Advertisement

ಜೆಡಿಎಸ್‌ ಅಧಿಕಾರಕ್ಕೆ ಬಂದರೆ 25 ಸಾವಿರ ಕೋಟಿಯ ಕೃಷಿ ನೀತಿ: ಎಚ್‌ಡಿಕೆ

06:55 AM Apr 14, 2018 | Team Udayavani |

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ರೈತರು ಬೀದಿಯಲ್ಲಿ ನಿಂತು ಹೋರಾಟಕ್ಕೆ ಅವಕಾಶ ನೀಡುವುದಿಲ್ಲ. 25 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕೃಷಿ ನೀತಿ ಜಾರಿಗೆ ತಂದು ರೈತರ ಸಾಲ ಮನ್ನಾ ಜತೆಗೆ ಮತ್ತೆ ಅವರು ಸಾಲದ ಶೂಲಕ್ಕೆ ಸಿಲುಕದಂತೆ ನೋಡಿಕೊಳ್ಳುವುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Advertisement

ನಗರದ ಕಾರ್ಪೋರೇಷನ್‌ ಸರ್ಕಲ್‌ ಬಳಿ ಇರುವ ದೇವಾಂಗ ಸಂಘದ ಸಭಾಂಗಣದಲ್ಲಿ ಶುಕ್ರವಾರ ರೇಷ್ಮೆ ಬೆಳೆಗಾರರು, ರೇಷ್ಮೆ ಮೊಟ್ಟೆ ಉತ್ಪಾದಕರು, ನೂಲು ಬಿಚ್ಚಾಣಿಕೆದಾರರು ಮತ್ತು ನೇಕಾರರ ಜತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಪ್ರಸ್ತುತ ಇರುವ ಕೃಷಿ ನೀತಿ ಬದಲಾವಣೆ ಮಾಡಿ ಹೊಸ ಕೃಷಿ ನೀತಿ ಜಾರಿಗೊಳಿಸಲಾಗುವುದು. ಈ ನೀತಿಯ ಜಾರಿಗೆ 25 ಸಾವಿರ ಕೋಟಿ ರೂ. ಅನುದಾನ ಒದಗಿಸುವುದರ ಜತೆಗೆ ರೈತರ ಸಾಲ ಮನ್ನಾ ಮಾಡಲಾಗುವುದು. ಅಲ್ಲದೆ, ಮತ್ತೆ ರೈತರು ಸಾಲದ ಶೂಲಕ್ಕೆ ಸಿಲುಕದಂತೆ ನೋಡಿಕೊಳ್ಳಲಾಗುವುದು ಎಂದರು.

ರೇಷ್ಮೆ ಬೆಳೆಗಾರರ ಅನುಕೂಲಕ್ಕಾಗಿ ರೇಷ್ಮೆ ಕಾರಿಡಾರ್‌ ನಿರ್ಮಾಣ, ಮ್ಯೂಸಿಯಂ ಸ್ಥಾಪನೆ, ರೇಷ್ಮೆಗೂ ಬೆಂಬಲ ಬೆಲೆ ನೀಡುವ ಯೋಜನೆಗಳನ್ನು ಜಾರಿಗೆ ತರುವುದರೊಂದಿಗೆ ಪ್ರತಿ ತಿಂಗಳು ವಿಧಾನಸೌಧದಲ್ಲಿ ರೇಷ್ಮೆ ಬೆಳೆಗಾರರೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಪ್ರಯತ್ನ ಮಾಡಲಾಗುವುದು. ಪ್ರಗತಿಪರ ರೇಷ್ಮೆ ಬೆಳೆಗಾರರಿಗೆ ಸೂಕ್ತ ಸ್ಥಾನಮಾನ ನೀಡುವ ಮೂಲಕ ರೇಷ್ಮೆ ಉದ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ಭರವಸೆ ನೀಡಿದರು.

ರೇಷ್ಮೆ ಕೃಷಿ ಮಾತ್ರವಲ್ಲದೆ, ನೂಲು ಬಿಚ್ಚಣಿತೆದಾರರು, ನೇಕಾರ ಸಮುದಾಯಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ ಅವರು, ರಾಜ್ಯದಲ್ಲಿ ಜೆಡಿಎಸ್‌ ಅಭ್ಯರ್ಥಿ ಯಾರೇ ಆಗಿರಲಿ, ಕುಮಾರಸ್ವಾಮಿ ನಿಮ್ಮ ಮುಂದೆ ನಿಂತಿದ್ದೇನೆ ಎಂದುಕೊಂಡು ಮತಹಾಕುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಮನವಿ ಮಾಡಿದರು. ರಾಜ್ಯದ ವಿವಿಧೆಡೆಗಳಿಂದ ಬಂದಿದ್ದ ರೇಷ್ಮೆ ಬೆಳೆಗಾರರು, ನೂಲು ಬಿಚ್ಚಣಿಕೆದಾರರು, ನೇಕಾರರು ಪಾಲ್ಗೊಂಡಿದ್ದರು.

ಅಧಿಕಾರಕ್ಕಾಗಿ ಯಾರ ಮನೆ ಬಾಗಿಲಿಗೂ ಹೋಗಲ್ಲ
ಬೆಂಗಳೂರು:
ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣಾವದರೆ ಕಾಂಗ್ರೆಸ್‌ ಅಥವಾ ಬಿಜೆಪಿ ಮನೆ ಬಾಗಿಲಿಗೆ ಹೋಗದೆ ಅಧಿಕಾರದಿಂದ ದೂರವೇ ಉಳಿಯುವುದಾಗಿ ಜೆಡಿಎಸ್‌ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Advertisement

ನಗರದ ಕಾರ್ಪೋರೇಷನ್‌ ಸರ್ಕಲ್‌ ಬಳಿ ಇರುವ ದೇವಾಂಗ ಸಂಘದ ಸಭಾಂಗಣದಲ್ಲಿ ಶುಕ್ರವಾರ ರೇಷ್ಮೆ ಬೆಳೆಗಾರರು, ರೇಷ್ಮೆ ಮೊಟ್ಟೆ ಉತ್ಪಾದಕರು, ನೂಲು ಬಿಚ್ಚಾಣಿಕೆದಾರರು ಮತ್ತು ನೇಕಾರರ ಜತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಧಿಕಾರಕ್ಕಾಗಿ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗುವ ಸಂದರ್ಭ ಎದುರಾದರೆ ಅದರಿಂದ ದೂರವೇ ಉಳಿಯುತ್ತೇನೆ ಎಂದು ಹೇಳಿದ ಅವರು, ಈ ಬಾರಿ ಜೆಡಿಎಸ್‌ಗೆ ಅಧಿಕಾರ ನೀಡಿ ಐದು ವರ್ಷ ನನ್ನನ್ನು ಪರೀಕ್ಷೆ ಮಾಡಿ. ನನಗೂ ಒಂದು ಬಾರಿ ಅವಕಾಶ ಕೊಡಿ ಎಂದು ಮನವಿ ಮಾಡಿದರು.

ಜೆಡಿಎಸ್‌ ಅಧಿಕಾರಕ್ಕೆ ಬರುವ ವಿಚಾರದಲ್ಲಿ ನಾನು ಭ್ರಮಾಲೋಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ, ನಾನು ಭ್ರಮಾಲೋಕದಲ್ಲಿಲ್ಲ, ಜನತಾ ಲೋಕದಲ್ಲಿದ್ದೇನೆ. ಇನ್ನು ಒಂದು ತಿಂಗಳು ಕಾದರೆ ಯಾರು ಭ್ರಮಾಲೋಕದಲ್ಲಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದ ಕುಮಾರಸ್ವಾಮಿ, ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಬರುವುದಿಲ್ಲ. ಜೆಡಿಎಸ್‌ ಅಧಿಕಾರಕ್ಕೆ ಬರುತ್ತದೆ ಎಂಬ ಭರವಸೆ ಇದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next