ದಾವಣಗೆರೆ: ಪರಿಶಿಷ್ಟ ಪಂಗಡಕ್ಕೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಅನ್ವಯ ಆಗುವಂತೆ ಶೇ. 7.5 ಮೀಸಲಾತಿ ಒದಗಿಸುವ ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ವರದಿ ಜಾರಿಗೆ ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಬೆಂಬಲಿಸಿ ಸೋಮವಾರ ಎಸ್‌ಸಿ-ಎಸ್‌ಟಿ ಸ್ವಾಭಿಮಾನಿ ಒಕ್ಕೂಟ, ಜಿಲ್ಲಾ ನಾಯಕ ಸಮಾಜ ಇತರೆ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಅಂಬೇಡ್ಕರ್ ವೃತ್ತದಲ್ಲಿ ಕೆಲ ಕಾಲ ಮಾನವ ಸರಪಳಿ ರಚಿಸಿ ಪ್ರತಿಭಟಿಸಲಾಯಿತು. ನ್ಯಾಯಮೂರ್ತಿ ಎಚ್. ಎನ್. ನಾಗಮೋಹನ ದಾಸ್ ಆಯೋಗದ ವರದಿಯನ್ನು ಸರ್ಕಾರ ಯಥಾವತ್ತಾಗಿ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದ್ಯಾಂತ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು. ಮುಂದಿನ ದಿನಗಳಲ್ಲಿ ಸರ್ಕಾರವನ್ನು ಧೂಳೀಪಟ ಮಾಡಲಾಗುವುದು ಎಂದು ಎಚ್ಚರಿಸಿದರು. ಅಂಬೇಡ್ಕರ್ ವೃತ್ತದಿಂದ ಮಳೆಯಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಹೋರಾಟಕ್ಕೆ ಚಾಲನೆ ನೀಡಿದ ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಮಾತನಾಡಿ, ಪರಿಶಿಷ್ಟ ಪಂಗಡಕ್ಕೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಅನ್ವಯ ಆಗುವಂತೆ ಶೇ. 7.5 ಮೀಸಲಾತಿ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಯವರು ಕಳೆದ 151 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಚಳಿ, ಮಳೆ ಗಾಳಿ ಎನ್ನದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ದೇವೇಗೌಡ ಅನೇಕರು ಭೇಟಿ ನೀಡಿದ್ದಾರೆ. ಆದರೆ ಈವರೆಗೆ ಬೇಡಿಕೆ ಈಡೇರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ 151 ಜಾತಿಗಳಿಗೆ ಅನುಕೂಲ ಆಗುವಂತೆ ಮೀಸಲಾತಿ ಸೌಲಭ್ಯಕ್ಕೆ ಒತ್ತಾಯಿಸಿ ಸ್ವಾಮೀಜಿಯವರು ನಿರಂತರ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಪರಿಶಿಷ್ಟರನ್ನು ನಿರ್ಲಕ್ಷ್ಯ ಮಾಡುತ್ತಿದೆ. ಈಗ್ಗೂ ಶಾಂತಿಯುತ ಹೋರಾಟ ನಡೆಸುತ್ತಿದ್ದೇವೆ. ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಹಿಂದುಳಿದ ವರ್ಗಗಳ ಎಲ್ಲ ಸ್ವಾಮೀಜಿಗಳು ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ದಸಂಸ ಮುಖಂಡ ಡಾ| ಎನ್. ಮೂರ್ತಿ ಮಾತನಾಡಿ, ವಾಲ್ಮೀಕಿ ಸ್ವಾಮೀಜಿಯವರು ಮೀಸಲಾತಿಗೆ ಒತ್ತಾಯಿಸಿ ಕಳೆದ 151 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಬೇಡಿಕೆ ಈಡೇರಿಸಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 15 ದಿನಗಳಲ್ಲಿ ಬೇಡಿಕೆ ಈಡೇರಿಸಲಾಗುವುದು ಎಂದು ಹೇಳಿದ್ದರು. ಈಗಿನ ಮುಖ್ಯಮಂತ್ರಿ ಭರವಸೆ ನೀಡಿದ್ದರೂ ಕಾರ್ಯರೂಪಕ್ಕೆ ಬಂದಿಲ್ಲ. ಬರೀ ಸುಳ್ಳು, ವಂಚನೆ ಮಾಡಲಾಗುತ್ತಿದೆ.
ಮೀಸಲಾತಿ ಒದಗಿಸದಿದ್ದಲ್ಲಿ ಮುಂದಿನ ಚುನಾವಣೆಯಲ್ಲಿ ಧೂಳಿಪಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ವಿಧಾನ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಟಾರ್, ಯುವ ಮುಖಂಡ ಎಚ್.ಎಸ್. ನಾಗರಾಜ್, ಬಿ. ವೀರಣ್ಣ, ಹೊದಿಗೆರೆ ರಮೇಶ್, ಎನ್.ಎಂ. ಆಂಜನೇಯ ಗುರೂಜಿ, ಪ್ರೊ| ಎ.ಬಿ. ರಾಮಚಂದ್ರ, ಜಿಗಳಿ ಪ್ರಕಾಶ್, ಹದಡಿ ಹಾಲಪ್ಪ, ಪ್ರೊ| ಎ.ಬಿ. ರಾಮಚಂದ್ರಪ್ಪ, ಇಂದ್ರಮ್ಮ, ಆವರಗೆರೆ ವಾಸು, ಫಣಿಯಾಪುರ ಲಿಂಗರಾಜ್, ಕೆ.ಪಿ. ಪಾಲಯ್ಯ ವಿಜಯಲಕ್ಷ್ಮಿ, ಶಿವರುದ್ರಪ್ಪ, ನಂಜಾ ನಾಯ್ಕ, ರಾಮಪ್ಪ ಇತರರು ಇದ್ದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ 151 ಜಾತಿಗಳಿಗೆ ಅನುಕೂಲ ಆಗುವಂತೆ ಮೀಸಲಾತಿ ಸೌಲಭ್ಯಕ್ಕೆ ಒತ್ತಾಯಿಸಿ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಯವರು 150ಕ್ಕೂ ಹೆಚ್ಚು ದಿನಗಳಿಂದ ಧರಣಿ ನಡೆಸುತ್ತಿದರೂ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಮುಖ್ಯಮಂತ್ರಿಗಳು ಧರಣಿ ಸ್ಥಳಕ್ಕೆ ಬಂದರೂ ಸೂಕ್ತ ಆಶ್ವಾಸನೆ ನೀಡಿಲ್ಲ. ಕೂಡಲೇ ಬೇಡಿಕೆ ಈಡೇರಿಸಬೇಕು.
ಎಸ್. ರಾಮಪ್ಪ, ಹರಿಹರ ಶಾಸಕರು