ಬೆಂಗಳೂರು: ಮುಂದಿನ ಎರಡೂವರೆ ವರ್ಷ ನಾನೇ ಸಿಎಂ. ಒಂದೂವರೆ ವರ್ಷ ರಾಜ್ಯದ ಅಭಿವೃದ್ಧಿ ಬಗ್ಗೆ ಕಾಳಜಿ ವಹಿಸಿದ್ದೇನೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಹ ಬಂದು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ಈ ಮೂಲಕ ಮುಂದಿನ ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ. ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎನ್ನುವ ಮಾತುಗಳಿಗೆ ಉತ್ತರ ನೀಡಿದರು.
ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಯಕತ್ವ ಗೊಂದಲ ಕೇವಲ ಮಾಧ್ಯಮ ಸೃಷ್ಟಿ. ಒಂದೆರಡು ಶಾಸಕರಲ್ಲಿ ಬೇಸರ ಇರಬಹುದು, ಅವರ ಬಳಿ ಮಾತನಾಡಿ ಸರಿಪಡಿಸಲಾಗುವುದು. ಅದಕ್ಕಾಗಿಯೇ ಸಭೆ ಕರೆದಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಶೇ.60 ರಷ್ಟು ಗೆಲುವು ದಾಖಲಿಸಿದ್ದಾರೆ. ಬಿಜೆಪಿ ರಾಜ್ಯದಲ್ಲಿ ದಿನೇ ದಿನೇ ಬಲಗೊಳ್ಳುತ್ತಿದೆ ಎಂದು ಹೇಳಿದರು.
ರೈತರ ಅಭಿವೃದ್ಧಿಗಾಗಿ ಸಾಕಷ್ಟು ಕಾರ್ಯಕ್ರಮ ರೂಪಿಸಿದ್ದೇವೆ. ರೈತರ ಆದಾಯ ದ್ವಿಗುಣಗೊಳಿಸಲು ಕ್ರಮ ಕೈಗೊಂಡಿದ್ದೇವೆ. ಪ್ರತಿಪಕ್ಷ ನಾಯಕರು ಅನಗತ್ಯ ಟೀಕೆ ಮೂಲಕ ರೈತರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಬಿ ಎಸ್ ಯಡಿಯೂರಪ್ಪ ಹೇಳಿದರು.