ಹುಣಸೂರು: ಇತ್ತೀಚೆಗಷ್ಟೆ ಹುಣಸೂರು ತಾಲೂಕು ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಮುಖಂಡ ದೇವರಹಳ್ಳಿಸೋಮಶೇಖರ್ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಜೆಡಿಎಸ್ ಪಕ್ಷದಿಂದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿ, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ದೇವರಹಳ್ಳಿ ಸೋಮಶೇಖರ್ ಮುಂಬರುವ ಚುನಾವಣೆಗೆ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ವರಿಷ್ಟರು ಟಿಕೆಟ್ ನಿರಾಕರಿಸಿ, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್‌ಗೌಡರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ್ದ ಹಿನ್ನೆಲೆಯಲ್ಲಿ ಪಕ್ಷಕ್ಕೆ ರಾಜಿನಾಮೆ ನೀಡಿದ್ದರು.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷದ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಸಮ್ಮುಖದಲ್ಲಿ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡಿದ್ದಾರೆ. ಇವರೊಂದಿಗೆ ತಾಲೂಕು ಒಕ್ಕಲಿಗರ ಸಂಘ ಹಾಗೂ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಬಿಳಿಕೆರೆ ಪ್ರಸನ್ನ, ವಿಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ದೇವರಹಳ್ಳಿ ರಾಮೇಗೌಡ, ಲವ, ರವಿ, ವೈರಮುಡಿಗೌಡ ಸೇರಿದಂತೆ 70ಕ್ಕೂ ಹೆಚ್ಚು ಮುಖಂಡರು ತಮ್ಮೊಂದಿಗೆ ಪಕ್ಷ ಸೇರಿದ್ದಾರೆ.
ಮುಖ್ಯಮಂತ್ರಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ
ಪಕ್ಷವು ಗುರುತಿಸಿ ತಮಗೆ ಅವಕಾಶ ಕಲ್ಪಿಸಿದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವೆ, ಇಲ್ಲದಿದ್ದಲ್ಲಿ ಕಾರ್ಯಕರ್ತನಾಗಿ ಶ್ರಮಿಸುವೆ. ಜ.30 ಸೋಮವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧಿಕ್ಷ ನಳಿನ್‌ಕುಮಾರ್ ಕಟೀಲ್‌ರವರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗುವುದಾಗಿ ದೇವರಹಳ್ಳಿ ಸೋಮಶೇಖರ್ ಉದಯವಾಣಿಗೆ ತಿಳಿಸಿದ್ದಾರೆ.