ಮಡಿಕೇರಿ: ಜಿಲ್ಲೆಯ ನಾನಾ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಇಂತಹ ಕಡೆಗಳಲ್ಲಿ ತ್ವರಿತವಾಗಿ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ನಿರ್ದೇಶ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರು ಹಾಗೂ ಬರ ನಿರ್ವಹಣೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಡಿಯುವ ನೀರು ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಸಂಬಂಧ ಸಮಸ್ಯೆಗಳು ಕೇಳಿ ಬಂದಲ್ಲಿ ತಕ್ಷಣವೇ ತಹಶೀಲ್ದಾರ್‌ರು, ಸಂಬಂಧಪಟ್ಟ ಎಂಜಿನಿಯರ್‌ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ಸೂಚಿಸಿದರು.
ಕುಡಿಯುವ ನೀರಿನ ಸಮಸ್ಯೆ ಇದೆ ಎಂಬ ದೂರುಗಳು ಕೇಳಿ ಬರದಂತೆ ನೋಡಿಕೊಳ್ಳುವುದು ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸುವಂತೆ ಪಿ.ಶಿವರಾಜು ಅವರು ನಿರ್ದೇಶನ ನೀಡಿದರು.
ಜಾನುವಾರುಗಳಿಗೆ ಮೇವು,ಗೋಶಾಲೆ ತೆರೆಯುವುದು, ಮೇವು ಬ್ಯಾಂಕ್ ನಿರ್ಮಾಣ ಮತ್ತಿತರ ಬಗ್ಗೆ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಮಳೆಗಾಲಕ್ಕೆ ಈಗಿನಿಂದಲೇ ಅಗತ್ಯ ತಯಾರಿ ಮಾಡಿಕೊಳ್ಳಬೇಕಿದೆ. ಅಧಿಕಾರಿಗಳು ಪ್ರಕೃತಿ ವಿಕೋಪ ಸಂಭವಿಸಿದ ಗ್ರಾಮಗಳಿಗೆ ಭೇಟಿ ನೀಡುವ ಮೂಲಕ ಸದ್ಯದ ಸ್ಥಿತಿಗತಿಯಯನ್ನು ಪಡೆದುಕೊಳ್ಳ ಅವರು ನಿರ್ದೇಶನ ನೀಡಿದರು.ಜಿ.ಪಂ.ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಂಜಿನಿಯರ್ ರೇವಣ್ಣವರ್ ಅವರು ಕ, ಕುಡಿಯುವ ನೀರು ಸಂಬಂಧ ಹೆಚ್ಚಿನ ಗಮನಹರಿಸಲಾಗಿದೆ ಎಂದು ಅವರು ತಿಳಿಸಿದರು. ಕಳೆದ ವರ್ಷ ಟಾಸ್ಕ್ಪೋರ್ಸ್‌ನಡಿ ಮೂರು ತಾಲೂಕಿಗೆ ತಲಾ 75 ಲಕ್ಷದಂತೆ ಒಟ್ಟು 225 ಲಕ್ಷ ರೂ.ನಲ್ಲಿ 149 ಲಕ್ಷ ರೂ. ಬಿಡುಗಡೆಯಾಗಿದ್ದು, 107 ಕಾಮಗಾರಿ ತೆಗೆದುಕೊಳ್ಳಲಾಗಿದೆ. ಇದರಲ್ಲಿ 68 ಕಾಮಗಾರಿಗಳು ಪೂರ್ಣಗೊಂಡಿವೆ. 15 ಕಾಮಗಾರಿಗಳು ಪ್ರಗತಿಯಲ್ಲಿದೆ. 24 ಕಾಮಗಾರಿಗಳನ್ನು ಪ್ರಾರಂಭಿಸಬೇಕಿದೆ ಎಂದು ತಿಳಿಸಿದರು.