Advertisement

ಅಪಘಾತ ವಲಯ ಗುರುತಿಸಿ ವರದಿ ಕೊಡಿ

03:56 PM Mar 31, 2022 | Team Udayavani |

ಚಿತ್ರದುರ್ಗ: ಜಿಲ್ಲೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇಳಿಮುಖ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅಪಘಾತ ವಲಯಗಳನ್ನು ಗುರುತಿಸಿ ತಿಂಗಳೊಳಗೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಹೊಸಪೇಟೆ, ದಾವಣಗೆರೆ, ಬೆಂಗಳೂರು, ಮೊಳಕಾಲ್ಮೂರು ಹಾಗೂ ಶಿವಮೊಗ್ಗ ಹೆದ್ದಾರಿಗಳಲ್ಲಿ ಅಪಘಾತ ವಲಯಗಳನ್ನು ಗುರುತಿಸಬೇಕಿದೆ. ಇದಕ್ಕಾಗಿ ಪೊಲೀಸ್‌ ಇಲಾಖೆಯಿಂದ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರು, ಸಾರಿಗೆ ಇಲಾಖೆಯ ಹಿರಿಯ ಮೋಟಾರು ನಿರೀಕ್ಷಕರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಧಾನ ವ್ಯವಸ್ಥಾಪಕರನ್ನೊಳಗೊಂಡಂ ತಂಡ ರಚಿಸಿ ಅಪಘಾತ ವಲಯಗಳನ್ನು ಗುರುತಿಸಿ ವರದಿ ನೀಡುವಂತೆ ತಿಳಿಸಿದರು.

ಅಪಘಾತಗಳಿಂದ ಅಮೂಲ್ಯವಾದ ಜೀವ ಹೋಗಬಾರದು. ಇದರಿಂದ ಕುಟುಂಬಕ್ಕೂ ದೊಡ್ಡ ನಷ್ಟವಾಗಲಿದೆ. ಆದ್ದರಿಂದ ಅಪಘಾತ ವಲಯಗಳಲ್ಲಿ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹೆಲ್ಮೆಟ್‌ ಕಡ್ಡಾಯವಾಗಲಿ

ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್‌ ಅನುಷ್ಠಾನ ಕಡ್ಡಾಯಗೊಳಿಸಬೇಕು. ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಹೆಲ್ಮೆಟ್‌ ಅನುಷ್ಠಾನವಾಗುತ್ತಿಲ್ಲ. ಸಾರಿಗೆ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ವತಿಯಿಂದ ಜಂಟಿಯಾಗಿ ತಪಾಸಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

Advertisement

ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್‌. ಬಾಲಕೃಷ್ಣ ಮಾತನಾಡಿ, ಸುಪ್ರೀಂ ಕೋರ್ಟ್‌ ನಿರ್ದೇಶನದನ್ವಯ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತ ವಲಯಗಳನ್ನು ಗುರುತಿಸಬೇಕಾಗಿದೆ. ಅಪಘಾತ ವಲಯಗಳನ್ನು ಗುರುತಿಸುವುದು ಬಹಳ ಮುಖ್ಯವಾಗಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರನ್ನು ತಡೆಗಟ್ಟಲು ಪೊಲೀಸ್‌ ಇಲಾಖೆಯವರು ಹೆಚ್ಚಿನ ತಪಾಸಣೆಗೊಳಪಡಿಸಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್‌ ಅಧೀಕ್ಷಕ ಕೆ. ಪರಶುರಾಮ ಮಾತನಾಡಿ, ಹೆಚ್ಚು ಅಪಘಾತ ಸಂಭವಿಸುವ ಅಪಘಾತ ವಲಯಗಳಲ್ಲಿ ಥರ್ಮಲ್‌ ಪ್ಲಾಸ್ಟ್‌ ಬಣ್ಣ ಬಳಿಯುವಿಕೆ, ಕ್ಯಾಟಐಸ್‌ ಅಳವಡಿಕೆ, ರಂಬಲ್‌ಸ್ಟ್ರೀಟ್‌, ಪೇಟಿಂಗ್‌ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಸಾರಿಗೆ ಪ್ರಾಧಿಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ| ರಂಗಸ್ವಾಮಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಸತೀಶ್‌ ಬಾಬು ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿ ಕಾರದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next