ಬೆಂಗಳೂರು: “ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರ ಸಂಖ್ಯೆ 120 ರಿಂದ 117 ಕ್ಕೆ ಇಳಿದಿದೆ. ಹೀಗಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡರೆ ಸರ್ಕಾರ ಐದು ವರ್ಷ ಪೂರೈಸುತ್ತದೆ’ ಎಂದು ಮಾಜಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.
ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಸೋತವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂಬ ಸಚಿವ ಪುಟ್ಟರಾಜು ಹೇಳಿಕೆಗೆ ತಿರುಗೇಟು ನೀಡಿದರು. “ನಾನು ಶಾಸಕನಲ್ಲ, ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ನಾನು ಹೇಳಿಲ್ಲ. ಅದರ ಅವಶ್ಯಕತೆಯೂ ನನಗಿಲ್ಲ. ಮೈತ್ರಿ ಸರ್ಕಾರದಲ್ಲಿರುವ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಹೇಳಿದ್ದೇನೆ’ ಎಂದರು.
ಮೈತ್ರಿ ಸರ್ಕಾರ ಐದು ವರ್ಷ ಇರಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಹೇಳಿದೆ. ಪಕ್ಷದ ನಾಯಕರು ಹೇಳಿದ್ದಾರೆ. ಎಷ್ಟು ದಿನ ಇರುತ್ತದೆ ಎಂದು ಹೇಳಲು ನಾನ್ಯಾರು? ಪಕ್ಷದ ತೀರ್ಮಾನವೇ ಅಂತಿಮ. ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರೊಂದಿಗಿನ ಸಭೆಯ ವಿಡಿಯೋ ಬಹಿರಂಗಗೊಳಿಸಿದವರ ಹಿಂದೆ ಯಾರಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ.
ನಾನು ಯಾರ ಜೊತೆಗಾದರೂ ಊಟ ಮಾಡುವುದು ನನ್ನ ಖಾಸಗಿತನ. ನಾನು ಸಚಿವ ಜಿ.ಟಿ.ದೇವೇಗೌಡರ ಹಾಗೆ ಕೋಲಾರ ಶಾಸಕ ಶ್ರೀನಿವಾಸಗೌಡ ಅವರ ಹಾಗೆ ಯಾವುದೋ ಆಸೆಗಾಗಿ ಬೇರೆಯವರ ಜೊತೆ ಸಭೆ ಮಾಡಿಲ್ಲ ಎಂದರು.
ಇದೇ ವೇಳೆ, ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಚುನಾವಣೆ ನಡೆಸಬೇಕಿದೆ. ಆದರೆ, ಸರ್ಕಾರ ಚುನಾವಣೆ ನಡೆಸದೇ ಆಡಳಿತಾಧಿಕಾರಿಯನ್ನು ನೇಮಕ ಮಾಡುವ ಆಲೋಚನೆ ನಡೆಸುತ್ತಿದೆ. ಮಂಡ್ಯ ಹಾಲು ಒಕ್ಕೂಟದಲ್ಲಿ ಕಾಂಗ್ರೆಸ್ ನಿರ್ದೇಶಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಒಕ್ಕೂಟ ಚೆನ್ನಾಗಿ ಕೆಲಸ ಮಾಡಿಕೊಂಡು ಹೋಗುತ್ತಿದೆ. ಅದನ್ನು ತಡೆಯುವ ಪ್ರಯತ್ನ ನಡೆಯುತ್ತಿದೆ ಎಂದು ಚೆಲುವರಾಯಸ್ವಾಮಿ ಆರೋಪಿಸಿದರು.