿಯ ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ್ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆಯು ಒಂದು ವ್ಯವಸ್ಥಿತ ಅಪರಾಧವಾಗಿದ್ದು, ಜಾಗತಿಕ ಮಟ್ಟದಲ್ಲಿ ಮಾದಕ ದ್ರವ್ಯ, ಕಳ್ಳ ಸಾಗಾಣಿಕೆ ಮತ್ತು ಶಸ್ತ್ರಾಸ್ತ್ರ ಕಳ್ಳ ಸಾಗಾಣಿಕೆ ಬಳಿಕ ಮಾನವ ಕಳ್ಳ ಸಾಗಾಣಿಕೆಯು 3ನೇ ಅತೀ ದೊಡ್ಡ ಕಾನೂನು ಬಾಹಿರ ಚಟುವಟಿಕೆಯಾಗಿದೆ.
ಭಾರತ ದೇಶವು ಆರ್ಥಿಕ, ಸಾಮಾಜಿಕವಾಗಿ ಅಭಿವೃದ್ಧಿ ಸಾಧಿಸುತ್ತಿದ್ದರೂ ಹಲವಾರು ದುರ್ಬಲ ಮಹಿಳೆಯರು ಮತ್ತು ಮಕ್ಕಳು ಮಾನವ ಕಳ್ಳ ಸಾಗಾಣಿಕೆಯ ಜಾಲದಲ್ಲಿ ಸಿಲುಕಿ ಅಮಾನವೀಯ, ಕರುಣಾಜನಕ ಪರಸ್ಥಿತಿಯಲ್ಲಿ ಇಂದು ಶೋಷಣೆಗೆ ಒಳಗಾಗುತ್ತಿದ್ದಾರೆ.
ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಧ್ಯವಾಗದೇ ಇರುವ ಮಹಿಳೆಯರು ಮತ್ತು ಮಕ್ಕಳನ್ನು ಗುರಿಯಾಗಿಟ್ಟುಕೊಂಡಿರುವ ಮಾನವ ಕಳ್ಳ ಸಾಗಾಣಿಕೆಯು ಒಂದು ದೊಡ್ಡ ಪಿಡುಗಾಗಿದೆ. ಮಾನವ ಕಳ್ಳ ಸಾಗಾಣಿಕೆಯಂಥ ಹೀನ ಕೃತ್ಯದಿಂದ ರಕ್ಷಿಸಿಕೊಳ್ಳುವುದು ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದೆ. ಈ ಅನೈತಿಕ ಮಾನವ ಸಾಗಾಣಿಕೆ ತಡೆಗೆ ಪ್ರತಿ ಜಿಲ್ಲೆಗಳಲ್ಲಿ ವಿಶೇಷ ಪೊಲೀಸ್ ಘಟಕ, ಅಲ್ಲದೇ ಸಂತ್ರಸ್ತರ ಪುನರ್ವಸತಿಗೆ ಸರಕಾರವು ಹಲವು ಕಾರ್ಯಕ್ರಮ, ಯೋಜನೆಗಳನ್ನು ಜಾರಿಗೊಳಿಸಿದೆ. ಈ ಸೌಲಭ್ಯ ಅನುಷ್ಠಾನಗೊಳಿಸುವ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಅರ್ಹರಿಗೆ ಸೌಲಭ್ಯ ತಲುಪಿಸಿ ಎಂದರು.
ಜಿಪಂ ಸಿಇಒ ಬಿ. ಫೌಜಿಯಾ ತರುನ್ನುಮ್ ಮಾತನಾಡಿ, ಜಿಲ್ಲಾ ಮತ್ತು ತಾಲೂಕು ಮಟ್ಟದ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆ ಸಮಿತಿಯ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿರುವ ಗ್ರಾಪಂ ಮಟ್ಟದ ಮಕ್ಕಳ ಸಾಗಾಣಿಕೆ ತಡೆ ಸಮಿತಿ ಸಕ್ರಿಯಗೊಳಿಸಿ, ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಿ. ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಕುರಿತು ವಿವಿಧ ಇಲಾಖೆಗಳು ಸಹಭಾಗಿತ್ವದಲ್ಲಿ, ಸಮನ್ವಯತೆಯಲ್ಲಿ ಕಾರ್ಯನಿರ್ವಹಿಸುವ ಅವಶ್ಯಕತೆಯಿದೆ. ಸಮುದಾಯದಲ್ಲಿ ಮತ್ತು ನಿಮ್ಮ ವ್ಯಾಪ್ತಿಯಲ್ಲಿ ಮಹಿಳೆಯರ, ಮಕ್ಕಳ ಹಕ್ಕುಗಳು, ಕಾನೂನುಗಳ ಕುರಿತು ಜಾಗೃತಿ ಮೂಡಿಸಿ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಮಾತನಾಡಿ, ಸಾಗಾಣಿಕೆಗೆ ಒಳಗಾದ ಮಹಿಳೆಯರು ಪುನರ್ವಸತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸ್ವಾಧಾರ ಯೋಜನೆ, ಮತ್ತಿತರೆ ಯೋಜನೆಗಳು ಜಾರಿಯಲ್ಲಿವೆ. ಸಾಗಾಣಿಕೆಗೊಳಗಾದ ಮಕ್ಕಳ ಪುನರ್ವಸತಿಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಈ ಕೇಂದ್ರಗಳಲ್ಲಿ ಆಪ್ತ
ಸಮಾಲೋಚನೆ, ಅಗತ್ಯ ವೈದ್ಯಕೀಯ ನೆರವು ಹಾಗೂ ತಾತ್ಕಾಲಿಕ ಆಶ್ರಯ ಕಲ್ಪಿಸುವುದಲ್ಲದೆ, ಉದ್ಯೋಗ ಆಧಾರಿತ ತರಬೇತಿ ನೀಡಿ, ಸಾಲ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಯುನಿಸೆಫ್‌ನ ರಾಘವೇಂದ್ರ ಭಟ್, ಹರೀಶ ಜೋಗಿ ತರಬೇತಿ ನೀಡಿದರು. ಜಿಲ್ಲೆಯ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಸ್ತರಣಾಧಿಕಾರಿಗಳು, ಸಹಾಯಕ ನಿರ್ದೇಶಕರು, ತಾಲೂಕು ಆರೋಗ್ಯಾಧಿಕಾರಿಗಳು, ಕಾರ್ಮಿಕ ನಿರೀಕ್ಷಕರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.