ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದ್ದು, ಇಂದು ಸಂಜೆ ಕೇಂದ್ರ ವಿಭಾಗದ ಡಿಸಿಪಿ ನೇತೃತ್ವದಲ್ಲಿ ಶಾಂತಿ ಸಭೆ ಕರೆಯಲಾಗಿದೆ.
ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಘೋಷಣೆ ಮಾಡಿದ್ದ ಬೆನ್ನಲ್ಲೇ ಗಣೇಶೋತ್ಸವ ಆಚರಣೆಗೆ ಹಿಂದು ಪರ ಸಂಘಟನೆಗಳು ಮುಂದಾಗಿವೆ. ಆದರೆ ಶಾಸಕ ಜಮೀರ್ ಅಹ್ಮದ್ ಖಾನ್ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಕೆರಳಿರುವ ಹಿಂದು ಸಂಘಟನೆಗಳು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡದೇ ಇದ್ದರೆ ರಾತ್ರೋರಾತ್ರಿ ಶಿವಲಿಂಗ ಸ್ಥಾಪನೆ ಮಾಡುವುದಾಗಿ ತಿರುಗೇಟು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಡಿಸಿಪಿ ನೇತೃತ್ವದಲ್ಲಿ ಶಾಂತಿ ಸಭೆ ಕರೆಯಲಾಗಿದೆ. ಜತೆಗೆ ಜಿಲ್ಲಾಧಿಕಾರಿ ಭೇಟಿ ಮಾಡಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಅಧಿಕೃತ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ:ದ್ವೇಷ ಭಕ್ತರಿಗೆ ದೇಶದಲ್ಲಿ ಜಾಗವಿಲ್ಲ: ಬಿಜೆಪಿ ವಿರುದ್ಧ ಬಿ.ಕೆ ಹರಿಪ್ರಸಾದ್ ವಾಗ್ದಾಳಿ
ಈ ವಿಚಾರ ಸಂಬಂಧ ಬಿಜೆಪಿ ಸಾಮಾಜಿಕ ಜಾಲತಾಣದಲ್ಲೂ ಆಕ್ಷೇಪ ವ್ಯಕ್ತಪಡಿಸಿದ್ದು, ಶಾಸಕ ಜಮೀರ್ ಅಹ್ಮದ್ ಖಾನ್ ಅವರು ರಿಪಬ್ಲಿಕ್ ಆಫ್ ಚಾಮರಾಜಪೇಟೆ ನಿರ್ಮಿಸಿಕೊಂಡಿದ್ದಾರೆ. ಹಿಂದೆ ಕಾಶ್ಮೀರದ ಲಾಲ್ ಚೌಕ್ ನಲ್ಲಿ ಇದ್ದ ಪರಿಸ್ಥಿತಿ ಚಾಮರಾಜಪೇಟೆಯಲ್ಲಿ ನಿರ್ಮಾಣವಾಗಿದೆ ಎಂದು ಟೀಕಿಸಿದೆ.