ವಾಷಿಂಗ್ಟನ್: 2024ರ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಮ್ಮೆ ಸ್ಪರ್ಧಿಸುವುದಾಗಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ನವೆಂಬರ್ 16) ಅಧಿಕೃತವಾಗಿ ಘೋಷಿಸಿದ್ದಾರೆ.
2021ರಲ್ಲಿ ಅಧ್ಯಕ್ಷೀಯ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಡೊನಾಲ್ಡ್ ಟ್ರಂಪ್ ಅವರು ಜಿದ್ದಾಜಿದ್ದಿನ ಹಣಾಹಣಿಯಲ್ಲಿ ಜೋ ಬೈಡೆನ್ ಎದುರು ಪರಾಜಯಗೊಂಡಿದ್ದರು. ಇದೀಗ ಮತ್ತೊಮ್ಮೆ 2024ರ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಟ್ರಂಪ್ (76ವರ್ಷ) ಅಮೆರಿಕದ ಫೆಡರಲ್ ಎಲೆಕ್ಷನ್ ಕಮಿಷನ್ ಗೆ ನಾಮಪತ್ರ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.
ಈ ನಿಟ್ಟಿನಲ್ಲಿ ಅಮೆರಿಕದ ಅಧ್ಯಕ್ಷೀಯ ಚುನಾವಣಾ ಸ್ಪರ್ಧೆಯಲ್ಲಿ ರಿಪಬ್ಲಿಕನ್ ಅಥವಾ ಡೆಮಾಕ್ರಟ್ ಪಕ್ಷದಿಂದ ಸ್ಪರ್ಧಿಸುವುದಾಗಿ ಘೋಷಿಸಿದ ಮೊದಲ ಸ್ಪರ್ಧಿ ಟ್ರಂಪ್ ಆಗಿದ್ದಾರೆ ಎಂದು ವರದಿ ವಿವರಿಸಿದೆ.
ಅಮೆರಿಕವನ್ನು ಮತ್ತೆ ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ನಾನು ಯುನೈಟೆಡ್ ಸ್ಟೇಟ್ಸ್ ನ ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆಯನ್ನು ಘೋಷಿಸುತ್ತಿದ್ದೇನೆ ಎಂದು ಡೊನಾಲ್ಡ್ ಟ್ರಂಪ್ ಅವರು ದೀರ್ಘಕಾಲದ ಬೆಂಬಲಿಗರ ಗುಂಪನ್ನು ಉದ್ದೇಶಿಸಿ ಹೇಳಿದರು.
2016ರಲ್ಲಿ ಅಚ್ಚರಿಯ ರೀತಿಯಲ್ಲಿ ಹಿಲರಿ ಕ್ಲಿಂಟನ್ ಅವರನ್ನು ಪರಾಜಯಗೊಳಿಸಿ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಡೊನಾಲ್ಡ್ ಟ್ರಂಪ್ ತಮ್ಮ 5 ವರ್ಷಗಳ ಅಧಿಕಾರವಧಿಯುದ್ಧಕ್ಕೂ ವಿವಾದಗಳಿಂದಲೇ ಹೆಚ್ಚು ಸುದ್ದಿಯಾಗಿದ್ದರು.