ಮೈಸೂರು: ಶಾಲೆ ಅಥವಾ ಇನ್ನಿತರ ಕಡೆಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಸಂದರ್ಭದಲ್ಲಿ ಆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡದಿರುವುದು ಅಪರಾಧ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ ಮಹಮ್ಮದ್ ಮುಜೀವುಲ್ಲಾ ಹೇಳಿದರು.
ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಗುರುವಾರ ನಗರದ ಗೋಕುಲಂನಲ್ಲಿರುವ ನಿರ್ಮಲ ಪ್ರೌಢಶಾಲೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳಿಗಾಗಿ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಹಾಗೂ ಪೋಕೊÕà ಕಾಯ್ದೆ-2012ರ ಕುರಿತು ಆಯೋಜಿಸಿದ್ದ ತಾಲೂಕು ಮಟ್ಟದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಮ್ಮ ಸುತ್ತಮುತ್ತ ಯಾವುದೇ ಅಪರಾಧಗಳು ನಡೆದರೆ ಆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕೆಂಬ ಕಾನೂನು ಜಾರಿಯಲ್ಲಿದ್ದರೂ, ಅದನ್ನು ಪಾಲಿಸದವರಿಗೆ ಯಾವುದೇ ಶಿಕ್ಷೆ ನೀಡಲಾಗುವುದಿಲ್ಲ. ಆದರೆ ಪೋಕೊ ಕಾಯ್ದೆ ಯಲ್ಲಿ ಈ ಬಗ್ಗೆ ವಿಶೇಷವಾದ ನಿಯಮ ಜಾರಿಯಲ್ಲಿದ್ದು, ಅದರಂತೆ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಸಂದರ್ಭದಲ್ಲಿ ಪೊಲೀಸರಿಗೆ ಮಾಹಿತಿ ನೀಡದಿರುವುದು ಅಪರಾಧವಾಗಿದೆ. ಈ ನಿಟ್ಟಿನಲ್ಲಿ ಇಂತಹ ವಿಷಯಗಳನ್ನು ಗೌಪ್ಯವಾಗಿಡದೆ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದರು.
ಅರಿವು ಮೂಡಿಸುವುದು ಕಷ್ಟ: ದೇಶದ ಕಾನೂನಿನ ಬಗ್ಗೆ ತಿಳಿಯುವುದು ಪ್ರತಿಯೊಬ್ಬರ ಹಕ್ಕು. ಹೀಗಿದ್ದರೂ ಈ ಎಲ್ಲಾ ಕಾನೂನುಗಳ ಬಗ್ಗೆ ಅರಿವು ಮೂಡಿಸಬೇಕೆಂಬ ಕುರಿತು ಯಾವುದೇ ಕಾನೂನಿಲ್ಲ. ಆದರೆ ಮಕ್ಕಳನ್ನು ಲೈಂಗಿಕ ಅಪರಾಧದಿಂದ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಜಾರಿಯಲ್ಲಿರುವ ಪೋಕೊÕà ಕಾಯ್ದೆ ಬಗ್ಗೆ ಅರಿವು ಮೂಡಿಸಬೇಕೆಂದು ವಿಶೇಷ ಕಾನೂನು ಹೊಂದಿದೆ.
ಆದರೆ ವಿದ್ಯಾರ್ಥಿಗಳಿಗೆ ಲೈಂಗಿಕ ಶಿಕ್ಷಣದ ಬಗ್ಗೆ ಅರಿವು ಮೂಡಿಸುವುದು ಅತ್ಯಂತ ಕಷ್ಟಕರವಾಗಿದ್ದು, ಬಹುತೇಕ ಸಂದರ್ಭಗಳಲ್ಲಿ ಇದು ಮಕ್ಕಳನ್ನು ತಪ್ಪುದಾರಿಗೆ ಕೊಂಡೊಯ್ಯುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಅತ್ಯಂತ ಜವಾಬ್ದಾರಿಯಿಂದ ಮಕ್ಕಳಿಗೆ ಲೈಂಗಿಕ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು.
ದೇಶಕ್ಕೆ ಕೆಟ್ಟ ಹೆಸರು: ಭಾರತೀಯ ಸಂಸ್ಕೃತಿಗೆ ವಿಶ್ವದಲ್ಲೇ ಅಪಾರವಾದ ಗೌರವವಿದ್ದು, ಇಲ್ಲಿನ ಸಂಸ್ಕೃತಿಯ ಬಗ್ಗೆ ವಿದೇಶಿಗರು ಮೆಚ್ಚುಗೆ ಹೊಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ನಮ್ಮ ಸಂಸ್ಕೃತಿಯನ್ನು ಮರೆಯುತ್ತಿರುವುದ ಪರಿಣಾಮ ಸಮಾಜದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಇನ್ನೂ ಪ್ರಸ್ತುತ ಸಂದರ್ಭದಲ್ಲಿ ಟಿವಿ ಚಾನೆಲ್‌ಗಳಲ್ಲಿ ಪ್ರಸಾರವಾಗುವ ಕೆಲವೊಂದು ಕಾರ್ಯ ಕ್ರಮಗಳು ಮಕ್ಕಳನ್ನು ದಾರಿ ತಪ್ಪುವಂತೆ ಮಾಡು ತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಿ. ರಂದೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ, ಡಿಡಿಪಿಐ ಎಚ್.ಆರ್. ಬಸಪ್ಪ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶೀಲಾ ಖರೆ, ಆರೋಗ್ಯ ಇಲಾಖೆ ಅಧಿಕಾರಿ ಡಾ. ಸುವರ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.