ಹೂವಿನಹಡಗಲಿ: ತಾಲೂಕಿನಲ್ಲಿ ಬರಗಾಲವಿದ್ದು ಜನತೆಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸಂಬಂಧ ಪಟ್ಟ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಕೌಶಲ್ಯಾಭಿವೃದ್ಧಿ, ಮುಜರಾಯಿ ಖಾತೆ ಸಚಿವ ಪಿ.ಟಿ. ಪರಮೇಶ್ವರನಾಯ್ಕ ತಿಳಿಸಿದರು.
ಪಟ್ಟಣದ ತಾಪಂ ರಾಜೀವ್ ಗಾಂಧಿ ಸಭಾಂಗಣದಲ್ಲಿ ತಾಲೂಕು ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ತೆಗೆದುಕೊಂಡು ಮಾತನಾಡಿದರು. ತಾಲೂಕಿನ ಸುಮಾರು 17 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಅಲ್ಲಿ ಖಾಸಗಿಯಾಗಿ ಜನತೆಗೆ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯಪಾಲಕ ಆಭಿಯಂತರ ಜಯರಾಂ ಸಭೆಗೆ ಮಾಹಿತಿ ನೀಡಿದರು. ನೀರಿನ ಸಮಸ್ಯೆ ನೀಗಿಸಲು ನೆಲ ಮಟ್ಟದ ಜಲಗಾರ ಯೋಜನೆಯಡಿಯಲ್ಲಿ ಈಗಾಗಲೇ ಸುಮಾರು 419 ಲಕ್ಷ ರೂಗಳ ಆನುದಾನ ಬಿಡುಗಡೆ ಮಾಡಲಾಗಿದ್ದು ಕೆಲಸ ಕಾರ್ಯತ್ವರಿತವಾಗಿ ಮಾಡಿ ಎಂದು ಅಧಿಕಾರಿಗಳಿಗೆ ಆದೇಶಿಸಿದರು.
ತಾಲೂಕಿನಲ್ಲಿ ಆರಣ್ಯೀಕರಣಕ್ಕೆ ಸಾಕಷ್ಟು ಆನುದಾನ ನೀಡಲಾಗಿದ್ದು ಕೋಟ್ಯಾಂತರ ರೂಗಳನ್ನು ಖರ್ಚು ಮಾಡಲಾಗುತ್ತಿದೆ. ತಾಲೂಕಿನ ತುಂಬಿನ ಕೆರೆ ಕಾಯ್ದಿಟ್ಟ ಅರಣ್ಯ, ಹ್ಯಾರಡ ಬಳಿ ಹಾಗೂ ಸೋವೇನಹಳ್ಳಿ ಬಳಿ ಇರುವ ಅರಣ್ಯವನ್ನು ಸಾಧ್ಯವಾದಷ್ಟು ಅಭಿವೃದ್ಧಿಪಡಿಸಿ ಅಲ್ಲಿ ಹೆಚ್ಚು ಹೆಚ್ಚು ಸಸಿಗಳನ್ನು ನೆಡುವ ಮೂಲಕವಾಗಿ ಆರಣ್ಯ ಬೆಳಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು. ಅಲ್ಲದೆ ತಾಲೂಕಿನ ಪ್ರೌಢಶಾಲೆ, ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ ಆವರಣದಲ್ಲಿ ಹೆಚ್ಚು ಸಸಿಗಳನ್ನು ನೆಡಲು ಅಧಿಕಾರಿಗಳಿಗೆ ಆದೇಶಿಸಿದರು.
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯಿಂದ ಮಾಹಿತಿ ಪಡೆದು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾ ಸಿರಿ ಯೋಜನೆ ಅಡಿಯಲ್ಲಿ ಎಸ್.ಸಿ ಹಾಗೂ ಎಸ್.ಟಿ ವಿದ್ಯಾರ್ಥಿಗಳಿಗೂ ಅನುಕೂಲವಾಗುವಂತೆ ಇಲಾಖೆ ಕ್ರಮ ಕೈಗೊಳ್ಳಲು ತಿಳಿಸಿದರು. ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜು ಪ್ರಾರಂಭವಾದ ದಿವಸದಿಂದಲೇ ವಸತಿ ಸೌಲಭ್ಯ ಕಲ್ಪಿಸಿಕೊಡಲು ಅಧಿಕಾರಿಗಳಿಗೆ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಕುರಿತು ಮಾಹಿತಿ ಪಡೆದರು. ಬಾಣಂತಿಯರ ಹಾಗೂ ಮಕ್ಕಳ ಆರೋಗ್ಯದ ಹಿನ್ನಲೆಯಲ್ಲಿ ಜಾರಿಯಲ್ಲಿರುವ ಮಾತೃಪೂರ್ಣ ಯೋಜನೆ ಸಮರ್ಪಕವಾಗಿ ಜಾರಿ ಮಾಡಿ ಎಂದರು.
ಇಲಾಖಾವಾರು ಪ್ರತಿ ಇಲಾಖೆಯ ಪ್ರಗತಿ ಪರಿಶೀಲನೆ ಮಾಡಿ ಮಾಹಿತಿ ಪಡೆದುಕೊಂಡರಲ್ಲದೇ, ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡಲು ತಿಳಿಸಿದರು. ಸಭೆಯಲ್ಲಿ ತಹಶೀಲ್ದಾರ್ ಕೆ. ರಾಘವೇಂದ್ರರಾವ್, ತಾಪಂ ಅಧ್ಯಕ್ಷೆ ಶಾರದಮ್ಮ, ಸಾಮಾಜಿಕ ಸ್ಥಾಯಿ ಸಮಿತಿ ಆಧ್ಯಕ್ಷ ನಾರಾಯಣಸ್ವಾಮಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಯು.ಎಚ್. ಸೋಮಶೇಖರ್, ಹ.ಬೋ. ಹಳ್ಳಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲೇಶ್‌ನಾಯ್ಕ, ಹ.ಬೋ. ಹಳ್ಳಿ ತಹಶೀಲ್ದಾರ್ ವಿಜಯ್‌ಕುಮಾರ್ ಹಾಜರಿದ್ದರು.