ಹುಣಸೂರು: ಗ್ರಾಮಾಂತರ ಪ್ರದೇಶದ ರಸ್ತೆಗಳು ಅಭಿವೃದ್ಧಿಯಾದರೆ ಗ್ರಾಮಗಳು ಅಭಿವೃದ್ಧಿ ಹೊಂದಲು ಸಾಧ್ಯವೆಂದು ಶಾಸಕ ಎಚ್.ಪಿ. ಮಂಜುನಾಥ್ ತಿಳಿಸಿದರು.
ತಾಲೂಕಿನ ಗುರುಪುರ ಗ್ರಾಮದಲ್ಲಿ ಗುರುಪುರ- ಕಾಳೇನಹಳ್ಳಿ ಸಂಪರ್ಕ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ವತಿಯಿಂದ 1.64 ಕೋಟಿ ರೂ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಈ ಭಾಗದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ಕೊಟ್ಟು, ದೀರ್ಘಕಾಲ ಬಾಳಿಕೆ ಬರುವಂತೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಲಾಗಿದೆ. ಚುನಾಯಿತ ಜನಪ್ರತಿನಿಧಿಗಳಿಗೆ ಅಧಿಕಾರ ಶಾಶ್ವತವಲ್ಲ, ತಮ್ಮ ಅಧಿಕಾರದ ಅವಧಿಯಲ್ಲಿ ಶಾಶ್ವತವಾಗಿ ಉಳಿಯುವ ಕೆಲಸಗಳನ್ನು ಮಾಡಿದಾಗ ಮಾತ್ರ ನಮ್ಮಗಳ ಸೇವೆ ಸಾರ್ಥಕವಾಗುತ್ತದೆ ಎಂದರು.
ಪ್ರತಿ ಗ್ರಾಮಗಳನ್ನು ಪಕ್ಷಾತೀತವಾಗಿ ಅಭಿವೃದ್ಧಿಪಡಿಸಬೇಕು. ಗ್ರಾಮಗಳ ಅಭಿವೃದ್ದಿಗಾಗಿ ಸರ್ಕಾರ ತಾಲೂಕಿಗೆ ನೀಡಿರುವ ಅಲ್ಪಪ್ರಮಾಣದ ಅನುದಾನದಲ್ಲಿ ಆದ್ಯತೆ ಮೇರೆಗೆ ಗ್ರಾಮಗಳ ಅಭಿವೃದ್ಧಿ ಕೆಲಸಕ್ಕೆ ಚಾಲನೆ ನೀಡಲಾಗುತ್ತಿದ್ದು, ಈ ಭಾಗದ ಹಲವಾರು ದಿನಗಳಿಂದ ಈ ಭಾಗದಲ್ಲಿ ರಸ್ತೆ ಅಭಿವೃದ್ದಿಯಾಗದೆ ನೆನೆಗುದಿಗೆ ಬಿದ್ದಿತ್ತು. ಮಳೆಗಾಲದಲ್ಲಿ ರಸ್ತೆಯಲ್ಲಿ ಓಡಾಡಲು ಗ್ರಾಮಸ್ಥರು ಸಮಸ್ಯೆ ಎದುರಿಸುವಂತಾಗಿತ್ತು. ಕಾಮಗಾರಿಗಳು ಪ್ರಾರಂಭಿಸಿದಾಗ, ಸ್ಥಳೀಯ ಮುಖಂಡರು ರಾಜಕಾರಣ ಬದಿಗೊತ್ತಿ ಪರಸ್ಪರ ಸಹಕಾರ ನೀಡಿದರೆ ಅಭಿವೃದ್ಧಿ ಹೊಂದಲು ಸಾಧ್ಯವೆಂದು ತಿಳಿಸಿ, ಕಾಮಗಾರಿ ನಡೆಯುವಾಗ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕೆಂದು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಗುರುಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಾನಾಗ ನಾಯಕ್, ಉಪಾಧ್ಯಕ್ಷ ಲೋಕೇಶ್, ಮಾಜಿ ಅಧ್ಯಕ್ಷ ಪ್ರಶಾಂತ್, ಮಾಜಿ ಉಪಾಧ್ಯಕ್ಷ ಚಂದ್ರಶೇಖರ್, ಸದಸ್ಯರಾದ ಬೀರೇಗೌಡ, ರಹಮತ್ ಬೇಗ್, ಮುಶೀರ್, ಲೋಕೋಪಯೋಗಿ ಇಲಾಖೆಯ ಎಇಇ ಭೋಜರಾಜ್, ಇಂಜಿನಿಯರ್ ಚಂದ್ರಶೇಖರ್, ಮುಖಂಡರಾದ ಮಹದೇವಣ್ಣ, ಶಿವಣ್ಣ ಕೃಷ್ಣೇಗೌಡ ಎಲ್ಲಯ್ಯ ಸೇರಿದಂತೆ ಗ್ರಾಮಸ್ಥರು ಇದ್ದರು.