ಹುಣಸೂರು: ತಾಲೂಕಿನ ಬಿಳಿಕೆರೆ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಟಿ.ಎಸ್. ಲೋಲಾಕ್ಷಿ ಅಧಿಕಾರ ವಹಿಸಿಕೊಂಡಿದ್ದಾರೆ. ಇವರು ಬನ್ನೂರು ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇಲ್ಲಿದ್ದ ಇನ್ಸ್‌ಪೆಕ್ಟರ್ ಚಿಕ್ಕಸ್ವಾಮಿಯವರನ್ನು ವರ್ಗಾವಣೆಗೊಳಿಸಲಾಗಿದೆ.
ಸಂಚಾರ ನಿಯಮ ಪಾಲಿಸಿ:
ಬಿಳಿಕೆರೆ ಮೂಲಕ ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ-275 ಹಾದು ಹೋಗಿದ್ದು, ರಸ್ತೆ ಅಪಘಾತಗಳು ಹೆಚ್ಚುತ್ತಿವೆ. ಎಲ್ಲ ವಾಹನಗಳವರು ಸ್ಪೀಡ್ ಲಿಮಿಟ್ ದಾಟದಂತೆ ಹಾಗೂ ಸಂಚಾರ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ವಾಹನಗಳಿಗೆ ವಿಮೆ ಸೇರಿದಂತೆ ಎಲ್ಲಾ ದಾಖಲಾತಿಗಳನ್ನು ಹೊಂದಿರಬೇಕು ಎಂದರು.
ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ವಾಹನ ತಪಾಸಣೆ ವೇಳೆ ದಾಖಲಾತಿ ಇಲ್ಲದ ವಾಹನಗಳು, ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುವವರ ವಿರುದ್ದ ಕಾನೂನಿನ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದರು.
ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಮತ್ತು ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ, ಇಸ್ಪೀಟ್ ಮತ್ತಿತರ ಯಾವುದೇ ಅಪರಾಧ ಪ್ರಕರಣಗಳು ಕಂಡು ಬಂದಲ್ಲಿ ಠಾಣೆಗೆ (9480805057) ಮಾಹಿತಿ ನೀಡುವಂತೆ ಇನ್ಸ್‌ಪೆಕ್ಟರ್ ಟಿ.ಎಸ್.ಲೋಲಾಕ್ಷಿ ಮನವಿ ಮಾಡಿದ್ದಾರೆ.