ಬೆಂಗಳೂರು: ಕೋವಿಡ್-19 ಸೋಂಕು ತಡೆಗಟ್ಟುವ ಮತ್ತು ಲಾಕ್ ಡೌನ್ ಮುಂದುವರಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ್ದು, ನಿಮ್ಮೊಂದಿಗೆ ನಾನಿದ್ದೇನೆ ಎಂದು ಅಭಯ ನೀಡಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾದರು. ಮತ್ತು ರಾಜ್ಯದ ಸ್ಥಿತಿಗತಿ, ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿದರು. ಮುಖ್ಯಮಂತ್ರಿಯವರಿಗೆ ಸಚಿವರು ಮತ್ತು ಅಧಿಕಾರಿಗಳು ಸಾಥ್ ನೀಡಿದರು.
ರಾಜ್ಯದಲ್ಲಿ ಇದುವರೆಗೆ ಒಟ್ಟು 214 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಲ್ಲಿ ಆರು ಜನರು ಸೋಂಕಿನ ಕಾರಣದಿಂದ ಮರಣ ಹೊಂದಿದ್ದಾರೆ. ಒಟ್ಟು 37 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ದೇಶದಲ್ಲಿ ಇದುವರೆಗೆ 7400ಕ್ಕೂ ಹೆಚ್ಚು ಜನರಿಗೆ ಸೋಂಕು ತಾಗಿದ್ದು, ಅದರಲ್ಲಿ 239 ಜನರು ಅಸುನೀಗಿದ್ದಾರೆ.
ಇಂದು ಸಂಜೆ ಪ್ರಧಾನಿ ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದು, ಲಾಕ್ ಡೌನ್ ಮುಂದುವರಿಕೆಯ ಬಗ್ಗೆ ಹೇಳು ನಿರೀಕ್ಷೆಯಿದೆ.