ಮೈಸೂರು: ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ, ಪತ್ನಿ ಅರ್ಪಿತಾ ಸಿಂಹ ಹಾಗೂ ಪುತ್ರಿಯೊಂದಿಗೆ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ದೇವಿಯ ಸನ್ನಿಧಿಯಲ್ಲಿ ನಾಮಪತ್ರದ ಸೆಟ್‌ಗೆ ಪೂಜೆ ಮಾಡಿಸಿದರು.
ಬಳಿಕ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರಸ್ವಾಮೀಜಿಯವರ ಆಶೀರ್ವಾದ ಪಡೆದರು. ಬಳಿಕ ಅರಮನೆ ಆವರಣದ ವಿನಾಯಕ ದೇವಸ್ಥಾನ ಹಾಗೂ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿ, ಅಪಾರ ಬೆಂಬಲಿಗರೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ತೆರಳಿ ಎರಡು ಸೆಟ್ ನಾಮಪತ್ರ ಸಲ್ಲಿಸಿದರು.
ಈ ವೇಳೆ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಹ್ಮಣಿ, ನಟಿ ತಾರಾ, ಪಕ್ಷದ ಹಿರಿಯ ಮುಖಂಡ ತೋಂಟದಾರ್ಯ, ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ.ರಾಜೇಂದ್ರ ಮೊದಲಾದವರಿದ್ದರು.
ಪ್ರಧಾನಿ ಮೋದಿಯವರು ಕಳೆದ ಐದು ವರ್ಷಗಳಲ್ಲಿ ಮಾಡಿರುವ ಸಾಧನೆಯನ್ನು ಮುಂದಿಟ್ಟುಕೊಂಡು ನಾನು ಚುನಾವಣೆಗೆ ಹೋಗುತ್ತಿದ್ದೇನೆ. ಅಭಿವೃದ್ಧಿ ಆಧಾರದ ಮೇಲೆ ನಾನು ಮತಯಾಚಿಸುತ್ತಿರುವುದರಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ.
ಮೈತ್ರಿಯಿಂದ ನನಗೇನು ತೊಂದರೆ ಆಗುವುದಿಲ್ಲ ಎಂದರು. ಚುನಾವಣೆಯಲ್ಲಿ ನನ್ನ ಪರವಾಗಿ ಪ್ರಚಾರಕ್ಕೆ ಪ್ರಧಾನಿ ಮೋದಿ ಅವರು ಮೈಸೂರಿಗೆ ಬರುತ್ತಾರೆ. ಆದರೆ, ಯಾವಾಗ ಬರುತ್ತಾರೆ ಎಂಬುದು ಇನ್ನೂ ನಿಗದಿಯಾಗಿಲ್ಲ ಎಂದು ಹೇಳಿದರು.