ವಿಜಯಪುರ: ಬೆಂಗಳೂರಿನಲ್ಲಿ ಅನಾಥಾಶ್ರಮದ ಹೆಸರಿನಲ್ಲಿ ನಡೆಯುತ್ತಿರುವ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಕಂಡು ಬಂದಿದ್ದರೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
ಮಂಗಳವಾರ ನಗರದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಅನಾಥಾಶ್ರಮದ ಹೆಸರಿನಲ್ಲಿ ನಡೆಯುತ್ತಿರುವ ಕೇಂದ್ರದಲ್ಲಿ ತಾಲಿಬಾನ್ ಮಾದರಿ ಶಿಕ್ಷಣ ನೀಡುತ್ತಿರುವ ಬಗ್ಗೆ ನನಗೆ ಗೊತ್ತಿಲ್ಲ, ಅಂಥ ಸಂಗತಿ ನನ್ನ ಗಮನಕ್ಕಿಲ್ಲ. ಆದರೆ ಸದರಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಕಂಡುಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಮೂಲಭೂತ ಸೌಕರ್ಯಗಳ ಕೊರತೆಯ ಅನಾಥಾಶ್ರಮ ಖಾಸಗಿಯಾಗಿದ್ದರೆ ನೇರ ಕ್ರಮ ಕೈಗೊಳ್ಳುತ್ತೇವೆ. ಸರ್ಕಾರದ ಮೂಲಕ ನಡೆಯುತ್ತಿದ್ದರೆ ಲೋಪ ಆಗಿರುವ ಕುರಿತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗುತ್ತದೆ. ಒಂದೊಮ್ಮೆ ತಪ್ಪು ಅಗಿದ್ದು ಕಂಡುಬಂದರೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಿವರಿಸಿದರು.
ರಾಯಚೂರು ಶಾಖೋತ್ಪನ್ನ ವಿದ್ಯುತ್ ಘಟಕದಲ್ಲಿ ಕಲ್ಲಿದ್ದಲು ಕಳ್ಳತನ ಪ್ರಕರಣದ ಕುರಿತು ನನಗೆ ನಿಖರವಾಗಿ ಮಾಹಿತಿ ಇಲ್ಲ. ಭದ್ರತಾ ಲೋಪವಾಗಿದ್ದರೆ, ವೈಫಲ್ಯಕ್ಕೆ ಕಾರಣವಾದವರ ವಿರುದ್ಧ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದರು.
ಇದರ ಹೊರತಾಗಿ ಸರ್ಕಾರ ಆರ್.ಟಿ.ಪಿ.ಎಸ್. ಅಧಿಕಾರಿಗಳಿಂದ ಈ ಕುರಿತು ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಜೊತೆಗೆ ಕಲ್ಲಿದ್ದಲು ಕಳ್ಳತನ ನಡೆದಿರುವ ಘಟನೆ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದರು.